Laxman Savadi: ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಕಾರು ಅಪಘಾತ
Laxman Savadi Car Accident: ಮಾಜಿ ಡಿಸಿಎಂ, ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ತೆರಳುತ್ತಿದ್ದ ಕಾರು ಇಂದು (ಜೂನ್ 9) ಅಪಘಾತಕ್ಕೀಡಾದ ಘಟನೆ ಅಥಣಿ ತಾಲೂಕಿನ ಬಳಿ ನಡೆದಿದೆ.
ಅಥಣಿಯಿಂದ ಬೆಂಗಳೂರಿನತ್ತ ಪ್ರಯಾಣ ಮಾಡುತ್ತಿದ್ದ ವೇಳೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದರೂರು ಗ್ರಾಮದ ಬಳಿ ಪಿಕಪ್ ವಾಹನ ವಾಹನ ಡಿಕ್ಕಿ ಹೊಡೆದ ಪರಿಣಾಮ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಅವರ ಕಾರಿನ ಮುಂಭಾಗ ಜಖಂ ಆಗಿದೆ. ಸದ್ಯ ಲಕ್ಷ್ಮಣ್ ಸವದಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಬೇರೆ ವಾಹನದಲ್ಲಿ ಪ್ರಯಾಣ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಭೀಕರ ಅಪಘಾತ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲಿವೆ. ಹಾಗೆಯೇ ಭಾನುವಾರ ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನ ನಿಡಘಟ್ಟ ಬಳಿ ನಡೆದಿದೆ.
ಅಪಘಾತದಲ್ಲಿ ಮಸೂದ್ ಹಾಗೂ ಅಯಾನ್ ಮೃತಪಟ್ಟಿದ್ದು, ಖುಷಿ, ಚಿಕ್ಕು, ಮುಜಾಯಿದ್ ಪಾಷ, ಬಸವರಾಜು, ಪಾರ್ವತಿ ಎಂಬುವವರು ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಬೆಂಗಳೂರು ಹಾಗೂ ಇನ್ನೂ ಕೆಲವರಿಗೆ ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಕಡೆಯಿಂದ ಬರುತ್ತಿದ್ದ ಕಾರು ಡಿವೈಡರ್ ದಾಟಿ ಮಂಡ್ಯದ ಕಡೆಯಿಂದ ಬರುತ್ತಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಭಾನುವಾರ ತಡರಾತ್ರಿ ಈ ಅಪಘಾತ ಸಂಭವಿಸಿದ್ದು, ಅತಿವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಘಟನೆ ಬಳಿಕ ಹೆದ್ದಾರಿ ಬಂದ್ ಮಾಡಿ ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಲಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications