ಬೆಳಗಾವಿ: ಮುಂದುವರೆದ ಸತೀಶ ಜಾರಕಿಹೊಳಿ ಬೆಂಬಲಿಗರ ಪ್ರತಿಭಟನೆ
ಬೆಳಗಾವಿ, ಜೂನ್.07: ಸತೀಶ ಜಾರಕಿಹೊಳಿ ಬೆಂಬಲಿಗರು ಗ್ರಾಮೀಣ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಇಂದು ದಾಂಧಲೆ ನಡೆಸಿದರು.
ಸತೀಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡದಿರುವುದಕ್ಕೆ ಆಕ್ರೋಶಗೊಂಡ ಅಭಿಮಾನಿಗಳು ಕಾಂಗ್ರೆಸ್ ಕಚೇರಿಗೆ ಹಾಕಿದ್ದ ಬ್ಯಾನರ್ ಹರಿದು, ಹೂವಿನ ಕುಂಡಲಿಗಳನ್ನ ಒಡೆದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಕಚೇರಿಗೆ ಬೀಗ ಹಾಕಿದ ಹಿನ್ನೆಲೆಯಲ್ಲಿ ಹೊರಗಡೆಯಿಂದಲೇ ದಾಂಧಲೆ ನಡೆಸಿ, ಕಚೇರಿ ಮುಂಭಾಗದಲ್ಲಿ ಧರಣಿ ಕುಳಿತಿದ್ದು, ಪೊಲೀಸರ ಸಮ್ಮುಖದಲ್ಲಿ ಅಭಿಮಾನಿಗಳು ದಾಂಧಲೆ ನಡೆಸಿದರು.

ಜೆಡಿಎಸ್ -ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ಎಐಸಿಸಿ ಕಾರ್ಯದರ್ಶಿ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಅವರ ಅಭಿಮಾನಿಗಳು ಬುಧವಾರ ಕೂಡ ಜಿಲ್ಲೆಯ ವಿವಿಧೆಡೆ ಪ್ರತಿಭಟನೆ ನಡೆಸಿದ್ದರು.
ಸತೀಶ ಜಾರಕಿಹೊಳಿ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಮೊದಲು ಸಣ್ಣ ಕೈಗಾರಿಕೆ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಕೊನೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಿಸಿ ಅವರ ಖಾತೆಯನ್ನು ಹಿರಿಯ ಸಹೋದರ ರಮೇಶ ಜಾರಕಿಹೊಳಿ ಅವರಿಗೆ ಹಸ್ತಾಂತರಿಸಲಾಗಿತ್ತು.












Click it and Unblock the Notifications