ಬೆಳಗಾವಿಯ ಸವದತ್ತಿ ಯಲ್ಲಮ್ಮ ದೇವಾಲಯದ ಭಕ್ತರಿಗೆ ಸಿಹಿಸುದ್ದಿ
ಬೆಳಗಾವಿ, ಜನವರಿ 09; ಉತ್ತರ ಕರ್ನಾಟಕದ ಭಾಗದ ಪ್ರಸಿದ್ಧ ಧಾರ್ಮಿಕ ಕೇಂದ್ರ ಸವದತ್ತಿ ಯಲ್ಲಮ್ಮ ದೇವಾಲಯದ ಭಕ್ತರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಮುಜರಾಯಿ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜಂಟಿಯಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲಿವೆ.
ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಸವದತ್ತಿ ಯಲ್ಲಮ್ಮ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಕೆ ಮಾಡಿದರು. ಬಳಿಕ ಅವರು ದೇವಾಲಯದ ಅಭಿವೃದ್ಧಿ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಸಭೆಯಲ್ಲಿ ಶಾಸಕ ವಿಶ್ವಾಸ್ ವೈದ್ಯ, ಮುಜರಾಯಿ ಇಲಾಖೆಯ ಆಯುಕ್ತ ಬಸವರಾಜೇಂದ್ರ, ಯಲ್ಲಮ್ಮ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಸ್. ಪಿ. ಬಿ. ಮಹೇಶ್, ಲೋಕೋಪಯೋಗಿ ಇಲಾಖೆ, ನಿರ್ಮಿತಿ ಕೇಂದ್ರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ದೇವಾಲಯದ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್; ಸಭೆಯಲ್ಲಿ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, "ಪ್ರತಿವರ್ಷ ಕೋಟ್ಯಂತರ ಜನರು ಭೇಟಿ ನೀಡುವ ಸವದತ್ತಿ ಯಲ್ಲಮ್ಮ ದೇವಸ್ಥಾನ ಹಾಗೂ ಯಲ್ಲಮ್ಮ ಗುಡ್ಡದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸಲಾಗುವುದು" ಎಂದು ತಿಳಿಸಿದರು.
"ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಕೋಟ್ಯಂತರ ಜನರು ಭೇಟಿ ನೀಡುತ್ತಾರೆ. ಜಾತ್ರೆ ಸಂದರ್ಭದಲ್ಲಿ ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಒದಗಿಸುವುದರ ಜತೆಗೆ ಲಕ್ಷಾಂತರ ಜನರಿಗೆ ಸುಗಮ ದರ್ಶನಕ್ಕೆ ಅನುಕೂಲವಾಗುವಂತೆ ಮಾಸ್ಟರ್ ಪ್ಲಾನ್ ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ" ಎಂದರು.
"ನಾಲ್ಕೈದು ಗಂಟೆಗಳ ಕಾಲ ಸರತಿ ಸಾಲಿನಲ್ಲಿ ನಿಲ್ಲುವ ಭಕ್ತಾದಿಗಳಿಗೆ ಅನುಕೂಲವಾಗುವಂತೆ ಕುಡಿಯುವ ನೀರು, ನೆರಳು, ಶೌಚಾಲಯ ವ್ಯವಸ್ಥೆ ಮತ್ತಿತರ ಮೂಲಸೌಕರ್ಯಗಳನ್ನು ಒದಗಿಸಬೇಕಾಗುತ್ತದೆ. ಇವೆಲ್ಲವುಗಳನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ" ಎಂದು ಸಚಿವರು ಹೇಳಿದರು.
"ಮುಜರಾಯಿ ಹಾಗೂ ಪ್ರವಾಸೋದ್ಯಮ ಇಲಾಖೆಗಳ ವತಿಯಿಂದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ. ಮುಜರಾಯಿ ಇಲಾಖೆಗೆ ಸಂಬಂಧಿಸಿದಂತೆ ಲಭ್ಯವಿರುವ 87 ಎಕರೆ ಪ್ರದೇಶದಲ್ಲಿ ಮುಂದಿನ 10 ವರ್ಷಗಳ ಅವಧಿಯಲ್ಲಿ ಹಂತ ಹಂತವಾಗಿ ಅನುಷ್ಠಾನಗೊಳಿಸಬಹುದಾದ ಸಮಗ್ರ ಯೋಜನೆ ರೂಪಿಸಲಾಗುವುದು" ಎಂದರು.
"ದೇವಾಲಯ ಪ್ರತಿವರ್ಷ ಅಂದಾಜು ರೂ. 20 ಕೋಟಿ ಆದಾಯ ಹೊಂದಿದೆ. ಈ ಆದಾಯದಲ್ಲಿ ದೇವಾಲಯ ನಿರ್ವಹಣೆ ಬಳಿಕ ಉಳಿಯುವ ಹಣವನ್ನು ಮಾಸ್ಟರ್ ಪ್ಲಾನ್ ಅನುಷ್ಠಾನಕ್ಕೆ ಬಳಸಬಹುದಾಗಿದೆ. ಇದಲ್ಲದೇ ಸರಕಾರದಿಂದಲೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಬಹುದು" ಎಂದು ತಿಳಿಸಿದರು.
"ಇದಲ್ಲದೇ ಪ್ರವಾಸೋದ್ಯಮ ಇಲಾಖೆಯ ವತಿಯಿಂದಲೂ ಪ್ರತ್ಯೇಕ ಯೋಜನೆಯನ್ನು ಕೂಡ ರೂಪಿಸುವ ಮೂಲಕ ಒಟ್ಟಾರೆ ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ ಕಾಲಮಿತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು" ಎಂದು ಸಚಿವರು ಭರವಸೆ ನೀಡಿದರು.
ಸಭೆಯಲ್ಲಿಮಾತನಾಡಿದ ಸವದತ್ತಿ ಶಾಸಕ ವಿಶ್ವಾಸ್ ವೈದ್ಯ, "ಯಲ್ಲಮ್ಮ ದೇವಿ ದೇವಸ್ಥಾನದ ಒಳಹೋಗಲು ಒಂದು ದ್ವಾರ ಮಾತ್ರ ತೆರೆಯಲಾಗಿದೆ. ಆದರೆ, ಗುಡ್ಡಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚುತ್ತಿರುವುದರಿಂದ ನಾಲ್ಕೂ ದ್ವಾರಗಳನ್ನು ತೆರೆದು ಅನುಕೂಲ ಕಲ್ಪಿಸಬೇಕು. ಭಕ್ತರು ಸುಲಭವಾಗಿ ದರ್ಶನ ಪಡೆಯಲು ಅನುಕೂಲವಾಗುವಂತೆ ದೇವಸ್ಥಾನದ ಎರಡು ಕಡೆ ಕಾಲುಸೇತುವೆ ನಿರ್ಮಿಸಬೇಕು"ಎಂದು ಸಲಹೆ ನೀಡಿದರು.












Click it and Unblock the Notifications