ಜಾತಿಯ ಲಾಭ ಪಡೆದವರಿಂದಲೇ ಅಸಮಾನತೆಯ ಪೋಷಣೆ
ಈ ಹಿಂದೆ ಮದುವೆ ಕೂಡ ಜಾತಿ ಆಧಾರದಲ್ಲಿ ಏರ್ಪಡಿಸಲಾಗುತ್ತಿತ್ತು. ವ್ಯಕ್ತಿಯ ಯೋಗ್ಯತೆ ಜಾತಿ, ವರ್ಣ ವ್ಯವಸ್ಥೆ ಆಧಾರದ ಮೇಲೆ ನಿರ್ಧಾರವಾಗುತ್ತಿತ್ತು. ಪ್ರತಿಭೆ ಕೂಡ ಯೋಗ್ಯತೆ ಆಧಾರದ ಮೇಲೆ ನಿರ್ಧಾರ ಆಗದೆ, ಜಾತಿ ಆಧಾರದಲ್ಲಿ ನಿರ್ಧರಿಸಲಾಗುತ್ತಿತ್ತು. ಜಾತಿ ವ್ಯವಸ್ಥೆಯಿಂದ ಲಾಭ ಪಡೆಯುತ್ತಿರುವ ಪಟ್ಟ ಭದ್ರರು ಜಾತಿ ವ್ಯವಸ್ಥೆಯ ಅಸಮಾನತೆಯನ್ನು ಪೋಷಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.
ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ಅನುಭವ ಮಂಟಪದ ತೈಲಚಿತ್ರ ಅಳವಡಿಸಿದ್ದರ ಸಂಬಂಧ ವಿಧಾನಸಭೆಯಲ್ಲಿ ನಡೆದ ಚರ್ಚೆಯ ವೇಳೆ ಸಿಎಂ ಈ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಅನುಭವ ಮಂಟಪದ ತೈಲಚಿತ್ರದ ಅನಾವರಣ ನನ್ನ ಕೈಯಿಂದ ಆಗಿರುವುದು ನನ್ನ ಸೌಭಾಗ್ಯ ಎಂದು ಭಾವಿಸಿದ್ದೇನೆ ಎಂದಿದ್ದಾರೆ.

