Karnataka Budget 2023 Expectations: ಬೆಳಗಾವಿ ಜಿಲ್ಲೆಯ ನಿರೀಕ್ಷೆಗಳೇನು?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿತ್ತೂರು ಕರ್ನಾಟಕವನ್ನು ಪ್ರತಿನಿಧಿಸುವುದರ ಜೊತೆಗೆ ಈ ಪ್ರದೇಶಗಳ ಭಾಗದ ಸಮಸ್ಯೆಗಳ ಅರಿವಿದೆ ಎನ್ನುವ ಕಾರಣಕ್ಕೆ ಬೆಳಗಾವಿಯಲ್ಲಿ ಬೇಡಿಕೆ ಹೆಚ್ಚಾಗಿಯೇ ಇದೆ.
2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಬರೀ ಬಜೆಟ್ ಅಲ್ಲದೇ ಮುಂಬರುವ ವಿಧಾನಸಭಾ ಚುನಾವಣೆಯ ಬಿಜೆಪಿ ಸರ್ಕಾರದ ಭರವಸೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಇಂತಹ ಸ್ಥಿತಿಯಲ್ಲಿ ಬೆಳಗಾವಿ ಜಿಲ್ಲೆಯ ಜನರಲ್ಲಿಯೂ ಹಲವು ನಿರೀಕ್ಷೆಗಳು ಇವೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಿತ್ತೂರು ಕರ್ನಾಟಕವನ್ನು ಪ್ರತಿನಿಧಿಸುವುದರ ಜೊತೆಗೆ ಈ ಪ್ರದೇಶಗಳ ಭಾಗದ ಸಮಸ್ಯೆಗಳ ಅರಿವಿದೆ ಎನ್ನುವ ಕಾರಣಕ್ಕೆ ಬೆಳಗಾವಿಯಲ್ಲಿ ಬೇಡಿಕೆ ಹೆಚ್ಚಾಗಿಯೇ ಇದೆ.
ಚುನಾವಣೆ ಹೊಸ್ತಿಲಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸುತ್ತಿರುವ 2023-24ನೇ ಸಾಲಿನ ಬಜೆಟ್ ಬಗ್ಗೆ ಬೆಳಗಾವಿ ಜನರ ಮೊದಲ ಬೇಡಿಕೆ ಕಳಸಾ ಬಂಡೂರಿ ಯೋಜನೆ ಜಾರಿ. ಕಳಸಾ - ಬಂಡೂರಿ ಡಿಪಿಆರ್‌ಗೆ ಕೇಂದ್ರ ಸರ್ಕಾರವು ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ಈ ಯೋಜನೆ ಶೀಘ್ರವೇ ಮುಂದುವರೆಯಲಿ ಎಂಬುದು ಬಹುದೊಡ್ಡ ನಿರೀಕ್ಷೆಯಾಗಿದೆ.

ತಮ್ಮದೇ ಭಾಗದ ಸಿಎಂ ಬಸವರಾಜ ಬೊಮ್ಮಾಯಿ, ಮಂಡಿಸುತ್ತಿರುವ ಎರಡನೇ ಬಜೆಟ್ ಆದ್ದರಿಂದ ಉತ್ತರ ಕರ್ನಾಟಕದ ಜಿಲ್ಲೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದಾರೆ.
ನಿಪ್ಪಾಣಿಯಲ್ಲಿ ಕೊಲ್ಹಾಪುರಿ ಪಾದರಕ್ಷೆಗಳ ಕ್ಲಸ್ಟರ್ ಅಭಿವೃದ್ಧಿ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ಒದಗಿಸಬೇಕು ಎಂಬ ಬೇಡಿಕೆಗಳು ಇನ್ನು ಹಾಗೆಯೇ ಉಳಿದುಕೊಂಡಿದೆ.
ಇನ್ನು ಕಳೆದ ಬಜೆಟ್‌ನಲ್ಲಿ ಅನುಮೋದನೆ ದೊರೆತಿರುವ ಬೆಳಗಾವಿ - ಕಿತ್ತೂರು - ಧಾರವಾಡ ನೂತನ ರೈಲು ಮಾರ್ಗ ನಿರ್ಮಾಣಕ್ಕೆ ಧಾರವಾಡ ತಾಲ್ಲೂಕಿನ 10 ಗ್ರಾಮಗಳಲ್ಲಿ ಅಗತ್ಯವಿರುವ ಜಮೀನಿನ ಭೂಸ್ವಾಧೀನ ಸಂಭದಿಸಿದಂತೆ ಜುಲೈ 26 ರಂದು ರೂ.38 ಕೋಟಿ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಮಂಜೂರಾತಿ ನೀಡಿತ್ತು.
2021-22ರ ಕೇಂದ್ರ ಬಜೆಟ್‌ನಲ್ಲಿ ಈ ಯೋಜನೆಗೆ 50 ಕೋಟಿ ಮೀಸಲಾಗಿತ್ತು. ಭೂ ಸ್ವಾಧೀನ ಪ್ರಕ್ರಿಯೆಯ ಸಮಸ್ಯೆಯ ಕಾರಣ ಯೋಜನೆ ಅನುಷ್ಠಾನ ತಡವಾಗುತ್ತಿದೆ. ಪ್ರಧಾನಿ ಮೋದಿ ಜನವರಿಯಲ್ಲಿ ಶಂಕುಸ್ಥಾಪನೆ ನಡೆಸಿದ್ದಾರೆ.
