ಬೆಳಗಾವಿ: ದಿ.ಸುರೇಶ ಅಂಗಡಿ ಕುಟುಂಬಕ್ಕೆ ರಾಜ್ಯಪಾಲ ವಜುಭಾಯ್ ವಾಲಾ ಸಾಂತ್ವನ
ಬೆಳಗಾವಿ, ಅಕ್ಟೋಬರ್ 5: ಇತ್ತೀಚಿಗೆ ಕೊರೊನಾ ಸೋಂಕು ತಗುಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದ ಸುರೇಶ ಅಂಗಡಿ ಅವರ ಬೆಳಗಾವಿ ನಿವಾಸಕ್ಕೆ ರಾಜ್ಯಪಾಲರಾದ ವಜುಭಾಯ್ ವಾಲಾ ಅವರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಕೇಂದ್ರ ರೈಲ್ವೆ ಇಲಾಖೆಯ ರಾಜ್ಯ ಸಚಿವರಾಗಿದ್ದ ಸುರೇಶ್ ಅಂಗಡಿ (65) ಅವರು ಸೆಪ್ಟೆಂಬರ್ 24 ರಂದು ನಿಧನರಾಗಿದ್ದರು. ಆ ಸಂದರ್ಭದಲ್ಲಿ ಅನೇಕ ಗಣ್ಯರು ಕಂಬನಿ ಮಿಡಿದಿದ್ದರು.
ಕೋವಿಡ್-19 ತಗುಲಿ ಚಿಕಿತ್ಸೆ ಪಡೆಯುತ್ತಿದ್ದ ಸುರೇಶ್ ಅಂಗಡಿ ಅವರಿಗೆ ರಕ್ತದೊತ್ತಡ, ಮಧುಮೇಹ ಸಮಸ್ಯೆ ಇರಲಿಲ್ಲ, ರೋಗ ಲಕ್ಷಣಗಳು ಕಾಣಿಸಿಕೊಂಡಿರಲಿಲ್ಲ. ಆದರೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ದೆಹಲಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಕೊನೆಯುಸಿರೆಳೆದಿದ್ದರು.

ದಿ.ಸುರೇಶ್ ಅಂಗಡಿ ಅವರ ತಾಯಿ ಸೋಮವ್ವ, ಪತ್ನಿ ಮಂಗಳಾ, ಮಕ್ಕಳಾದ ಶ್ರದ್ಧಾ ಹಾಗೂ ಸ್ಫೂರ್ತಿ ಮತ್ತಿತರರು ಉಪಸ್ಥಿತರಿದ್ದರು. ಸುವರ್ಣ ಸೌಧದಲ್ಲಿ ಆಯೋಜಿಸಿದ್ದ ರಾಣಿ ಚೆನ್ನಮ್ಮ ವಿವಿಯ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯಪಾಲರು ಬೆಳಗಾವಿಗೆ ಆಗಮಿಸಿದ್ದರು.

ಕಾರ್ಯಕ್ರಮದ ಬಳಿಕ ಅವರು ಇಲ್ಲಿನ ವಿಶ್ವೇಶ್ವರಯ್ಯ ನಗರದ ಸುರೇಶ ಅಂಗಡಿ ನಿವಾಸಕ್ಕೆ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದರು. ಬಳಿಕ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ತೆರಳಿದರು. ಅಲ್ಲಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.












Click it and Unblock the Notifications