12ನೇ ಶತಮಾನದಲ್ಲಿ ಅಸಮಾನತೆ, ಜಾತಿ ವ್ಯವಸ್ಥೆ, ಮನುಷ್ಯ ಶೋಷಣೆಯ ವ್ಯವಸ್ಥೆ ಹೋಗಲಾಡಿಸಿ, ಜಾತಿರಹಿತ ಸಮ ಸಮಾಜ ತರಬೇಕು ಎನ್ನುವ ಉದ್ದೇಶದಿಂದ ಬಸವಾದಿ ಶರಣರು ಸಾಮಾಜಿಕ ಕ್ರಾಂತಿಯನ್ನು ಮಾಡಿದರು. ಮೇಲು ಕೀಳು ಇದ್ದರೆ, ಮನುಷ್ಯ ತಾರತಮ್ಯ ಇದ್ದರೆ ಅದು ಧರ್ಮವಾಗಲು ಸಾಧ್ಯವಿಲ್ಲ. ದಯೆಯೇ ಧರ್ಮದ ಮೂಲ ಎಂದು ಅವಿದ್ಯಾವಂತರಿಗೂ ಅರ್ಥ ಆಗುವಂತೆ ಶರಣರು ಧರ್ಮವನ್ನು ಬೋಧಿಸಿದ್ದರು ಎಂದು ಹೇಳಿದ್ದಾರೆ.
ಇಂದಿನ ಪಾರ್ಲಿಮೆಂಟೇ ಅಂದಿನ ಅನುಭವ ಮಂಟಪ: ಹುಟ್ಟುವಾಗ ಎಲ್ಲರೂ ವಿಶ್ವ ಮಾನವರೇ ಎಂದು ಕುವೆಂಪು ಹೇಳಿದರೆ, ಕುಲ ಕುಲವೆಂದು ಬಡಿದಾಡದಿರಿ ಎಂದು ಕನಕದಾಸರು ಹೇಳಿದ್ದಾರೆ. ಇವತ್ತಿನ ವಿಧಾನಸಭೆ, ಇವತ್ತಿನ ಪಾರ್ಲಿಮೆಂಟೇ ಅವತ್ತಿನ ಅನುಭವ ಮಂಟಪ. ಅತ್ಯಂತ ಕೆಳ ಸಮುದಾಯದ ಅಲ್ಲಮಪ್ರಭು ಅದರ ಅಧ್ಯಕ್ಷರಾಗಿದ್ದರು. ಎಲ್ಲ ಜಾತಿಯ ಪ್ರತಿನಿಧಿಗಳು, ಮಹಿಳಾ ಪ್ರತಿನಿಧಿ ಶರಣ ಶರಣೆಯರೂ ಅನುಭವ ಮಂಟಪದ ಸದಸ್ಯರಾಗಿದ್ದರು ಎಂದು ಸಿದ್ದರಾಮಯ್ಯ ನೆನೆದಿದ್ದಾರೆ.
ಬುದ್ಧನ ಕಾಲದಲ್ಲೂ ಈ ರೀತಿಯ ಸರ್ವ ಜಾತಿ , ಸರ್ವ ಧರ್ಮದ ಪ್ರತಿನಿಧಿಗಳನ್ನು ಒಳಗೊಂಡ ಮಂಟಪಗಳಿದ್ದವು ಎಂದು ಚರಿತ್ರೆಯಲ್ಲಿ ಓದಿದ್ದೇವೆ. ಹೀಗಾಗಿ ಅಂಬೇಡ್ಕರ್ ಅವರ ಮಾತು, ಇತಿಹಾಸ ತಿಳಿಯದವರು ಇತಿಹಾಸ ಸೃಷ್ಟಿಸಲಾರರು ಎನ್ನುವ ಮಾತನ್ನು ಸ್ಮರಿಸಬೇಕು.
ಶೂದ್ರರು ಮತ್ತು ಮಹಿಳೆಯರಿಗೆ ಶಿಕ್ಷಣವನ್ನು ನಿಷೇಧಿಸಲಾಗಿತ್ತು. ಈ ನಿಷೇಧ ಬಸವಾದಿ ಶರಣರ ಕಾಲದಲ್ಲಿ ಇರಲಿಲ್ಲ ಎಂದು ಹೇಳಿದ್ದಾರೆ.

ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ನಮ್ಮ ಸಮಾಜ ಚಲನೆ ರಹಿತವಾಗಿದೆ ಎಂದು ರಾಮ ಮನೋಹರ ಲೋಹಿಯಾ ಅವರು ಹೇಳಿದ್ದರು. ಆರ್ಥಿಕ ಮತ್ತು ಸಾಮಾಜಿಕ ಚಲನೆ ಸಿಕ್ಕಾಗ ಮಾತ್ರ ಸಮಾಜದ ಚಲನೆ ಸಾಧ್ಯ. ಜಾತಿ ವ್ಯವಸ್ಥೆ ಬಾವಿಯೊಳಗಿನ ಕಸದಂತೆ. ನೀರು ಸೇದಲು ಕೊಡ ಬಾವಿಗಿಳಿಸಿ, ಕದಕಿದಾಗ ಕಸ ಪಕ್ಕಕ್ಕೆ ಸರಿಯುತ್ತದೆ. ನೀರು ಸೇದಿದ ಬಳಿಕ ಮತ್ತೆ ಕಸ ಆವರಿಸಿಕೊಳ್ಳುತ್ತದೆ. ಇದೇ ಜಾತಿ ವ್ಯವಸ್ಥೆ ಎಂದು ಅರ್ಥೈಸಿದ್ದಾರೆ.
850 ವರ್ಷಗಳ ಹಿಂದೆಯೇ ಬಸವಾದಿ ಶರಣರು ಜಾತಿ ಮೀರಿದ ಸಾಮಾಜಿಕ ವ್ಯವಸ್ಥೆ ರೂಪಿಸಲು ಶ್ರಮಿಸಿದ್ದರು. ಅವರ ಶ್ರಮಕ್ಕೆ ಪ್ರತೀಕವಾದ ಅನುಭವ ಮಂಟಪದ ತೈಲಚಿತ್ರವನ್ನು ಇಂದು ಅನಾವರಣಗೊಳಿಸಿದ್ದು ಅತ್ಯಂತ ಸಂತೋಷದ ವಿಚಾರ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.












Click it and Unblock the Notifications