ಚಿಕ್ಕೋಡಿಯಲ್ಲಿ ಏರದ ಲೋಕಸಭೆ ಚುನಾವಣಾ ಕಾವು!
ಬೆಳಗಾವಿ, ಮಾರ್ಚ್ 04: ಬೆಳಗಾವಿ ಜಿಲ್ಲೆಯ ರಾಜಕೀಯ ರಾಜ್ಯ ಮಟ್ಟದಲ್ಲಿ ಗಮನ ಸೆಳೆಯುತ್ತದೆ. ಆದರೆ ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಉಳಿದಿದ್ದರೂ ಸಹ ಚಿಕ್ಕೋಡಿಯಲ್ಲಿ ಚುನಾವಣಾ ಕಾವು ಏರಿಲ್ಲ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ನಡೆಯುವ ಕ್ಷೇತ್ರವಿದು. ಹಾಲಿ ಸಂಸದರು ಬಿಜೆಪಿಯ ಅಣ್ಣಾಸಾಹೇಬ ಜೊಲ್ಲೆ. ಆದರೆ ಈ ಬಾರಿ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಅಂತಹ ಚುನಾವಣಾ ಉತ್ಸಾಹ ಕಂಡುಬರುತ್ತಿಲ್ಲ.

ಚಿಕ್ಕೋಡಿ ಕ್ಷೇತ್ರದಲ್ಲಿ ಚಿಕ್ಕೋಡಿ, ಕಾಗವಾಡ, ಅಥಣಿ, ಕುಡಚಿ, ಯವಕನಮರಡಿ, ನಿಪ್ಪಾಣಿ, ರಾಯಭಾಗ, ಹುಕ್ಕೇರಿ ವಿಧಾನಸಭಾ ಕ್ಷೇತ್ರಗಳಿವೆ. ಬಿಜೆಪಿ-ಜೆಡಿಎಸ್ ಮೈತ್ರಿಯಾದರೂ ಸಹ ಈ ಕ್ಷೇತ್ರದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂಬುದು ಸ್ಥಳೀಯರ ಮಾತು.
ಮೀಸಲು ಕ್ಷೇತ್ರವಾಗಿತ್ತು: 2009ಕ್ಕೂ ಮೊದಲು ಚಿಕ್ಕೋಡಿ ಎಸ್‌ಸಿ ಮೀಸಲು ಕ್ಷೇತ್ರವಾಗಿತ್ತು. ವಿಜಯಪುರದ ಹಾಲಿ ಸಂಸದ ರಮೇಶ ಜಿಗಜಿಣಗಿ ಮೂರು ಸಲ ಕ್ಷೇತ್ರದಿಂದ ಆಯ್ಕೆಯಾಗಿದ್ದರು. 2009ರಲ್ಲಿ ಕ್ಷೇತ್ರ ಪುನರ್ ವಿಂಗಡನೆ ಬಳಿಕ ಇದು, ಸಾಮಾನ್ಯ ಕ್ಷೇತ್ರವಾಯಿತು.
ಹಾಲಿ ಸಂಸದ ಅಣ್ಣಾಸಾಹೇಬ ಜೊಲ್ಲೆಗೆ ಈ ಬಾರಿಯೂ ಬಿಜೆಪಿ ಟಿಕೆಟ್ ಸಿಗುವುದು ಖಚಿತವಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಜೊತೆ ಅವರು ಉತ್ತಮ ಬಾಂಧವ್ಯ ಹೊಂದಿದ್ದಾರೆ. ಅಣ್ಣಾ ಸಾಹೇಬ ಜೊಲ್ಲೆ ಪತ್ನಿ ಶಶಿಕಲಾ ಜೊಲ್ಲೆ ಹಾಲಿ ಶಾಸಕರು.
