ರಮೇಶ್ ಜಾರಕಿಹೊಳಿ ವಿರುದ್ಧ ಕೆಪಿಸಿಸಿ ಅಧ್ಯಕ್ಷರಿಗೆ ದೂರು

ಬೆಳಗಾವಿ, ಏಪ್ರಿಲ್ 11 : ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕೆಪಿಸಿಸಿ ಅಧ್ಯಕ್ಷರಿಗೆ ದೂರು ನೀಡಿದ್ದಾರೆ. ಏಪ್ರಿಲ್ 23ರಂದು ಬೆಳಗಾವಿ ಮತ್ತು ಚಿಕ್ಕೋಡಿ ಕ್ಷೇತ್ರದ ಲೋಕಸಭಾ ಚುನಾವಣೆ ನಡೆಯಲಿದೆ.
ಬೆಳಗಾವಿ ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ಡಾ.ವಿ.ಎಸ್.ಸಾಧುನವರ ಮತ್ತು ಚಿಕ್ಕೋಡಿ ಕ್ಷೇತ್ರದಿಂದ ಪ್ರಕಾಶ್ ಹುಕ್ಕೇರಿ ಅವರು ಕಣದಲ್ಲಿದ್ದಾರೆ. ಇಬ್ಬರು ಅಭ್ಯರ್ಥಿಗಳು ಈಗಾಗಲೇ ಬಿರುಸಿನಿಂದ ಪ್ರಚಾರ ನಡೆಸುತ್ತಿದ್ದಾರೆ.
ಬಿಜೆಪಿ ಮಣಿಸಲು ದ್ವೇಷ ಮರೆತ ಲಕ್ಷ್ಮಿ ಹೆಬ್ಬಾಳ್ಕರ್-ಸತೀಶ್ ಜಾರಕಿಹೊಳಿ
ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಈಗಾಗಲೇ ಅಭ್ಯರ್ಥಿಗಳ ಪರವಾಗಿ ಪ್ರಚಾರವನ್ನು ನಡೆಸುತ್ತಿದ್ದಾರೆ. ಆದರೆ, ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಅವರು ಚುನಾವಣಾ ಕಾರ್ಯದಿಂದ ದೂರ ಉಳಿದಿದ್ದಾರೆ.
ಬೆಳಗಾವಿ : 42 ಅಭ್ಯರ್ಥಿಗಳಿಂದ 76 ನಾಮಪತ್ರ ಸಲ್ಲಿಕೆ
ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸುವಾಗಲೂ ಅವರು ಗೈರು ಹಾಜರಾಗಿದ್ದರು. ಈಗ ಪ್ರಚಾರದಲ್ಲಿಯೂ ತೊಡಗಿಸಿಕೊಂಡಿಲ್ಲ. ಅವರು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿರಬಹುದು ಎಂದು ದಿನೇಶ್ ಗುಂಡೂರಾವ್ ಅವರಿಗೆ ನೀಡಿರುವ ದೂರಿನಲ್ಲಿ ಆರೋಪಿಸಲಾಗಿದೆ.
2018ರಲ್ಲಿ ಬೆಳಗಾವಿ ಪಿಎಲ್‌ಡಿ ಬ್ಯಾಂಕ್ ಚುನಾವಣೆ ನಡೆದ ಬಳಿಕ ರಮೇಶ್ ಜಾರಕಿಹೊಳಿ ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಸಚಿವ ಸ್ಥಾನದಿಂದ ಅವರನ್ನು ಕೈ ಬಿಟ್ಟ ಬಳಿಕ ಅವರು ಪಕ್ಷದ ಕಾರ್ಯಕ್ರಮಗಳಿಂದ ದೂರವಾಗಿದ್ದಾರೆ.
'ರಮೇಶ್ ಜಾರಕಿಹೊಳಿ ಅವರು ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡುತ್ತಿಲ್ಲ. ಬಹಿರಂಗವಾಗಿ ಎಲ್ಲೂ ಕಾಣಿಸಿಕೊಂಡಿಲ್ಲ. ಅವರು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿರಬಹುದು ಎಂಬ ಶಂಕೆ ಇದೆ' ಎಂದು ನಾಯಕರೊಬ್ಬರು ಹೇಳಿದ್ದಾರೆ.