ಇತ್ತ ಉತ್ತರ ಕರ್ನಾಟಕದಲ್ಲಿ ಅತೀಯಾಗಿ ಕಾಡುವ ನೆರೆ ಹಾಗೂ ಅತಿವೃಷ್ಟಿಯಿಂದ ಉಂಟಾಗುವ ಹಾನಿ ತಪ್ಪಿಸುವುದಕ್ಕಾಗಿ ಶಾಶ್ವತ ಯೋಜನೆ ಜಾರಿಗೊಳಿಸಬೇಕು. ಬೆಳಗಾವಿ, ಖಾನಾಪುರ, ಬೈಲಹೊಂಗಲ, ಹುಕ್ಕೇರಿ, ಗೋಕಾಕ, ಚಿಕ್ಕೋಡಿ, ಕಾಗವಾಡ, ಅಥಣಿ, ರಾಯಬಾಗ, ರಾಮದುರ್ಗ, ಸವದತ್ತಿ ತಾಲ್ಲೂಕುಗಳಿಗೆ ನೆರವಾಗಬೇಕು ಎಂಬುದು ಬಹುದಿನದ ಬೇಡಿಕೆಯಾಗಿದೆ.
ಬೆಳಗಾವಿಯ ಸುವರ್ಣ ವಿಧಾನಸೌಧವನ್ನು ಕೇವಲ ಒಂದು ತಿಂಗಳು ಮಾತ್ರ ಬಳಸಲಾಗುತ್ತಿದ್ದು, ಅದನ್ನು ಆಡಳಿತದ ಶಕ್ತಿ ಕೇಂದ್ರವನ್ನಾಗಿಸಲು ಜಿಲ್ಲೆಯಲ್ಲಿ ಪ್ರಮುಖ ಸಚಿವಾಲಯಗಳ ಕಚೇರಿಗಳನ್ನು ಸ್ಥಳಾಂತರಿಸಬೇಕು. ಸುವರ್ಣ ವಿಧಾನಸೌಧಕ್ಕೆ ರಾಜ್ಯಮಟ್ಟದ ಕಚೇರಿ ಸ್ಥಳಾಂತರ ಮಾಡುವ ನಿರ್ಧಾರವನ್ನು ಈ ಬಾರಿಯ ಬಜೆಟ್ ನಲ್ಲಿ ಪ್ರಕಟಿಸಬೇಕು ಎಂಬ ಬೇಡಿಕೆಯಿದೆ. ಬೆಳಗಾವಿಯನ್ನು 2ನೇ ರಾಜಧಾನಿಯನ್ನಾಗಿ ಘೋಷಿಸಬೇಕು ಎಂಬುದಂತು ಬಹುದಿನಗಳ ಬೇಡಿಕೆಯಾಗಿದೆ.
ಈ ಬಾರಿಯ ರಾಜ್ಯದ ಬಜೆಟ್‌ನಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ಮೇರೆಗೆ ಅನುದಾನ ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಕಳುಹಿಸಿದ್ದಾರೆ.
ಪ್ರತಿ ವರ್ಷ ಬೆಳಗಾವಿಯಲ್ಲಿ ಅದ್ದೂರಿ ರಾಜ್ಯೋತ್ಸವದ ಆಚರಣೆಗೆ 2 ಕೋಟಿ ರೂಪಾಯಿ ಅನುದಾನ ನೀಡುವಂತೆ ರಾಜ್ಯ ಬಜೆಟ್ ನಲ್ಲಿ ಘೋಷಿಸಬೇಕು. ರಾಜ್ಯೋತ್ಸವದ ಮೆರವಣಿಗೆಯ ಸಮಯವನ್ನು ವಿಸ್ತರಿಸಬೇಕು ಎಂದು ಆಗ್ರಹಿಸಲಾಗಿದೆ.
ಬೆಳಗಾವಿ ವಿಮಾನ ನಿಲ್ದಾಣದಿಂದ ರದ್ದಾಗಿರುವ ಎಲ್ಲ ವಿಮಾನ ಸೇವೆಗಳ ಪುನಾರಂಭಕ್ಕೆ ಕೇಂದ್ರ ಸರ್ಕಾರಕ್ಕೆ ಒತ್ತಡ ಹಾಕಬೇಕು. ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೆ ಏರಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಉತ್ತರ ಕರ್ನಾಟಕದ ಎಲ್ಲ ಜಿಲ್ಲೆಗಳಿಗೆ ಒಂದು ಸಾವಿರ ಹೊಸ ಬಸ್‌ಗಳನ್ನು ಸರ್ಕಾರ ಖರೀದಿ ಮಾಡಿ ವಿತರಿಸಬೇಕು. ಪ್ರತಿ ಜಿಲ್ಲೆಗೆ ತಲಾ 500 ಕೋಟಿ ರೂ. ವಿಶೇಷ ಅನುದಾನ ನೀಡಿ ತಾರತಮ್ಯ ನಿವಾರಿಸಬೇಕು ಎಂಬ ಬೇಡಿಕೆಗಳಿವೆ.












Click it and Unblock the Notifications