ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶ; ಸಿದ್ಧತೆ ಪರಿಶೀಲಿಸಿ ಸ್ಪೀಕರ್ ಖಾದರ್

ಬೆಳಗಾವಿ, ನವೆಂಬರ್ 08; "ವಿಧಾನಮಂಡಲ ಚಳಿಗಾಲ ಅಧಿವೇಶನದಲ್ಲಿ ಭಾಗವಹಿಸುವ ಸಚಿವರು, ಶಾಸಕರು, ಅಧಿಕಾರಿಗಳು ಸೇರಿದಂತೆ ಎಲ್ಲರಿಗೂ ಸೂಕ್ತವಾದ ವಸತಿ, ಊಟ ಹಾಗೂ ಸಾರಿಗೆ ಸೌಕರ್ಯಗಳನ್ನು ಒದಗಿಸಬೇಕು. ಕಲಾಪ ಸುಗಮವಾಗಿ ನಡೆಸಲು ಅಗತ್ಯವಿರುವ ಮೂಲಸೌಲಭ್ಯಗಳನ್ನು ಒದಗಿಸಬೇಕು" ಎಂದು ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು. ಟಿ. ಖಾದರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್‌ನಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸ್ಪೀಕರ್ ಯು. ಟಿ. ಖಾದರ್ ಹಾಗೂ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಧಿವೇಶನದ ಪೂರ್ವಸಿದ್ಧತೆ ಪರಿಶೀಲಿಸಿದರು. ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಮಂಗಳವಾರ ಅಧಿಕಾರಿಗಳ ಮತ್ತು ವಿವಿಧ ಸಮಿತಿಗಳ ಮುಖ್ಯಸ್ಥರ ಸಭೆಯನ್ನು ನಡೆಸಿದರು. ಅಧಿವೇಶನಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಚನೆಗಳನ್ನು ಕೊಟ್ಟರು.

Speaker UT Khader Inspects Winter Session Preparations At Suvarna Vidhana Soudha

ಅಧಿಕಾರಿಗಳಿಗೆ ಸೂಚನೆ; ಯು. ಟಿ. ಖಾದರ್ ಮಾತನಾಡಿ, "ಅಧಿವೇಶನ ಸಂದರ್ಭದಲ್ಲಿ ಯಾವುದೇ ರೀತಿಯ ಅವ್ಯವಸ್ಥೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಏನೇ ಸಮಸ್ಯೆಗಳಿದ್ದರೆ ಅಥವಾ ಹೆಚ್ಚಿನ ಅನುಕೂಲತೆ ಬೇಕಾದರೆ ತಮ್ಮ ಅಥವಾ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು. ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಮಿತಿಗಳು ತಮಗೆ ವಹಿಸಲಾಗಿರುವ ಜವಾಬ್ದಾರಿಗಳನ್ನು ನಿಭಾಯಿಸಬೇಕು" ಎಂದರು.

"ಸಚಿವರು, ಶಾಸಕರು, ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು, ಗಣ್ಯರು ಸೇರಿದಂತೆ ಸಾವಿರಾರು ಜನರು ಆಗಮಿಸುತ್ತಾರೆ. ಆದ್ದರಿಂದ ಉತ್ತಮ ಹಾಗೂ ಗುಣಮಟ್ಟದ ಆಹಾರ, ವಸತಿ, ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಬೇಕು. ಮದುವೆ ಸಮಾರಂಭಗಳೂ ಅದೇ ಸಮಯದಲ್ಲಿ ಇರುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗುವಂತೆ ನಗರದ ಕೆಲವು ನಿರ್ದಿಷ್ಟ ಹೋಟೆಲ್‌ಗಳಲ್ಲಿ ಸಾರ್ವಜನಿಕರಿಗೆ ಶೇ.10 ರಷ್ಟು ಅವಕಾಶ ಕಲ್ಪಿಸಬೇಕು. ಈ ಬಗ್ಗೆ ಮುಂಚಿತವಾಗಿ ಹೋಟೆಲ್ ಮಾಲೀಕರಿಗೆ ಹಾಗೂ ಸಾರ್ವಜನಿಕರಿಗೆ ಮಾಹಿತಿಯನ್ನು ನೀಡಬೇಕು" ಎಂದು ಯು. ಟಿ. ಖಾದರ್ ತಿಳಿಸಿದರು.

