Vande Bharat Express: ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲು, ವೇಳಾಪಟ್ಟಿ ಬಿಡುಗಡೆ

ಬೆಳಗಾವಿ, ಫೆಬ್ರವರಿ 11: ಕುಂದಾನಗರಿ ಬೆಳಗಾವಿ ಜನರ ಬೇಡಿಕೆ ಕೊನೆಗೂ ಈಡೇರಿದೆ. ಬೆಂಗಳೂರು-ಬೆಳಗಾವಿ ನಡುವೆ ವಂದೇ ಭಾರತ್ ರೈಲು ಸಂಚಾರ ನಡೆಸಬೇಕು ಎಂಬ ಬೇಡಿಕೆಗೆ ರೈಲ್ವೆ ಇಲಾಖೆ ಒಪ್ಪಿಗೆ ನೀಡಿದೆ. ಉಭಯ ನಗರಗಳ ನಡುವೆ ಶೀಘ್ರವೇ ವಂದೇ ಭಾರತ್ ರೈಲು ಸಂಚಾರ ಆರಂಭವಾಗಲಿದ್ದು, ವೇಳಾಪಟ್ಟಿ ಬಿಡುಗಡೆಯಾಗಲಿದೆ ಎಂದು ಕೇಂದ್ರ ಸಚಿವರು ಮತ್ತು ಬೆಳಗಾವಿಯ ಸಂಸದರು ಭರವಸೆ ಕೊಟ್ಟಿದ್ದಾರೆ.

ಧಾರವಾಡ ಸಂಸದ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ಮಾಡಿದ್ದರು. ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲನ್ನು ಬೆಳಗಾವಿ ತನಕ ವಿಸ್ತರಣೆ ಮಾಡಲು ಮನವಿ ಸಲ್ಲಿಸಿದ್ದು, ಸಚಿವರು ಸಹ ಸಮ್ಮತಿ ನೀಡಿದ್ದಾರೆ.

Bengaluru Dharwad Vande Bharat Express Train Extend To Belagvi Soon

ಸಚಿವ ಪ್ರಹ್ಲಾದ್ ಜೋಶಿ ಮತ್ತು ಸಂಸದ ಜಗದೀಶ್ ಶೆಟ್ಟರ್ ಈ ಕುರಿತು ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಮಾಹಿತಿ ನೀಡಿದ್ದಾರೆ. ಅತಿ ಶೀಘ್ರದಲ್ಲಿಯೇ ಬೆಂಗಳೂರು-ಬೆಳಗಾವಿ ಮಧ್ಯೆ ವಂದೇ ಭಾರತ್ ರೈಲು ಸಂಚರಿಸಲಿದೆ. ರೈಲಿನ ಆರಂಭದ ವೇಳಾಪಟ್ಟಿ ಬಿಡುಗಡೆಯಾಗಲಿದೆ ಎಂದು ಮಾಹಿತಿ ಕೊಟ್ಟಿದ್ದಾರೆ.

ಪ್ರಾಯೋಗಿಕ ಸಂಚಾರ ಪೂರ್ಣಗೊಂಡಿದೆ: ಸದ್ಯ ಕೆಎಸ್ಆರ್ ಬೆಂಗಳೂರು-ಧಾರವಾಡ ನಡುವೆ ವಂದೇ ಭಾರತ್ ರೈಲು ಸಂಚಾರವನ್ನು ನಡೆಸುತ್ತಿದೆ. ಈ ರೈಲನ್ನು ಬೆಳಗಾವಿ ತನಕ ವಿಸ್ತರಣೆ ಮಾಡಬೇಕು ಎಂಬುದು ಬೇಡಿಕೆಯಾಗಿತ್ತು. ಇದಕ್ಕೆ ರೈಲ್ವೆ ಇಲಾಖೆ ಒಪ್ಪಿಗೆಯನ್ನು ನೀಡಿತ್ತು.

ಬೆಂಗಳೂರು-ಧಾರವಾಡ ವಯಾ ಹುಬ್ಬಳ್ಳಿ ನಡುವಿನ ರೈಲು ಸಂಖ್ಯೆ 20662/ 20661 ಬೆಳಗಾವಿ ತನಕ ವಿಸ್ತರಣೆ ಮಾಡಲು ಅನುಕೂಲವಾಗುವಂತೆ ರೈಲ್ವೆ ಇಲಾಖೆ ನವೆಂಬರ್ 21, 2023ರಂದು ಪ್ರಾಯೋಗಿಕ ಸಂಚಾರವನ್ನು ನಡೆಸಿತ್ತು, ಇದು ಯಶಸ್ವಿಯಾಗಿತ್ತು. ಆದರೆ ರೈಲು ಸೇವೆ ಇನ್ನೂ ಆರಂಭವಾಗಿರಲಿಲ್ಲ.

ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಮತ್ತು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಭೇಟಿಯಾಗಿ ಈ ಕುರಿತು ಚರ್ಚಿಸಿದರು. ಬೆಂಗಳೂರಿನಿಂದ ಬೆಳಗಾವಿವರೆಗೆ ವಂದೇ ಭಾರತ್ ರೈಲು ಸಂಚಾರ ಕುರಿತ ಸಾಧಕ-ಬಾಧಕ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು.

ವಂದೇ ಭಾರತ್ ರೈಲನ್ನು ಬೆಳಗಾವಿವರೆಗೆ ವಿಸ್ತರಿಸುವ ಕುರಿತು ಈ ಹಿಂದೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹಾಗೂ ಬೆಳಗಾವಿ ಶಾಸಕ ಅಭಯ ಪಾಟೀಲ್ ಸಹ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿಯೂ ಈ ಕುರಿತು ಅಭಿಯಾನ ನಡೆಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ತನಕ ಮನವಿ ಸಲ್ಲಿಕೆ ಮಾಡಲಾಗಿತ್ತು.

ವಂದೇ ಭಾರತ್ ರೈಲಿಗೆ ಇರುವ ಬೇಡಿಕೆ ಹಿನ್ನಲೆಯಲ್ಲಿ ಕೆಲವು ದಿನಗಳ ಹಿಂದೆ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯ ನೈಋತ್ಯ ವಲಯದ ರೈಲ್ವೆ ಜನರಲ್ ಮ್ಯಾನೇಜರ್, ಡಿಆರ್‌ಎಂ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬೆಂಗಳೂರಿನಿಂದ ಬೆಳಗಾವಿವರೆಗೆ ವಂದೇ ಭಾರತ್ ರೈಲು ಸಂಚಾರ ವಿಸ್ತರಣೆ ಬಗ್ಗೆ ವರದಿ ನೀಡುವಂತೆ ಸೂಚಿಸಿದ್ದರು.

ವಂದೇ ಭಾರತ್ ರೈಲು ಬೆಳಗ್ಗೆ ಬೆಳಗಾವಿಯಿಂದ ಹೊರಟು ಬೆಂಗಳೂರು ತಲುಪಿ ಮತ್ತೆ ಬೆಂಗಳೂರಿಂದ ಬೆಳಗಾವಿಗೆ ರಾತ್ರಿ ತಲುಪುವ ಹಾಗೆ ವೇಳಾಪಟ್ಟಿ ನಿಗದಿಗೊಳಿಸಿ ಎಂದು ಪ್ರಹ್ಲಾದ್ ಜೋಶಿ ರೈಲ್ವೆ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ಕೊಟ್ಟಿದ್ದರು.

ಅಧಿಕಾರಿಗಳು ತಾಂತ್ರಿಕ ಅಂಶಗಳನ್ನು ವಿಶ್ಲೇಷಿಸಿ, ಸಾಧಕ-ಬಾಧಕಗಳನ್ನು ಅವಲೋಕಿಸಿ ವರದಿ ಸಲ್ಲಿಸಿದ್ದರು. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಈ ವರದಿ ಪರಿಗಣಿಸಿ ಬೆಂಗಳೂರು-ಬೆಳಗಾವಿ ನಡುವೆ ವಂದೇ ಭಾರತ್ ರೈಲು ಸಂಚಾರಕ್ಕೆ ಒಪ್ಪಿಗೆ ನೀಡಿದ್ದಾರೆ.

ಸಚಿವ ಪ್ರಹ್ಲಾದ್ ಜೋಶಿ ಅತೀ ಶೀಘ್ರದಲ್ಲಿಯೇ ಬೆಳಗಾವಿ-ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲು ಸಂಚಾರದ ವೇಳಾಪಟ್ಟಿ ಬಿಡುಗಡೆಯಾಗಲಿದೆ. ಈ ರೈಲು ಸಂಚಾರದಿಂದ ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿ ಭಾಗದ ಜನತೆಗೆ ಬೆಂಗಳೂರು ಪ್ರಯಾಣಕ್ಕೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ. ನಮ್ಮ ಮನವಿಗೆ ಸ್ಪಂದಿಸಿ ವಂದೇ ಭಾರತ್ ರೈಲನ್ನು ಬೆಳಗಾವಿ ತನಕ ವಿಸ್ತರಿಸಲು ಒಪ್ಪಿಗೆ ನೀಡಿದ ಕೇಂದ್ರ ರೈಲ್ವೆ ಸಚಿವರಿಗೆ ಧನ್ಯವಾದ ಅರ್ಪಿಸುವೆ ಎಂದು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+