ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ: ನೊಂದ ಕುಟುಂಬಕ್ಕೆ ನ್ಯಾಯದ ಭರವಸೆ ನೀಡಿದ ಸಿಎಂ
ಬೆಳಗಾವಿ, ಡಿಸೆಂಬರ್ 11: ಬೆಳಗಾವಿಯಲ್ಲಿ ಅಮಾನವೀಯ ಘಟನೆ ನಡೆದಿದ್ದು, ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಮಗನ ಮೇಲಿನ ಸಿಟ್ಟಿಗೆ ತಾಯಿಯನ್ನು ಬೆತ್ತಲೆ ಮಾಡಿ ಹಲ್ಲೆ ನಡೆಸಿದ ಘಟನೆ ಬೆಳಗಾವಿ ತಾಲೂಕಿನ ಹೊಸ ವಂಟಮುರಿ ಗ್ರಾಮದಲ್ಲಿ ನಡೆದಿದೆ.
ಒಂದೇ ಊರಿನಲ್ಲಿದ್ದ ಯುವಕ-ಯುವತಿ ಪ್ರೀತಿಸಿ ಮನೆ ಬಿಟ್ಟು ಹೋಗಿದಕ್ಕೆ ಸಂಪೂರ್ಣ ಊರೇ ರಣರಂಗವಾಗಿದೆ. ಯುವಕನ ಮೇಲಿನ ಸಿಟ್ಟಿಗೆ ಯುವತಿ ಮನೆಯವರು ಯುವಕನ ಮನೆ ಹಾಗೂ ಕುಟುಂಬಸ್ಥರನ್ನೇ ಟಾರ್ಗೆಟ್ ಮಾಡಿ ಹಿಂಸೆ ನೀಡಿದ್ದಾರೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಹೊಸ ವಂಟಮುರಿ ಗ್ರಾಮದಲ್ಲಿ ಪೊಲೀಸ್ ಬಿಗಿ ಬಂದೋ ಬಸ್ತ್ ಮಾಡಲಾಗಿದೆ.

ಘಟನೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, 'ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವುದು ಅತ್ಯಂತ ಅಮಾನವೀಯ. ಇದರಿಂದ ಇಡೀ ಸಮಾಜವೇ ತಲೆತಗ್ಗಿಸುವಂತಾಗಿದೆ. ಇಂತಹ ಹೀನ ಕೃತ್ಯಗಳನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಪ್ರಕರಣದ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮವಹಿಸುವ ಮೂಲಕ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ಸಂಪೂರ್ಣ ಹೊಣೆ ನಮ್ಮದು' ಎಂದಿದ್ದಾರೆ.
ಬೆಳಗಾವಿ ಜಿಲ್ಲಾಸ್ಪತ್ರೆಗೆ ಗೃಹ ಸಚಿವರ ಭೇಟಿ
ಬೆಳಗಾವಿಯಲ್ಲಿ ಪರಿಶಿಷ್ಟ ಪಂಗಡ ಸಮುದಾಯದಲ್ಲಿ ಎರಡು ಕುಟುಂಬಗಳ ನಡುವಿನ ಗಲಾಟೆ ಮತ್ತು ಮಹಿಳೆ ಮೇಲೆ ನಡೆದ ಹಲ್ಲೆ ಸಂಬಂಧ ಗೃಹ ಸಚಿವ ಡಾ.ಜಿ ಪರಮೇಶ್ವರ್ ಬೆಳಗಾವಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತ ಮಹಿಳೆಗೆ ಸಾಂತ್ವನ ಹೇಳಿದರು.

'ಯುವತಿಯ ಸಂಬಂಧಿಕರು ಯುವಕನ ಮನೆಗೆ ನುಗ್ಗಿ, ಆತನ ತಾಯಿಯನ್ನು ವಿವಸ್ತ್ರಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ ಥಳಿಸಿರುವ ಘಟನೆ ಅಮಾನುಷ ಕೃತ್ಯ. ಇದು ಸಮಾಜಕ್ಕೆ ಗೌರವ ತರುವುದಿಲ್ಲ. ಊರಿನ ಜನ ಹೇಗೆ ಸಹಿಸಿದ್ದರೋ ಗೊತ್ತಿಲ್ಲ. ಇಂತಹ ಅಕ್ಷ್ಯಮ್ಯ ಅಪರಾಧಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ತಪ್ಪಿತಸ್ಥರು ಯಾರೇ ಆಗಿದ್ದರು ಮುಲಾಜಿಲ್ಲದೇ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು' ಎಂದು ಗೃಹ ಸಚಿವರು ತಿಳಿಸಿದ್ದಾರೆ.
ಇನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ, ನೊಂದ ಮಹಿಳೆ ಹಾಗೂ ಆಕೆಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೇ ಆರೋಪಿಗಳಿಗೆ ತಕ್ಕ ಶಿಕ್ಷೆ ನೀಡುವ ಭರವಸೆ ನೀಡಿದ್ದಾರೆ.
ಘಟನೆಯ ಹಿನ್ನೆಲೆ ಏನು..?
ಬೆಳಗಾವಿ ತಾಲೂಕಿನ ಹೊಸ ವಂಟಮುರಿ ಗ್ರಾಮದ ದುಂಡಪ್ಪ ಹಾಗೂ ಪ್ರಿಯಾಂಕಾ ಪರಸ್ಪರ ಪ್ರೀತಿಸುತ್ತಿದ್ದರು. ಮದುವೆಗೆ ಪೋಷಕರ ವಿರೋಧದ ಹಿನ್ನೆಲೆಯಲ್ಲಿ ಮನೆ ಬಿಟ್ಟು ಹೋಗಿದ್ದಾರೆ. ಮಗಳು ಮನೆ ಬಿಟ್ಟು ಹೋಗಿರುವ ಕಾರಣ ರೊಚ್ಚಿಗೆದ್ದ ಯುವತಿಯ ಮನೆಯವರು ರಾತ್ರೋರಾತ್ರಿ ಯುವಕನ ಮನೆಯನ್ನು ಸಂಪೂರ್ಣ ಧ್ವಂಸಗೊಳಿಸಿದ್ದಾರೆ. ಅಲ್ಲದೇ ಯುವಕನ ಅಜ್ಜಿ ಮತ್ತು ತಾಯಿಯ ಮೇಲೆ ಹಲ್ಲೆ ನಡೆಸಿ, ತಾಯಿಯನ್ನು ಬೆತ್ತಲೆಗೊಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ ಬಳಿಕ ಗ್ರಾಮದಲ್ಲಿನ ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಹಲ್ಲೆ ಮಾಡಿದ್ದಾರೆ. ಸದ್ಯ ಘಟನೆ ಸಂಬಂಧ ಮಹಿಳೆಯರು ಸೇರಿ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.












Click it and Unblock the Notifications