"ಸುವರ್ಣ ವಿಧಾನಸೌಧ, ಸಚಿವರು, ಶಾಸಕರು, ಅಧಿಕಾರಿಗಳು, ಸಿಬ್ಬಂದಿ ತಂಗುವ ಹೋಟೆಲ್‌ಗಳ ಬಳಿ ತುರ್ತು ವೈದ್ಯಕೀಯ ಸೌಲಭ್ಯ ಒದಗಿಸಲು ತಂಡಗಳನ್ನು ನಿಯೋಜಿಸಬೇಕು. ಸಂಪೂರ್ಣ ವಿಧಾನಸೌಧ ಕಾಣಿಸುವಂತಹ ಸೆಲ್ಫಿ ಸ್ಪಾಟ್ ನಿಗದಿಪಡಿಸಬೇಕು. ಅಧಿವೇಶನ ಕಲಾಪ ವೀಕ್ಷಣೆಗೆ ಆಗಮಿಸುವ ಜನರಿಗೆ ಇದೊಂದು ಸ್ಮರಣೀಯ ಅವಕಾಶವಾಗಬೇಕು" ಎಂದು ಹೇಳಿದರು.

ಸುಂದರ ಉದ್ಯಾನ ನಿರ್ಮಾಣ; "ಅಧಿವೇಶನ ಸಂದರ್ಭದಲ್ಲಿ ವಿಧಾನಸೌಧದ ಹೊರಗಡೆ ಆವರಣದಲ್ಲಿ ಚಾಲಕರು, ಇತರೆ ಸಿಬ್ಬಂದಿಗೆ ಊಟದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಬೇಕು. ಸಾಧ್ಯವಾದರೆ ಕೂಪನ್‌ ನೀಡಬಹುದು" ಎಂದು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

"ಕಲಾಪ ವೀಕ್ಷಣೆಗೆ ಆಗಮಿಸುವ ಶಾಲಾ ಮಕ್ಕಳ ಬಸ್‌ಗಳಿಗೆ ವಿಧಾನಸೌಧದ ಒಳಗಡೆಯ ಮುಖ್ಯದ್ವಾರದವರೆಗೆ ಅವಕಾಶ ಕಲ್ಪಿಸಬೇಕು ಎಂದು ಪೊಲೀಸ್ ಇಲಾಖೆಯ ಆಯುಕ್ತರಿಗೆ ತಿಳಿಸಿದರು. ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಸುಂದರ ಉದ್ಯಾನ ನಿರ್ಮಿಸುವುದಕ್ಕೆ ಸಂಬಂಧಿಸಿದಂತೆ ತೋಟಗಾರಿಕೆ ಮತ್ತು ಲೋಕೋಪಯೋಗಿ ಇಲಾಖೆಯವರು ಪರಿಶೀಲನೆ ನಡೆಸಿ ಸೂಕ್ತ ಪ್ರಸ್ತಾವನೆ ಸಲ್ಲಿಸಬೇಕು" ಎಂದರು.

ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾತನಾಡಿ, "ವಸತಿ, ಊಟೋಪಹಾರ ಹಾಗೂ ಸಾರಿಗೆ ವ್ಯವಸ್ಥೆ ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ಸಮಿತಿಗಳನ್ನು ರಚಿಸಲಾಗಿದ್ದು, ಈಗಾಗಲೇ ಹಲವು ಸುತ್ತಿನ ಸಭೆ ನಡೆಸಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕಳೆದ ವರ್ಷ ಖಾಸಗಿ ವಾಹನಗಳನ್ನು ಪಡೆಯದೇ ಸರಕಾರಿ ವ್ಯವಸ್ಥೆ ಬಳಸಿಕೊಂಡು ಕಾರ್ಯನಿರ್ವಹಿಸಲಾಗಿದೆ. ಕಳೆದ ಬಾರಿಯಂತೆ ಶಾಸಕರ ಆಪ್ತ ಸಹಾಯಕರು, ಗನ್ ಮ್ಯಾನ್ ಮತ್ತಿತರರಿಗೆ ಪಾವತಿ ಆಧಾರದ ಮೇಲೆ ಕೆಲವೊಂದು ಹೋಟೆಲ್‌ಗಳನ್ನು ನಿಗದಿಪಡಿಸಲಾಗಿತ್ತು. ಈ ಬಾರಿಯೂ ಕೂಡ ಅದೇ ರೀತಿ ಮಾಡಲಾಗುವುದು" ಎಂದು ತಿಳಿಸಿದರು.

