ಬೆಳಗಾವಿ ಅಧಿವೇಶನ: ಆಡಳಿತ ಯಂತ್ರವೇ ಬೆಳಗಾವಿಯಲ್ಲಿ, ಪೊಲೀಸ್ ಭದ್ರತೆ ಹೇಗಿದೆ?
ಬೆಳಗಾವಿ, ಡಿಸೆಂಬರ್ 08: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕರ್ನಾಟಕದ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಸೋಮವಾರ ಆರಂಭವಾಗಲಿದೆ. ಡಿಸೆಂಬರ್ 9 ರಿಂದ 19ರ ತನಕ ಅಧಿವೇಶನ ನಡೆಯಲಿದ್ದು, ರಾಜ್ಯದ ಆಡಳಿತ ಯಂತ್ರವೇ ಬೆಳಗಾವಿಯಲ್ಲಿರಲಿದೆ. ಮುಖ್ಯಮಂತ್ರಿಗಳು, ಸಚಿವರು, ಶಾಸಕರು, ಅಧಿಕಾರಿಗಳು ಇರುವ ಕಾರಣ ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ವಿವಿಧ ಜಿಲ್ಲೆಗಳಿಂದ ಅಧಿವೇಶನದ ಭದ್ರತೆಗೆ ಪೊಲೀಸರನ್ನು ಕರೆಲಾಗಿದೆ.
ಬೆಳಗಾವಿ ನಗರ ಪೊಲೀಸ್ ಆಯುಕ್ತರು, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಅಧಿವೇಶನಕ್ಕೆ ಭದ್ರತೆಯನ್ನು ಕೈಗೊಳ್ಳಲಾಗಿದೆ. ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಮತ್ತು ಬೆಳಗಾವಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ನೇತೃತ್ವದಲ್ಲಿ ಪೊಲೀಸರು ಕಾರ್ಯ ನಿರ್ವಹಣೆ ಮಾಡಲಿದ್ದಾರೆ.

ಕೆಎಸ್‌ಆರ್‌ಪಿಯ ಐಜಿಪಿ ಸಂದೀಪ್ ಪಾಟೀಪ್ ಚಳಿಗಾಲದ ಅಧಿವೇಶನ ಬಂದೋಬಸ್ತ್ ಕುರಿತು ಪರಿಶೀಲನೆಯನ್ನು ನಡೆಸಿದ್ದಾರೆ. ನಗರದ ಎಲ್ಲಾ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಿರ್ದೇಶನಗಳನ್ನು ನೀಡಿದ್ದಾರೆ. ಅಧಿವೇಶನಕ್ಕೆ ನಿಯೋಜನೆಗೊಂಡಿರುವ ಪೊಲೀಸರ ವಾಸ್ತವ್ಯಕ್ಕೆ ತಾತ್ಕಾಲಿಕ ಟೌನ್‌ಶಿಪ್ ನಿರ್ಮಾಣ ಮಾಡಲಾಗಿದೆ. ಇಲ್ಲಿ ಪೊಲೀಸರಿಗೆ ಅಗತ್ಯ ಮೂಲ ಸೌಕರ್ಯಗಳ ವ್ಯವಸ್ಥೆಯನ್ನು ಮಾಡಲಾಗಿದೆ.
ಎಷ್ಟು ಪೊಲೀಸರ ನಿಯೋಜನೆ: ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುವ ಹಿನ್ನಲೆಯಲ್ಲಿ ಶಾಂತಿ & ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ವಿವಿಧ ಹಂತದ ಅಧಿಕಾರಿ/ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ಅಧಿವೇಶನ ಸಮಯದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆ ಹಿನ್ನಲೆಯಲ್ಲಿ ಕಟ್ಟೆಚ್ಚರವನ್ನು ವಹಿಸಲಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳ 3,599 ಹಾಗೂ ಬೆಳಗಾವಿ ನಗರದ 857 ಜನ ಸೇರಿ ಒಟ್ಟು 4,456 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಕಾರ್ಯ ನಿರ್ವಹಣೆ ಮಾಡಲಿದ್ದಾರೆ. ಇವರುಗಳಿಗೆ ಈಗಾಗಲೇ ಕರ್ತವ್ಯ ಹಂಚಿಕೆ ಮಾಡಿ ಜಾಗ್ರತೆಯಿಂದ ಕರ್ತವ್ಯ ನಿರ್ವಹಿಸುವಂತೆ ಸೂಚನೆ ನೀಡಲಾಗಿದೆ.
ಡಿಸೆಂಬರ್ 9ರ ಸೋಮವಾರ ಬೆಳಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗಲಿದೆ. ಇದಕ್ಕೂ ಮೊದಲು 10.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಗುರು ಶ್ರೀ ಬಸವಣ್ಣನವರು ಸ್ಥಾಪಿಸಿದ ವಿಶ್ವದ ಮೊದಲ ಸಂಸತ್ತು ಎಂಬ ಖ್ಯಾತಿಯ ಅನುಭವ ಮಂಟಪದ ಬೃಹತ್ ತೈಲವರ್ಣ ಚಿತ್ರವನ್ನು ಅನಾವರಣಗೊಳಿಸಲಿದ್ದಾರೆ.
ಚಳಿಗಾಲದ ಅಧಿವೇಶನದ ಮೊದಲ ದಿನದಂದು ವಿಧಾನಸಭೆ ಸ್ಪೀಕರ್ ಯು. ಟಿ. ಖಾದರ್ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ತೈಲವರ್ಣ ಚಿತ್ರವನ್ನು ಅನಾವರಣಗೊಳಿಸಲಿದ್ದಾರೆ. ಬಳಿಕ ವಿಧಾನಸಭೆ ಮತ್ತು ವಿಧಾನ ಪರಿಷತ್ ಕಲಾಪ ಆರಂಭವಾಗಲಿದೆ.
ಸ್ಪೀಕರ್ ಯು. ಟಿ. ಖಾದರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಈಗಾಗಲೇ ಸದನಕ್ಕೆ ಭೇಟಿ ನೀಡಿ ಅಗತ್ಯ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಒಟ್ಟು 1,397 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ಅದರಲ್ಲಿ 150 ಚುಕ್ಕೆ ಗುರುತಿನ ಪ್ರಶ್ನೆಗಳು ಹಾಗೂ 81 ಗಮನ ಸೆಳೆಯುವ ಸೂಚನೆಗಳು ಬಂದಿವೆ. ಮಂಗಳವಾರ ಹಾಗೂ ಬುಧವಾರ ಮಹಾದಾಯಿ, ರೈತರ ಸಮಸ್ಯೆ, ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತ ಚರ್ಚೆಗಳಿಗೆ ಒತ್ತು ನೀಡಲಾಗುತ್ತದೆ.
ಅಧಿವೇಶನದಲ್ಲಿ 5 ವಿಧೇಯಕಗಳ ಮೇಲೆ ಚರ್ಚೆಗಳು ನಡೆಯಲಿವೆ. ವಿಧಾನಸಭೆ ಕಲಾಪಕ್ಕೆ ಇದುವರೆಗೂ 3004 ಪ್ರಶ್ನೆಗಳು, 205 ಗಮನ ಸೆಳೆಯುವ ಸೂಚನೆಗಳು, 96 ನಿಯಮ 351ರ ಸೂಚನೆಗಳನ್ನು ಸ್ವೀಕಾರ ಮಾಡಲಾಗಿದೆ. ಬೆಂಗಳೂರಿನ ವಿಧಾನಸೌಧ ಮೊಗಸಾಲೆಯಲ್ಲಿರುವ ಮಾದರಿಯಲ್ಲಿ ಸುವರ್ಣ ಸೌಧದಲ್ಲಿ ಹೊಸದಾಗಿ ಸಭಾಧ್ಯಕ್ಷರ ಪೀಠವನ್ನು ನಿರ್ಮಾಣ ಮಾಡಲಾಗಿದೆ.
ಬೆಳಗಾವಿ ಜಿಲ್ಲಾಡಳಿತ ಅಧಿವೇಶನಕ್ಕೆ ತಯಾರಿ ಮಾಡಿಕೊಂಡಿದೆ. ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿವೇಶನಕ್ಕಾಗಿಯೇ 10 ಸಮಿತಿಗಳನ್ನು ರಚನೆ ಮಾಡಿದ್ದಾರೆ. ಅಧಿಕಾರಿಗಳಿಗೆ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದ್ದು, ಎಲ್ಲ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದ್ದಾರೆ.
ಅಧಿವೇಶನಕ್ಕೆ ಆಗಮಿಸುವ ಮುಖ್ಯಮಂತ್ರಿ, ಉಪಮುಖ್ಯಂಮತ್ರಿ, ಸಚಿವರು, ಶಾಸಕರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸೂಕ್ತ ವಸತಿ ಹಾಗೂ ಊಟದ ವ್ಯವಸ್ಥೆ ಒದಗಿಸಬೇಕು. ಈ ವಿಷಯದಲ್ಲಿ ಯಾವುದೇ ನ್ಯೂನ್ಯತೆಗಳು ಆಗದಂತೆ ನಿಗಾವಹಿಸಬೇಕು ಎಂದು ನಿರ್ದೇಶನ ನೀಡಲಾಗಿದೆ.
ಅಧಿವೇಶನಕ್ಕೆ ಆಗಮಿಸುವ ಅಧಿಕಾರಿ/ ಸಿಬ್ಬಂದಿಗಳಿಗೆ ವಸತಿ ವ್ಯವಸ್ಥೆ ಇರುವ ಕಡೆಯಿಂದ ಸೂಕ್ತ ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿದೆ. ಅಧಿವೇಶನ ನಡೆಯುವ ದಿನಗಳಲ್ಲಿ ಸುವರ್ಣಸೌಧದ ಆಡಿಟೋರಿಯಂನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.












Click it and Unblock the Notifications