Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಗುಣಮುಖರಾಗಲು ಸಿ. ಟಿ. ರವಿ ಪ್ರಾರ್ಥನೆ
ಬೆಳಗಾವಿ, ಜನವರಿ 14: ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಮಂಗಳವಾರ ಮುಂಜಾನೆ ಕಿತ್ತೂರು ತಾಲೂಕಿನ ಅಂಬರಗಟ್ಟಿ ಬಳಿ ಅಪಘಾತ ನಡೆದಿದ್ದು, ಸಚಿವರು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಬೆಂಗಳೂರಿನಿಂದ ಬೆಳಗಾವಿಯ ನಿವಾಸಕ್ಕೆ ತೆರಳುವಾಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಅವರ ಸಹೋದರ, ಎಂಎಲ್‌ಸಿ ಚನ್ನರಾಜ್ ಹಟ್ಟಿಹೊಳಿ ಕಾರು ಮರಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕಾರಿಗೆ ಅಡ್ಡಬಂದ ನಾಯಿಯನ್ನು ತಪ್ಪಿಸಲು ಹೋದಾಗ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿಯಾಗಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಬೆನ್ನಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು, ಸುಮಾರು 1 ತಿಂಗಳ ಕಾಲ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದಾರೆ. ಚನ್ನರಾಜ್ ಹಟ್ಟಿಹೊಳಿ ಅವರಿಗೆ ಸಹ ಕಿವಿ, ತಲೆಗೆ ಚಿಕ್ಕಪುಟ್ಟ ಗಾಯವಾಗಿದೆ.
ಸಿ. ಟಿ. ರವಿ ಪ್ರಾರ್ಥನೆ: ಬಿಜೆಪಿ ನಾಯಕ, ಎಂಎಲ್‌ಸಿ ಸಿ. ಟಿ. ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. 'ಇಂದು ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ಶೀಘ್ರ ಗುಣಮುಖರಾಗಲಿ ಎಂದು ಶ್ರೀ ದೇವರಲ್ಲಿ ಪ್ರಾರ್ಥಿಸುವೆ' ಎಂದು ಹೇಳಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಿ. ಟಿ. ರವಿ ನಡುವೆ ಡಿಸೆಂಬರ್‌ನಲ್ಲಿ ದೊಡ್ಡ ಜಟಾಪಟಿ ನಡೆದಿತ್ತು. ಈ ಕುರಿತು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಈ ಕುರಿತ ತನಿಖೆಯನ್ನು ಕರ್ನಾಟಕ ಸರ್ಕಾರ ಸಿಐಡಿಗೆ ಸಹ ಹಸ್ತಾಂತರ ಮಾಡಿದೆ.
2024ರ ಡಿಸೆಂಬರ್ 19ರಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನ ಪರಿಷತ್ ಸದಸ್ಯ ಸಿ. ಟಿ. ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ವಿಧಾನ ಪರಿಷತ್ ಆವರಣದಲ್ಲಿ ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆ ಎಂಬುದು ಆರೋಪವಾಗಿದೆ. ಈ ಕುರಿತು ಕಾಂಗ್ರೆಸ್, ಬಿಜೆಪಿ ನಾಯಕರ ವಿರುದ್ಧ ಇಂದಿಗೂ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿವೆ.
ಸಿದ್ದರಾಮಯ್ಯ ಪೋಸ್ಟ್: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. "ಸಂಪುಟ ಸಹೋದ್ಯೋಗಿಯಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ವಿಚಾರ ತಿಳಿಯಿತು. ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಇಬ್ಬರೂ ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ" ಎಂದು ಹೇಳಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ, ಅವರ ಆರೋಗ್ಯದ ಕುರಿತು ಪುತ್ರ ಮೃಣಾಲ್ ಹೆಬ್ಬಾಳ್ಕರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮೃಣಾಲ್ ಹೆಬ್ಬಾಳ್ಕರ್, ಲಕ್ಷ್ಮೀ ಹೆಬ್ಬಾಳ್ಕರ್ ಪತಿ ರವೀಂದ್ರ ಹೆಬ್ಬಾಳ್ಕರ್ ಮುಂತಾದವರು ಆಸ್ಪತ್ರೆಯಲ್ಲಿದ್ದಾರೆ.
ಮಾಜಿ ಸಚಿವೆ, ಬಿಜೆಪಿ ಶಾಸಕಿ ಶಶಿಕಲಾ ಜೊಲ್ಲೆ, ವಿವಿಧ ಮಠದ ಸ್ವಾಮೀಜಿಗಳು ಈಗಾಗಲೇ ಬೆಳಗಾವಿ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯವನ್ನು ವಿಚಾರಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಎಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುತ್ತದೆ? ಎಂದು ವೈದ್ಯರು ಇನ್ನೂ ಸಹ ಮಾಹಿತಿ ನೀಡಿಲ್ಲ.












Click it and Unblock the Notifications