Hidkal dam: ಹಿಡಕಲ್ ಡ್ಯಾಂ ಭರ್ತಿ, ಸಂಜೆ ಘಟಪ್ರಭಾ ನದಿಗೆ ನೀರು
ಬೆಳಗಾವಿ, ಜುಲೈ 24: ಮಹಾರಾಷ್ಟ್ರದಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಕಾರಣ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿರುವ ಹಿಡಕಲ್ ಡ್ಯಾಂ ಭರ್ತಿಯಾಗುವ ಹಂತ ತಲುಪಿದೆ. ಬುಧವಾರ ಸಂಜೆಯೇ ಡ್ಯಾಂನಿಂದ ಘಟಪ್ರಭಾ ನದಿಗೆ ನೀರು ಹರಿಸಲಾಗುತ್ತದೆ.
ಈ ಕುರಿತು ಲೋಕೋಪಯೋಗಿ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಘಟಪ್ರಭಾ ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ಹಿಡಕಲ್ ಜಲಾಶಯಕ್ಕೆ ಪ್ರತಿನಿತ್ಯ ಸುಮಾರು 32,000 ಕ್ಯುಸೆಕ್ ನೀರು ಒಳಹರಿವು ಇರುವುದರಿಂದ ಜಲಾಶಯದಲ್ಲಿ ಈಗಾಗಲೇ 44 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ ಎಂದು ಹೇಳಿದ್ದಾರೆ.

ಸಂಜೆ ನೀರು ಬಿಡುಗಡೆ: ದಿನಾಂಕ 24/07/2024ರ ಸಾಯಂಕಾಲ 4 ಗಂಟೆಯಿಂದ ಹಿಡಕಲ್ ಜಲಾಶಯದಿಂದ ಸುಮಾರು 10 ಸಾವಿರ ಕ್ಯುಸೆಕ್ ನೀರನ್ನು ಹರಿಸುತ್ತಿದ್ದು ಘಟಪ್ರಭಾ ನದಿ ಪಾತ್ರದಲ್ಲಿರುವ ರೈತರು, ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ವಹಿಸಿ ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ಮನವಿ ಮಾಡಿದ್ದಾರೆ.
ಕೃಷ್ಣಾ ಹಾಗೂ ಹಿರಣ್ಯಕೇಶಿ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕಾರಣ ನದಿಪಾತ್ರದ ಜನ, ರೈತರು ಸುರಕ್ಷಿತ ಸ್ಥಳಕ್ಕೆ ತೆರಳಬೇಕು. ಬೆಳಗಾವಿ ಜಿಲ್ಲೆಯಲ್ಲಿರುವ ಕೆಲವು ಸೇತುವೆಗಳು ಜಲಾವೃತವಾಗುತ್ತಿದ್ದು, ಸಂಚರಿಸುವ ವೇಳೆ ನಾಗರೀಕರು ಎಚ್ಚರ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.
ಜಿಲ್ಲಾಧಿಕಾರಿಗಳ ಸಭೆ: ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಜಿಲ್ಲೆಯಲ್ಲಿ ಉಂಟಾಗಬಹುದಾದ ಅತಿವೃಷ್ಟಿ/ ಪ್ರವಾಹ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯನ್ನು ನಡೆಸಿದರು.
ಸಭೆಯಲ್ಲಿ ಮಾತನಾಡಿದ ಅವರು, "ಘಟಪ್ರಭಾ ಜಲಾಶಯದಲ್ಲಿ ಸದ್ಯದ ಶೇ.80 ರಷ್ಟು ಸಂಗ್ರಹಮಟ್ಟವನ್ನು ಆಧರಿಸಿ ಇಂದಿನಿಂದ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆಯ ಕುರಿತು ನಿರ್ಧರಿಸಲಾಗುವುದು. ನೀರು ಬಿಡುಗಡೆಯ ಕುರಿತು ಎಲ್ಲಾ ತಹಶೀಲ್ದಾರ್ ಹಾಗೂ ಸಾರ್ವಜನಿಕರಿಗೆ ಮಾಹಿತಿಯನ್ನು ನೀಡಲಾಗುವುದು" ಎಂದರು.
"ಜಿಲ್ಲೆಯಲ್ಲಿ ಸಂಭವನೀಯ ಪ್ರವಾಹದ ಹಿನ್ನೆಲೆಯಲ್ಲಿ ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಗುರುತಿಸಲಾಗಿರುವ 427 ಕಾಳಜಿ ಕೇಂದ್ರಗಳಿಗೆ ಎಲ್ಲಾ ತಹಶೀಲ್ದಾರರು ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಬೇಕು. ತುರ್ತು ಸಂದರ್ಭದಲ್ಲಿ ಗ್ರಾಮಸ್ಥರನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು" ಎಂದು ಸೂಚನೆ ನೀಡಿದರು.
ಬೆಳಗಾವಿ ಜಿಲ್ಲೆಯಲ್ಲಿನ ನದಿ ತೀರದ ಗ್ರಾಮಗಳ ಕುರಿತು ತಹಶೀಲ್ದಾರ್‌ರಿಂದ ಮಾಹಿತಿಯನ್ನು ಪಡೆದುಕೊಂಡ ಜಿಲ್ಲಾಧಿಕಾರಿಗಳು, ಪ್ರವಾಹದಿಂದ ಬಾಧಿತಗೊಳ್ಳಲಿರುವ ಕೃಷ್ಣಾ, ಮಲಪ್ರಭಾ ಹಾಗೂ ಘಟಪ್ರಭಾ ನದಿತೀರದ ಗ್ರಾಮಗಳಲ್ಲಿ ತಹಶೀಲ್ದಾರ್, ನೋಡಲ್ ಅಧಿಕಾರಿಗಳು, ಅಗ್ನಿಶಾಮಕ ಮತ್ತು ಪೊಲೀಸ್ ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕು ಎಂದು ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಮಳೆ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ, ಖಾನಾಪುರ, ಬೈಲಹೊಂಗಲ ಮತ್ತು ಕಿತ್ತೂರು ತಾಲೂಕಿನ ಅಂಗನವಾಡಿ, ಎಲ್ಲಾ ಸರಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಜುಲೈ 24ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನ ಪದವಿ ಪೂರ್ವ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.












Click it and Unblock the Notifications