ಝೋಮ್ಯಾಟೋ ಸೇರಿ ಆನ್‌ಲೈನ್ ಉದ್ಯಮಗಳಲ್ಲಿ ಕೆಲಸ ಮಾಡುವವರಿಗೆ ಸರ್ಕಾರದಿಂದ ಗುಡ್ ನ್ಯೂಸ್
ಬೆಳಗಾವಿ, ಅಕ್ಟೋಬರ್ 4: ಕಾರ್ಮಿಕ ವಲಯದ ಸಮಸ್ಯೆಗಳನ್ನು ಅರಿತು, ಅವುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಮಿಕ ಸಂಘಟನೆಗಳ ಮುಖಂಡರು ಹಾಗೂ ಸಂಸ್ಥೆಗಳ ಮಾಲೀಕರೊಂದಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಪ್ರತ್ಯೇಕವಾಗಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಸೂಚನೆ ನೀಡಿದರು.
ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಭವನದಲ್ಲಿ ಪ್ರಾದೇಶಿಕ ಮಟ್ಟದ ಕಾರ್ಮಿಕ ಇಲಾಖೆಯ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮಾತನಾಡಿದ ಅವರು, ಕಾರ್ಮಿಕರಿಗೆ ಯಾವುದೇ ರೀತಿಯಿಂದಲೂ ತೊಂದರೆ ಆಗದಂತೆ ಅಧಿಕಾರಿಗಳು ಗಮನಹರಿಸಬೇಕು. ಅವರ ಒಳತಿಗಾಗಿರುವ ಇಲಾಖೆಯ ಕಾರ್ಯವೈಖರಿಯನ್ನು ಮತ್ತಷ್ಟು ಚುರುಕುಗೊಳಿಸಬೇಕು ಎಂದು ನಿರ್ದೇಶನ ನೀಡಿದರು.

ರಾಜ್ಯ ಸರ್ಕಾರ ಕಾರ್ಮಿಕರ ಹಿತ ಕಾಯಲು ಹಲವಾರು ಕಾರ್ಯಕ್ರಮಗಳನ್ನು ಕೈಗೊಂಡಿದೆ. ಅವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಕಾರ್ಮಿಕರ ಕಲ್ಯಾಣಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳು, ಕಾರ್ಮಿಕ ಇಲಾಖಾ ಕೋರ್ಟ್ ಪ್ರಕರಣಗಳ ಇತ್ಯರ್ಥ ಹಾಗೂ ಕರ ಸಂಗ್ರಹದ ಬಗ್ಗೆ ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇತ್ತೀಚೆಗೆ ಪ್ರವರ್ಧಮಾನಕ್ಕೆ ಬಂದಿರುವ ಝೋಮ್ಯಾಟೊ ಸೇರಿದಂತೆ ಆನ್‌ಲೈನ್ ಉದ್ಯಮಗಳಲ್ಲಿ ಕೆಲಸ ಮಾಡುತ್ತಿರುವವರಿಗೆ ಸಾಮಾಜಿಕ ಭದ್ರತೆ ಕಲ್ಪಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಸಚಿವರು ಹೇಳಿದರು.

ಸಭೆಯಲ್ಲಿ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಸೀನ್, ಕಾರ್ಮಿಕ ಆಯುಕ್ತರ ಗೋಪಾಲ ಕೃಷ್ಣ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಾರತಿ, ಜಂಟಿ ಕಾರ್ಮಿಕ ಆಯುಕ್ತರಾದ ಮಂಜುನಾಥ್ ಮತ್ತು ಶ್ರೀನಿವಾಸ್, ಕಾರಾವಿ ನಿರ್ದೇಶಕ ವರದರಾಜು ಸೇರಿದಂತೆ ಇಲಾಖೆಯ ಹಲವು ಅಧಿಕಾರಿಗಳು ಭಾಗವಹಿಸಿದ್ದರು.












Click it and Unblock the Notifications