ಬಿಜೆಪಿ ಟಿಕೆಟ್‌ಗಾಗಿ ಡಾ. ಪ್ರಭಾಕರೆ ಕೋರೆ ಸಹ ಪ್ರಯತ್ನ ನಡೆಸಿದ್ದಾರೆ ಎಂಬುವುದು ಸುದ್ದಿ. ಪುತ್ರ ಅಮಿತ್ ಕೋರೆಗೆ ಟಿಕೆಟ್ ನೀಡಬೇಕು ಎಂದು ಅವರು ಬೇಡಿಕೆ ಇಟ್ಟಿದ್ದಾರೆ ಎಂಬ ಮಾಹಿತಿ ಇದೆ. ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮತ್ತು ರಮೇಶ್ ಕತ್ತಿ ನಡುವೆಯೂ ಟಿಕೆಟ್‌ಗಾಗಿ ಪೈಪೋಟಿ ನಡೆಯುತ್ತಿದೆ.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಬಿಟ್ಟು ಹೋದ ಲಕ್ಷ್ಮಣ ಸವದಿಯನ್ನು ಪುನಃ ಕರೆತಂದು ಬಿಜೆಪಿ ಟಿಕೆಟ್ ನೀಡಬೇಕು ಎಂಬುದು ಸಹ ಲೆಕ್ಕಾಚಾರವಾಗಿದೆ. ರಮೇಶ್ ಕತ್ತಿ ಬೆಳಗಾವಿ ಅಥವ ಚಿಕ್ಕೋಡಿ ಒಂದು ಕಡೆ ಲೋಕಸಭೆ ಟಿಕೆಟ್ ಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಬಿಜೆಪಿಯ ಟಿಕೆಟ್ ಹಂಚಿಕೆ ಲೆಕ್ಕಾಚಾರ ನೋಡಿದ ಬಳಿಕ ಕಾಂಗ್ರೆಸ್ ಕಾದು ನೋಡುವ ತಂತ್ರಕ್ಕೆ ಶರಣಾಗಿದೆ. ಕಾಂಗ್ರೆಸ್‌ನಲ್ಲಿಯೂ ಟಿಕೆಟ್‌ಗಾಗಿ ತೀವ್ರವಾದ ಪೈಪೋಟಿ ಇದೆ. ಐವರು ಆಕಾಂಕ್ಷಿಗಳು ಟಿಕೆಟ್‌ಗಾಗಿ ಪ್ರಯತ್ನ ನಡೆಸಿದ್ದಾರೆ.
ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಮಾಜಿ ಸಚಿವ ವೀರಕುಮಾರ ಪಾಟೀಲ, ಗಜಾನನ ಮಂಗಸೂಳಿ, ಸದಾಶಿವ ಬುಟಾಳೆ, ವಕೀಲರಾದ ಮಹೇಶ ಹಟ್ಟಿಹೊಳಿ ಟಿಕೆಟ್‌ಗಾಗಿ ಕಸರತ್ತು ನಡೆಸಿದ್ದಾರೆ.
ಈ ನಡುವೆ ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ಹುಕ್ಕೇರಿ ಪ್ರಬಲ ಪೈಪೋಟಿ ನೀಡಬೇಕು ಎನ್ನುವುದು ಕಾಂಗ್ರೆಸ್ ಮುಖಂಡರ ಲೆಕ್ಕಾಚಾರವಾಗಿದೆ. ಸತೀಶ್ ಜಾರಕಿಹೊಳಿ ತಮ್ಮ ಪುತ್ರಿಗೆ ಟಿಕೆಟ್ ನೀಡಬೇಕು ಎಂದು ಪ್ರಯತ್ನ ನಡೆಸಿದ್ದಾರೆ.
ಬಿಜೆಪಿ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಆದರೆ ಕರ್ನಾಟಕದ 28 ಕ್ಷೇತ್ರಗಳ ಪೈಕಿ ಯಾವುದೇ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಜೆಡಿಎಸ್ ಜೊತೆ ಸೀಟು ಹಂಚಿಕೆ ಮಾಡಿಕೊಂಡು ಚುನಾವಣೆ ಎದುರಿಸಬೇಕಿದೆ. ಸೀಟು ಹಂಚಿಕೆ ಅಂತಿಮವಾದ ಬಳಿಕ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ನಿರೀಕ್ಷೆ ಇದೆ.












Click it and Unblock the Notifications