"ಅಧಿವೇಶನದ ವಸತಿ ಹಂಚಿಕೆ, ಅಧಿಕಾರಿಗಳ ವಿವರ ಸೇರಿದಂತೆ ಪ್ರತಿಯೊಂದು ಮಾಹಿತಿಯನ್ನು ಒಳಗೊಂಡ ಕ್ಯೂಆರ್ ಕೋಡ್ ಪುಸ್ತಕದ ಸಾಫ್ಟ್ ಪ್ರತಿಯನ್ನು ಪ್ರತಿಯೊಬ್ಬರಿಗೂ ವಿತರಿಸಲಾಗುವುದು. ಇದಲ್ಲದೇ ಕ್ಯೂಆರ್ ಕೋಡ್ ಅನ್ನು ಸುವರ್ಣ ವಿಧಾನಸೌಧದ ಮೂಲೆ ಮೂಲೆಗಳಲ್ಲಿ ಪ್ರದರ್ಶಿಸಲಾಗುವುದು. ಆರೋಗ್ಯ ಸಮಿತಿಯು ಸುವರ್ಣ ವಿಧಾನಸೌಧ, ವಸತಿಗೃಹಗಳು ಸೇರಿದಂತೆ ಪ್ರತಿಯೊಂದು ಕಡೆಗಳಲ್ಲಿ ವೈದ್ಯಕೀಯ ತಂಡಗಳನ್ನು ಮತ್ತು ಆಂಬ್ಯುಲೆನ್ಸ್ ನಿಯೋಜಿಸಲಿದೆ" ಎಂದರು.

ಪೊಲೀಸ್ ಆಯುಕ್ತ ಎಸ್. ಎನ್. ಸಿದ್ದರಾಮಪ್ಪ ಮಾತನಾಡಿ, "ಪೊಲೀಸ್ ವಸತಿಗೆ ವಿಶೇಷ ತಾತ್ಕಾಲಿಕ ಟೌನ್ ಷಿಪ್ ನಿರ್ಮಿಸಿ ಕೊಡಲಾಗುತ್ತಿದೆ. ಒಟ್ಟು 22 ಕಡೆಗಳಲ್ಲಿ ವ್ಯವಸ್ಥೆ ಮಾಡಲಾಗುತ್ತಿದ್ದು, ಜಿಲ್ಲಾಡಳಿತದ ಸಮನ್ವಯದೊಂದಿಗೆ ಸಮರ್ಪಕ ಸೌಕರ್ಯಗಳನ್ನು ಒದಗಿಸಲಾಗುವುದು" ಎಂದು ಹೇಳಿದರು.

ಸುವರ್ಣ ವಿಧಾನಸೌಧವನ್ನು ಬೆಂಗಳೂರಿನ ವಿಧಾನಸೌಧದ ಮಾದರಿಯಲ್ಲಿ ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸ್ಪೀಕರ್ ಯು. ಟಿ. ಖಾದರ್ ಮತ್ತು ಬಸವರಾಜ ಹೊರಟ್ಟಿ ಸೂಚನೆ ನೀಡಿದರು.

ಸುವರ್ಣ ವಿಧಾನಸೌಧ ಕಟ್ಟಡವನ್ನು ವೀಕ್ಷಿಸಿದ ಯು. ಟಿ. ಖಾದರ್, "ಪಶ್ಚಿಮ ಪ್ರವೇಶದ್ವಾರದ ಕೆಲವು ಕಡೆಗಳಲ್ಲಿ ಬಣ್ಣ ಮಾಸಿರುವುದು ಹಾಗೂ ಕಲೆಗಳಿರುವುದನ್ನು ಸರಿಪಡಿಸಲು ಸೂಚಿಸಿದರಲ್ಲದೇ ವರ್ಷವಿಡೀ ಸುವರ್ಣ ಸೌಧದ ಉತ್ತಮ ನಿರ್ವಹಣೆಗೆ ಸಂಬಂಧಿಸಿದಂತೆ‌ ಶಾಶ್ವತ ಯೋಜನೆ ರೂಪಿಸಲಾಗುವುದು" ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+