ಬೆಳಗಾವಿ: ಅಧಿವೇಶನದ ಸಮಯದಲ್ಲೇ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಉದ್ಘಾಟನೆ
ಬೆಳಗಾವಿ, ಡಿಸೆಂಬರ್ 03: ಕರ್ನಾಟಕ ಸರ್ಕಾರ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದ ಸಮಯದಲ್ಲಿಯೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಲೋಕಾರ್ಪಣೆ ಮಾಡಲು ತಯಾರಿ ನಡೆಸಿದೆ. ಡಿಸೆಂಬರ್ 9 ರಿಂದ 19ರ ತನಕ ಅಧಿವೇಶನ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದೆ. ಸುಮಾರು 59 ಕೋಟಿ ರೂ. ವೆಚ್ಚದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ನಿರ್ಮಾಣ ಮಾಡಲಾಗುತ್ತಿದ್ದು, ಕಾಮಗಾರಿಗಳು ಅಂತಿಮ ಹಂತದಲ್ಲಿವೆ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ (ವೀರಭೂಮಿ) ಕಾಮಗಾರಿಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಪರಿಶೀಲಿಸಿದರು. ಕಾಮಗಾರಿಗಳನ್ನು ಪೂರ್ಣಗೊಳಿಸಿ ಲೋಕಾರ್ಪಣೆಗೆ ಸಿದ್ಧವಾಗುವಂತೆ ಸೂಚನೆಯನ್ನು ನೀಡಿದರು.

ಸಚಿವರು, ಮ್ಯೂಸಿಯಂ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಕಳೆದ 3-4 ವರ್ಷಗಳಿಂದ ಕಾಮಗಾರಿ ನಡೆಯುತ್ತಿದ್ದು, ಚಳಿಗಾಲ ಅಧಿವೇಶನ ಪ್ರಾರಂಭಕ್ಕೂ ಮುನ್ನ ಸಂಪೂರ್ಣ ಕಾಮಗಾರಿಗಳನ್ನು ಪೂರ್ಣಗೊಳಿಸಿ ಮ್ಯೂಸಿಯಂ ಲೋಕಾರ್ಪಣೆಗೆ ಸಿದ್ಧಗೊಳಿಸಬೇಕು ಎಂದು ನಿರ್ದೇಶನ ನೀಡಿದರು.
ಸಚಿವ ಶಿವರಾಜ ತಂಗಡಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಕಾಮಗಾರಿ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಬಳಿಕ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಮಾಧಿ ಸ್ಥಳ ಮತ್ತು ರಾಯಣ್ಣ ಕೆರೆಯಲ್ಲಿ ಪ್ರತಿಮೆ ಸ್ಥಾಪನೆ ಕುರಿತು ಸ್ಥಳವನ್ನು ಅಧಿಕಾರಿಗಳ ಜೊತೆ ಪರಿಶೀಲನೆ ನಡೆಸಿದರು.
13 ಎಕರೆ ಜಾಗದಲ್ಲಿ ಮ್ಯೂಸಿಯಂ: ಸಚಿವ ಶಿವರಾಜ ತಂಗಡಗಿ ಮಾತನಾಡಿ, "ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಹಾಗೂ ನಂದಗಡ ಮ್ಯೂಸಿಯಂ ಸೇರಿ ಒಟ್ಟು 261 ಕೋಟಿ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. 59 ಕೋಟಿ ವೆಚ್ಚದಲ್ಲಿ ಒಟ್ಟು 13 ಎಕರೆ ಜಾಗೆಯಲ್ಲಿ ನಂದಗಡ ಮ್ಯೂಸಿಯಂ ನಿರ್ಮಾಣ ಮಾಡಲಾಗುತ್ತಿದೆ" ಎಂದು ಹೇಳಿದರು.
"ನಂದಗಡ ಮ್ಯೂಸಿಯಂ ವಿವಿಧ ಕಾಮಗಾರಿಗಳ ಪ್ರಗತಿಯಲ್ಲಿದ್ದು, ಯಾವುದೇ ರೀತಿಯ ಕಾಮಗಾರಿಗಳು ಬಾಕಿ ಉಳಿಯಬಾರದು. ಒಂದು ವಾರದೊಳಗೆ ಕಾಪೌಂಡ್, ರಸ್ತೆ, ಕಲಾಕೃತಿಗಳು ಸೇರಿದಂತೆ ಅಗತ್ಯ ಕಾಮಗಾರಿಗಳು ತ್ವರಿತವಾಗಿ ಪೂರ್ಣಗೊಳಿಸಬೇಕು" ಎಂದು ಸಚಿವರು ಸೂಚನೆ ನೀಡಿದರು.
"ಸಿನಿಮಾ ಆ್ಯನಿಮೇಟರ್ ವಿದ್ಯುನ್ಮಾನ ತಂತ್ರಜ್ಞಾನ ಅಳವಡಿಸಲು ಕೆಲವು ಕಾಮಗಾರಿಗಳು ಬಾಕಿ ಇವೆ. ಅವುಗಳನ್ನು ಕೂಡಲೇ ಪ್ರಾರಂಭಿಸಬೇಕು. ಸರ್ಕಾರದಿಂದ ಗುತ್ತಿಗೆದಾರರ ಬಿಲ್ ಬಾಕಿ ಉಳಿಯದಂತೆ ನೋಡಿಕೊಳ್ಳಗುವುದು. ಗುತ್ತಿಗೆದಾರರು ಆತಂಕ ಪಡದೆ ಡಿಸೆಂಬರ್ 9ರೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು" ಎಂದರು.
"ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಐತಿಹಾಸಿಕ ಕುರುಹುಗಳ ಮರು ಚಿತ್ರಣದಲ್ಲಿ ವಸ್ತು ಸಂಗ್ರಹಾಲಯದಲ್ಲಿ ಯಾವುದೇ ವ್ಯತ್ಯಾಸ ಕಂಡು ಬರದಂತೆ ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಬೇಕು. ಈಗಾಗಲೇ 4 ವರ್ಷದಿಂದ ಮ್ಯೂಸಿಯಂನಲ್ಲಿ ಕಾಮಗಾರಿಗಳು ಚಾಲನೆಯಲ್ಲಿವೆ. ಒಟ್ಟು 261 ಕೋಟಿ ಸಂಗೊಳ್ಳಿ ಶಾಲೆ ಹಾಗೂ ನಂದಗಡ ಮ್ಯೂಸಿಯಂ ಸೇರಿ ಕಾಮಗಾರಿಗಳನ್ನು ಪ್ರಾರಂಭಿಸಲಾಗಿತ್ತು. ಸಂಗೊಳ್ಳಿಯಲ್ಲಿ 100 ಎಕರೆ ಭೂಮಿಯಲ್ಲಿ ಸೈನಿಕ ಶಾಲೆ, ಶೌರ್ಯ ಭೂಮಿ ಅಭಿವದ್ಧಿಪಡಿಸಿ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದ್ದಾರೆ" ಎಂದು ಹೇಳಿದರು.
"ಸಂಗೊಳ್ಳಿ ರಾಯಣ್ಣ ಅವರ ಪೂರ್ಣ ಪ್ರಮಾಣದ ಪರಿಚಯಕ್ಕೆ ಮ್ಯೂಸಿಯಂ ನಿರ್ಮಾಣ ಮಾಡಲಾಗುತ್ತಿದೆ. ಸಂಗೊಳ್ಳಿ ರಾಯಣ್ಣ ಅಧ್ಯಯನ ಕೇಂದ್ರ, ಗ್ರಂಥಾಲಯ ಸೇರಿದಂತೆ ಸಾಕಷ್ಟು ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ಡಿಸೆಂಬರ್ 9 ರಂದು ಅಧಿವೇಶನ ಪ್ರಾರಂಭವಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಮ್ಯೂಸಿಯಂ ಉದ್ಘಾಟನೆ ಮಾಡಲಾಗುವುದು" ಎಂದು ಸಚಿವರು ತಿಳಿಸಿದರು.
"ಇಂದಿನ ಯುವ ಪೀಳಿಗೆಗೆ ಇತಿಹಾಸ ಪರಿಚಯಿಸುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ. ಮ್ಯೂಸಿಯಂ ಜೊತೆಗೆ ನಂದಗಡದ ಕೆರೆಯಲ್ಲಿ ಮೂರ್ತಿ ಸ್ಥಾಪನೆ ಮಾಡಲಾಗುವುದು. ನಂದಗಡದ ರಾಯಣ್ಣ ಸಮಾಧಿಯಿಂದ ಮ್ಯೂಸಿಯಂವರೆಗೂ ಸಿಸಿ ರಸ್ತೆ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಗೆ ವಹಿಸಲಾಗಿದೆ. ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಲಾಗುವುದು" ಎಂದರು.
"ಇದನ್ನು ಜನರಿಗೆ ಅನುಕೂಲವಾಗುವ ಪ್ರವೇಶ ದರ ನಿಗದಿಪಡಿಸಿ ಜಿಲ್ಲೆಯಲ್ಲಿ ಅತ್ಯುತ್ತಮ ಪ್ರವಾಸಿ ತಾಣವಾಗಿ ಮಾಡಲು ಈಗಾಗಲೇ ಯೋಜನೆ ರೂಪಿಸಲಾಗಿದೆ. ಉತ್ತಮ ಗುಣಮಟ್ಟದ ಕಾಮಗಾರಿ, ಉನ್ನತ ಮಾದರಿ ಮ್ಯೂಸಿಯಂ ನಿರ್ಮಾಣಕ್ಕೆ ಈಗಾಗಲೇ ಸೂಚನೆ ನೀಡಲಾಗಿದೆ" ಎಂದು ತಿಳಿಸಿದರು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಅನ್ನು ಬೆಂಗಳೂರಿನ ಡಿಸೈನ್ ಕೋರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವಿನ್ಯಾಸಗೊಳಿಸುತ್ತಿದೆ. ತೆರೆದ ಗಾಳಿ, ಅರಣ್ಯ ಪ್ರದೇಶವನ್ನು ಹೊಂದಿರುವ ರೀತಿ ಇದನ್ನು ವಿನ್ಯಾಸಗೊಳಿಸಲಾಗಿದೆ.












Click it and Unblock the Notifications