ಸ್ಮಾರ್ಟ್ ಸಿಟಿ ಯೋಜನೆ; ಬೆಂಗಳೂರಿನ 20 ರಸ್ತೆ ಅಭಿವೃದ್ಧಿ
ಬೆಂಗಳೂರು, ನವೆಂಬರ್ 22 : ಬೆಂಗಳೂರು ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ 20 ಸಿಬಿಡಿ ರಸ್ತೆಗಳ ಅಭಿವೃದ್ಧಿಯನ್ನು ಕೈಗೊಳ್ಳಲಾಗಿದೆ. ಈ ಯೋಜನೆಗಳು ಕೆಲವೇ ತಿಂಗಳಿನಲ್ಲಿ ಪೂರ್ಣಗೊಳ್ಳಲಿವೆ.
ಸೆಂಟ್ರಲ್ ಬ್ಯುಸಿನೆಲ್ ಡಿಸ್ಟ್ರಿಕ್(ಸಿಬಿಡಿ) ರಸ್ತೆಗಳಲ್ಲಿ ವಿಧಾನಸೌಧ ಸುತ್ತ-ಮುತ್ತಲಿನ ರಸ್ತೆಗಳ ಕಾಮಗಾರಿ ಕೈಗೊಳ್ಳಲಾಗಿದೆ. ಡಿಸೆಂಬರ್‌ನಲ್ಲಿ ಅಧಿವೇಶನ ಆರಂಭಕ್ಕೂ ಮೊದಲು ಕಾಮಗಾರಿ ಪೂರ್ಣಗೊಳ್ಳಲಿದೆ.
ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ರಸ್ತೆ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ರಾಜಭವನ ರಸ್ತೆ ಕಾಮಗಾರಿ ಜನವರಿ 5ರೊಳಗೆ, ಕಮರ್ಷಿಯಲ್ ಸ್ಟ್ರೀಟ್ ರಸ್ತೆ ಕಾಮಗಾರಿ 10 ದಿನದಲ್ಲಿ ಪೂರ್ಣಗೊಳ್ಳಲಿದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

ಒಟ್ಟು 20 ರಸ್ತೆಗಳ ಅಭಿವೃದ್ಧಿಯನ್ನು ಕೈಗೊಳ್ಳಲಾಗಿದೆ. ರಸ್ತೆಯ ಗುಣಮಟ್ಟದ ವಿಚಾರದಲ್ಲಿ ಯಾವುದೇ ರಾಜಿ ಆಗಬಾರದು ಎಂದು ಸಚಿವರು ಸ್ಮಾರ್ಟ್ ಸಿಟಿ ಯೋಜನೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯನ್ನು ಎರಡು ಭಾಗವಾಗಿ ಮಾಡಿ ಕಾಮಗಾರಿ ಕೈಗೊಳ್ಳಲಾಗಿದೆ. ಮೊದಲ ಹಂತದಲ್ಲಿ 255.69 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ಎರಡನೇ ಹಂತದಲ್ಲಿ 200.81 ಕೋಟಿ ವೆಚ್ಚದಲ್ಲಿ ಯೋಜನೆ ಕೈಗೊಳ್ಳಲಾಗಿದೆ.
ನಗರದಲ್ಲಿನ ರಸ್ತೆ ಕಾಮಗಾರಿಗಳ ಸ್ಥಿತಿಗತಿಗಳ ಬಗ್ಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಸಚಿವರು ವರದಿಯನ್ನು ನೀಡಲಿದ್ದಾರೆ.












Click it and Unblock the Notifications