ಬೆಳಗಾವಿಯ ರಾಮದುರ್ಗ ಕಾಲೇಜಿನಲ್ಲೂ ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು
ಬೆಳಗಾವಿ, ಫೆಬ್ರವರಿ 4: ಉಡುಪಿಯ ಸರ್ಕಾರಿ ಕಾಲೇಜು ಹಾಗೂ ಉಡುಪಿ ಜಿಲ್ಲೆಯ ಕುಂದಾಪುರದ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುವುದರ ವಿರುದ್ಧವಾಗಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿರುವುದು ಸದ್ಯ ರಾಜ್ಯದಲ್ಲಿ ವಿವಾದ ಸೃಷ್ಟಿಯಾಗಿದೆ.
ಈ ನಡುವೆಯೇ ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಸರ್ಕಾರಿ ಪಿಯು ಕಾಲೇಜಿನ ಕೆಲವು ಹಿಂದೂ ವಿದ್ಯಾರ್ಥಿಗಳು ಕೂಡ ಕೇಸರಿ ಶಾಲು ಹಾಕಿಕೊಂಡು ಹಾಜರಾಗಿದ್ದಾರೆ. ಇದರಿಂದ ಕಾಲೇಜಿನಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
ತರಗತಿಯಿಂದ ಹೊರಬರುವ ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿರುವುದು ಹಾಗೂ ಕೆಲವರಿಗೆ ಹಾಕಿಕೊಳ್ಳುವಂತೆ ವ್ಯಕ್ತಿಗಳಿಬ್ಬರು ಸೂಚಿಸುವುದು ವಿಡಿಯೋದಲ್ಲಿ ಸೆರೆಯಾಗಿದೆ. ಘಟನೆಯನ್ನು ಮುಚ್ಚಿ ಹಾಕುವುದಕ್ಕೆ ಕಾಲೇಜಿನವರು ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಕೇಸರಿ ಶಾಲು ತೆಗೆಸಿ ವಿದ್ಯಾರ್ಥಿಗಳಿಗೆ ಬುದ್ಧಿವಾದ ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಕಾಲೇಜಿಗೆ ಸಂಬಂಧವಿಲ್ಲದ ಹಾಗೂ ಅಲ್ಲಿ ವಿದ್ಯಾರ್ಥಿಗಳಲ್ಲದ ಕೆಲ ಯುವಕರು ಬಂದು ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಹಾಕಿಸಿದ್ದಾರೆ, ಅವರೇ ಶಾಲುಗಳನ್ನು ತಂದುಕೊಟ್ಟಿದ್ದರು ಎಂದು ತಿಳಿದುಬಂದಿದೆ. ಆ ಯುವಕರಿಗೆ ಪೊಲೀಸರು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಭದ್ರಾವತಿಯಲ್ಲೂ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳು
ಇನ್ನು ಶಿವಮೊಗ್ಗದ ಭದ್ರಾವತಿ ನ್ಯೂ ಟೌನ್‌ನ ಸರ್.ಎಂ.ವಿ. ಕಾಲೇಜಿನಲ್ಲಿ ಹಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು. ಎಲ್ಲಾ ವಿದ್ಯಾರ್ಥಿಗಳಿಗೂ ಸಮವಸ್ತ್ರ ಕಡ್ಡಾಯಗೊಳಿಸಬೇಕು ಎಂದು ವಿದ್ಯಾರ್ಥಿಗಳು, ಹಿಂದೂ ಸಂಘಟನೆಗಳ ಕಾರ್ಯಕರ್ತರು ಆಗ್ರಹಿಸಿದ್ದರು. ಇದರಿಂದ ಕೆಲವು ಹೊತ್ತು ಕಾಲೇಜಿನಲ್ಲಿ ಬಿಗುವಿನ ವಾತಾವರಣವಿತ್ತು.
ಸರ್.ಎಂ.ವಿಶ್ವೇಶ್ವರಯ್ಯ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಸಮವಸ್ತ್ರ ಕಡ್ಡಾಯವಿದೆ. ಹಾಗಿದ್ದೂ, ಮುಸ್ಲಿಂ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿನಿಯರು ತರಗತಿಗಳಲ್ಲೂ ಹಿಜಾಬ್ ಧರಿಸುತ್ತಾರೆ. ಇದು ಸರಿಯಾದ ಕ್ರಮವಲ್ಲ. ಆದ್ದರಿಂದ ತಾವು ಕೇಸರಿ ಶಾಲು ಧರಿಸಿ ತರಗತಿಗೆ ಬರುತ್ತೇವೆ ಎಂದು ಕೆಲವು ವಿದ್ಯಾರ್ಥಿಗಳು ತಿಳಿಸಿದ್ದರು.
ಹಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ, ಕಾಲೇಜಿಗೆ ಬಂದಿದ್ದರು. ಇನ್ಮುಂದೆ ಕೇಸರಿ ಶಾಲು ಧರಿಸಿಕೊಂಡೇ ತರಗತಿಗೆ ಬರುವುದಾಗಿ ಕಾಲೇಜು ಆಡಳಿತ ಮಂಡಳಿಗೆ ತಿಳಿಸಿದ್ದರು.












Click it and Unblock the Notifications