ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ; ಡಿಸಿ ಕಚೇರಿಗೆ ನುಗ್ಗಲು ಯತ್ನ
ಬೆಳಗಾವಿ, ಜನವರಿ 06: ಗಡಿನಾಡು ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕಾರ್ಯಕರ್ತರು ಪುಂಡಾಟ ಮಾಡಿದ್ದಾರೆ. ಕನ್ನಡ ಧ್ವಜಸ್ತಂಭ ಸ್ಥಾಪನೆ ವಿಚಾರ ಮುಂದಿಟ್ಟುಕೊಂಡು ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಗೆ ನುಗ್ಗಲು ಪ್ರಯತ್ನ ನಡೆಸಿದ್ದಾರೆ.
ಬುಧವಾರ ಎಂಇಎಸ್ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಮುಂದಿನ ಬ್ಯಾರಿಕೇಡ್‌ಗಳನ್ನು ತಳ್ಳಿ ಜಿಲ್ಲಾಧಿಕಾರಿಗಳ ಕಚೇರಿಗೆ ನುಗ್ಗಲು ಪ್ರಯತ್ನ ನಡೆಸಿದರು. ಪೊಲೀಸರ ಸಮ್ಮುಖದಲ್ಲಿಯೇ ನಾಡದ್ರೋಹಿ ಘೋಷಣೆಗಳನ್ನು ಕೂಗಿದರು.
ಬೆಳಗಾವಿ, ಬೀದರ್, ಭಾಲ್ಕಿ, ನಿಪ್ಪಾಣಿಯನ್ನು ಮಹಾರಾಷ್ಟ್ರ ರಾಜ್ಯಕ್ಕೆ ಸೇರಿಸಲೇಬೇಕೆಂದು ಎಂಇಎಸ್ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು. ಇದರಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಬೆಳಗಾವಿ ಮಹಾನಗರ ಪಾಲಿಕೆ ಕಚೇರಿ ಎದುರಿರುವ ಕನ್ನಡ ಧ್ವಜವನ್ನು ತೆರವುಗೊಳಿಸಬೇಕೆಂದು ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠಗೆ ಮನವಿ ಸಲ್ಲಿಸಲು ಎಂಇಎಸ್ ಕಾರ್ಯಕರ್ತರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಪುಂಡಾಟ ಮಾಡಿದ್ದಾರೆ.
ಏರುಧ್ವನಿಯಲ್ಲಿಯೇ ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ ಜೊತೆ ಎಂಇಎಸ್ ಮುಖಂಡರು ಮಾತನಾಡಿದ್ದಾರೆ. "ಕನ್ನಡ ಧ್ವಜ ತೆರವಿಗೆ ಈ ಮೊದಲು ನಾವು ಮನವಿ ಮಾಡಿದ್ದೇವೆ. ಈಗ ಮತ್ತೆ 15 ದಿನಗಳ ಕಾಲದ ಗಡುವು ನೀಡಿದ್ದೇವೆ. ಕನ್ನಡ ಧ್ವಜ ತೆರವುಗೊಳಿಸದಿದ್ದರೆ ಭಗವಾ ಧ್ವಜ ಹಾರಿಸುತ್ತೇವೆಂದು" ಎಂದು ಹೇಳಿದ್ದಾರೆ.
ಡಿಸೆಂಬರ್ 28ರಂದು ಕನ್ನಡಪರ ಸಂಘಟನೆಗಳ ಸದಸ್ಯರು ಬೆಳಗಾವಿ ಮಹಾನಗರ ಪಾಲಿಕೆ ಕಚೇರಿ ಮುಂದೆ ಕನ್ನಡ ಧ್ವಜಸ್ತಂಭ ಸ್ಥಾಪಿಸಿ, ಕನ್ನಡ ಬಾವುಟ ಹಾರಿಸಿದ್ದಾರೆ. ಇದನ್ನು ತೆರವುಗೊಳಿಸಬೇಕು ಎಂದು ಎಂಇಎಸ್ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಈ ಕುರಿತು ಮಂಗಳವಾರ ಟ್ವೀಟ್ ಮಾಡಿದ್ದರು. "ಬೆಳಗಾವಿಯಲ್ಲಿ ಕನ್ನಡ ಧ್ವಜದ ವಿಚಾರದಲ್ಲಿ ನಡೆಯುತ್ತಿರುವ ಕಿತಾಪತಿಗಳನ್ನು ಸರ್ಕಾರ ನೋಡಿಯೂ ಸುಮ್ಮನಿದೆಯೇ? ಅಥವಾ 'ಕನ್ನಡಿಗರಿಗೆ ಸರ್ಕಾರ ಹೆದರಬಾರದು' ಎಂದು ಬಿಜೆಪಿ ಶಾಸಕರೊಬ್ಬರು ಹಿಂದೆ ಹೇಳಿದ್ದ ಮಾತನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆಯೇ? ಬೆಳಗಾವಿಯ ಕನ್ನಡ ವಿರೋಧಿ ಪುಂಡರ ವಿರುದ್ಧ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು" ಎಂದು ಆಗ್ರಹಿಸಿದ್ದರು.












Click it and Unblock the Notifications