ಬೆಳಗಾವಿ ಲೋಕಸಭಾ ಉಪ ಚುನಾವಣೆ: ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ
ಬೆಳಗಾವಿ, ಮಾರ್ಚ್ 29: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷದಿಂದ ಸತೀಶ್ ಜಾರಕಿಹೊಳಿ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಹರೀಶಕುಮಾರ್.ಕೆ ಅವರಿಗೆ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹಾಜರಿದ್ದರು.
ಯಮಕನಮರಡಿ ಕಾಂಗ್ರೆಸ್ ಶಾಸಕರಾಗಿರುವ ಸತೀಶ್ ಜಾರಕಿಹೊಳಿ ಅವರಿಗೆ ಕಾಂಗ್ರೆಸ್ ಪಕ್ಷ ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಘೋಷಿಸಿತ್ತು. ಜೆಡಿಎಸ್ ಈ ಬಾರಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದು, ಇದು ಯಾರಿಗೆ ಲಾಭ ತಂದು ಕೊಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಮಾಜಿ ಕೇಂದ್ರ ಸಚಿವ ದಿ.ಸುರೇಶ್ ಅಂಗಡಿ ಅವರ ಸಾವಿನಿಂದ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದ್ದು, ಮಾ.30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಬಿಜೆಪಿಯಿಂದ ದಿ.ಸುರೇಶ್ ಅಂಗಡಿ ಅವರ ಪತ್ನಿ ಮಂಗಲ ಸುರೇಶ್ ಅಂಗಡಿ ಅವರು ಸ್ಪರ್ಧಿಸಿದ್ದು, ಬೆಳಗಾವಿ ಲೋಕಸಭಾ ಚುನಾವಣೆ ಹಿಂದೆಂದಿಗಿಂತಲೂ ರೋಚಕತೆ ಪಡೆದಿದೆ. ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಮತದಾನ ನಡೆಯಲಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ.












Click it and Unblock the Notifications