Belagavi: ಬೆಳಗಾವಿ ಜಿಲ್ಲೆ ವಿಭಜನೆಗೆ ದಸರಾ ನಂತರ ಮನವಿ; ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ ಜಿಲ್ಲೆ ವಿಭಜನೆ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಬೆಳಗಾವಿ ಜಿಲ್ಲೆ ವಿಭಜನೆ ಬಗ್ಗೆ ಮಾತನಾಡಿದ್ದು, ಈ ಬಾರಿ ದಸರಾ ಹಬ್ಬ ಮುಗಿದ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರಿಗೆ ಮನವಿ ಪತ್ರ ಕೊಡುತ್ತೇವೆ ಎಂದು ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಅಭಿವೃದ್ಧಿ ದೃಷ್ಟಿಯಿಂದ ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡಬೇಕು. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರ ಜೊತೆ ಚರ್ಚೆ ನಡೆಸಿ ಮನವಿ ಪತ್ರ ಕೊಡುತ್ತೇವೆ. ಯಾವ ಭಾಗವನ್ನು ಹೊಸ ಜಿಲ್ಲೆ ಮಾಡಬೇಕು ಎನ್ನುವುನ್ನು ನಾನು ಹೇಳುವುದಿಲ್ಲ. ಬೆಳಗಾವಿಯನ್ನು ಎರಡು ಅಥವಾ ಮೂರು ಜಿಲ್ಲೆಗಳಾಗಿ ವಿಭಜನೆ ಮಾಡಿದರೆ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.

ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ
ಮುಡಾ ಸೈಟು ಹಂಚಿಕೆ ಪ್ರಕರಣದಕ್ಕೆ ಸಂಬಂಧಪಟ್ಟಂತೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸುತ್ತಿರುವ ಬಿಜೆಪಿ ನಾಯಕರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು ಕೊಟ್ಟಿದ್ದಾರೆ. ಮೊದಲು ಪ್ರಧಾನಿ ನರೇಂದ್ರ ಮೋದಿ, ಸಚಿವೆ ನಿರ್ಮಲಾ ಸೀತಾರಾಮನ್, ಹೆಚ್‌ಡಿ ಕುಮಾರಸ್ವಾಮಿ ರಾಜಿನಾಮೆ ಕೊಡಲಿ ಎಂದು ಕೇಳಿದರು.
ಸಿದ್ದರಾಮಯ್ಯನವರು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ, ಕಾನೂನು ಪ್ರಕಾರ ತನಿಖೆ ನಡೆಯಲಿ. ರಾಜೀನಾಮೆ ಕೇಳುವ ಬಿಜೆಪಿಗರಿಗೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದರು. ಚುನಾವಣಾ ಬಾಂಡ್ ಪ್ರಕರಣದಲ್ಲಿ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸಲು ಸುಪ್ರೀಂ ಕೋರ್ಟ್ ಸೂಚನೆ ಕೊಟ್ಟಿದೆ, ಕೋರ್ಟ್ ಆದೇಶದ ಪ್ರಕಾರ ಮೊದಲು ಅವರ ಮೇಲೆ ಪ್ರಕರಣ ದಾಖಲಿಸಲಿ ಎಂದು ಒತ್ತಾಯಿಸಿದರು.
ಚುನಾವಣೆ ಸಂದರ್ಭದಲ್ಲಿ ನಮ್ಮ ಗ್ಯಾರಂಟಿ ಯೋಜನೆಗಳನ್ನು ಗಿಮಿಕ್ ಎಂದು ಬಿಜೆಪಿಯವರು ಆಡಿಕೊಂಡಿದ್ದರು. ಆದರೆ ನಾವು ಅಧಿಕಾರಕ್ಕೆ ಬಂದ 100 ದಿನಗಳಲ್ಲೇ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ ಎಂದು ಹೇಳಿದರು.
ರಾಜ್ಯದಲ್ಲಿ ನಾವು ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಬಿಜೆಪಿ ನಾಯಕರು, ಜಮ್ಮು ಮತ್ತು ಕಾಶ್ಮೀರ, ಹರಿಯಾಣ ರಾಜ್ಯಗಳ ವಿಧಾನಸಭಾ ಚುನಾವಣೆ ಪ್ರಣಾಳಿಕೆಯಲ್ಲಿ ಇದೇ ಯೋಜನೆಗಳನ್ನು ಅನುಕರಣೆ ಮಾಡುತ್ತಿದ್ದಾರೆ. ಇಡೀ ದೇಶಕ್ಕೆ ಕರ್ನಾಟಕದ ಗ್ಯಾರಂಟಿ ಯೋಜನೆಗಳು ಮಾದರಿಯಾಗಿವೆ ಎಂದು ಹೇಳಿದರು.












Click it and Unblock the Notifications