winter session: ಬೆಳಗಾವಿ ಅಧಿವೇಶನದ ಹಿನ್ನೆಲೆ ನಾಳೆಯಿಂದ ಇವುಗಳಿಗೆ ನಿರ್ಬಂಧ!
ಕುಂದಾನಗರಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕರ್ನಾಟಕದ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಾಳೆಯಿಂದ (ಸೋಮವಾರ) ಆರಂಭವಾಗಲಿದೆ. ಡಿಸೆಂಬರ್ 9ರಿಂದ 19ರವರೆಗೆ ಅಧಿವೇಶನ ನಡೆಯಲಿದ್ದು, ಈ ವೇಳೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಅಲ್ಲದೆ ಡಿಸೆಂಬರ್ 9 ಹಾಗೂ 10ರಂದು ಯಾವುದೇ ಹೋರಾಟದ ವಾಹನಗಳು ಬೆಳಗಾವಿಯನ್ನು ಪ್ರವೇಶಿಸುವಂತಿಲ್ಲ. ಅಧಿವೇಶನ ನಡೆಯುತ್ತಿರುವ ಹಿನ್ನೆಲೆ ಪ್ರತಿಭಟನಾ ವಾಹನಗಳಿಗೆ ನಿಷೇಧ ಹೇರಲಾಗಿದ್ದು, ಅಧಿವೇಶನದ ವೇಳೆ ಸರ್ಕಾರಕ್ಕೆ ಬಿಸಿ ಮುಟ್ಟಲು ಸಜ್ಜಾಗಿದ್ದ ಪ್ರತಿಭಟನಾಕಾರರಿಗೆ ಶಾಕ್ ನೀಡಿದೆ.

ಈ ಅವಧಿಯಲ್ಲಿ ಹೋರಾಟಕ್ಕೆ ಬರುವ ಯಾವುದೇ ಟ್ರ್ಯಾಕ್ಟರ್ ಸೇರಿದಂತೆ ಇನ್ನಿತರ ವಾಹನಗಳಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ 2ಎ ಮೀಸಲಾತಿಗಾಗಿ ಪಂಚಮಸಾಲಿ ಹೋರಾಟ ಕೂಡ ನಡೆಯಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹೋರಾಟವನ್ನು ಹತ್ತಿಕ್ಕಲು ಕ್ರಮ ತೆಗೆದುಕೊಳ್ಳಲಾಗಿದೆ.
ಬೆಳಗಾವಿಯ ಸುವರ್ಣಸೌಧದಲ್ಲಿ ಡಿ.9ರಿಂದ ಡಿ.20ರವರೆಗೆ ನಡೆಯುವ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಗೃಹ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ಗೃಹಸಚಿವ ಜಿ.ಪರಮೇಶ್ವರ್ ಸಭೆ ನಡೆಸಿ, ಮುಂಜಾಗ್ರತಾ ಕ್ರಮವಾಗಿ ಅಗತ್ಯ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಇನ್ನು ಪಂಚಮಸಾಲಿ ಸಮುದಾಯವು ಬರೋಬ್ಬರಿ ಎರಡು ಲಕ್ಷ ಜನರನ್ನು ಸೇರಿಸಿ, ಸಾವಿರಾರು ಟ್ರ್ಯಾಕ್ಟರ್‌ಗಳೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯೋಜನೆ ರೂಪಿಸಿದೆ. ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಈ ಹೋರಾಟ ನಡೆಯಲಿದ್ದು, ಇದನ್ನು ತಡೆಯಲು ಬೆಳಗಾವಿ ಜಿಲ್ಲಾಡಳಿತ ಕೂಡ ಕ್ರಮಗಳನ್ನು ತೆಗೆದುಕೊಂಡಿದೆ.
ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುವ ಕಾರಣ ಅಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ವಿವಿಧ ಹಂತದ ಅಧಿಕಾರಿ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಅಧಿವೇಶನದ ಸಮಯದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆ ಇರುವ ಹಿನ್ನೆಲೆ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ ಒಟ್ಟು 3,599 ಹಾಗೂ ಬೆಳಗಾವಿ ನಗರದ 857 ಜನ ಸೇರಿ ಒಟ್ಟು 4,456 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಅಧಿವೇಶನಕ್ಕಾಗಿ ನಿಯೋಜಿಸಲಾಗಿದೆ. ಇವರಿಗೆ ಈಗಾಗಲೇ ತಮ್ಮ ಕರ್ತವ್ಯ ಹಂಚಿಕೆ ಮಾಡಿ, ಸೂಚನೆ ನೀಡಲಾಗಿದೆ. ಡಿಸೆಂಬರ್ 9ರ ಸೋಮವಾರ (ನಾಳೆ) ಬೆಳಿಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದೆ.
ಇದಕ್ಕೂ ಮುನ್ನ 10.30ಕ್ಕೆ ಸಿಎಂ ಸಿದ್ದರಾಮಯ್ಯ ವಿಶ್ವಗುರು ಬಸವಣ್ಣ ಸ್ಥಾಪಿಸಿದ ವಿಶ್ವದ ಮೊದಲ ಸಂಸತ್ತು ಎಂಬ ಖ್ಯಾತಿಯ ಅನುಭವ ಮಂಟಪದ ಬೃಹತ್ ತೈಲವರ್ಣದ ಚಿತ್ರವನ್ನು ಅನಾವರಣಗೊಳಿಸಲಿದ್ದಾರೆ. ಬಳಿಕ ಕಲಾಪಗಳು ಶುರುವಾಗಲಿವೆ. ಇನ್ನು ಅಧಿವೇಶನದಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳ ಕುರಿತು ಹೆಚ್ಚು ಚರ್ಚೆಗಳಾಗಬೇಕು ಎನ್ನುವುದು ನಮ್ಮ ಉದ್ದೇಶ. ವಿರೋಧ ಪಕ್ಷಗಳು ಅಧಿವೇಶನಕ್ಕೆ ಹೇಗೆ ಸಹಕಾರ ನೀಡುತ್ತವೆ ಎಂಬುದನ್ನು ಕಾದು ನೋಡಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯ ಸರ್ಕಾರದಲ್ಲಿ ಆರ್ಥಿಕ ಸಂಕಷ್ಟ ಇದೆ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗೆ ವಿರೋಧ ಮಾಡುತ್ತಿದ್ದಾರೆ. ಆದರೆ, ಬೇರೆ ರಾಜ್ಯಗಳಲ್ಲಿ ಅವರೂ ಗ್ಯಾರಂಟಿಗಳನ್ನು ಘೋಷಣೆ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಸ್ಪಷ್ಟ ನಿಲುವೇ ಇಲ್ಲ ಎಂದು ಸಿಎಂ ತಿರುಗೇಟು ನೀಡಿದ್ದಾರೆ.












Click it and Unblock the Notifications