ಬೆಂಗಳೂರಿನ ಒಂದೇ ಶಾಲೆಯ 33 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು
ಬೆಂಗಳೂರು, ನವೆಂಬರ್ 26:ನಗರದ ಒಂದೇ ಖಾಸಗಿ ಶಾಲೆಯ 33 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ವರದಿಯಾಗಿದೆ.
ದೊಮ್ಮಸಂದ್ರದಲ್ಲಿನ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ 33 ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ಕೋವಿಡ್ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ.
'ದಿ ಇಂಟರ್‌ನ್ಯಾಷನಲ್ ಸ್ಕೂಲ್ ಬೆಂಗಳೂರು' ಶಿಕ್ಷಣ ಸಂಸ್ಥೆಯಲ್ಲಿ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಅಲ್ಲಿ ಈವರೆಗೆ ವಿದ್ಯಾರ್ಥಿಗಳು ಸೇರಿದಂತೆ 497 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.

8ನೇ ತರಗತಿಯ ಒಬ್ಬ ವಿದ್ಯಾರ್ಥಿ, 9ನೇ ತರಗತಿಯ 12 ವಿದ್ಯಾರ್ಥಿಗಳು, 10ನೇ ತರಗತಿಯ 8 ವಿದ್ಯಾರ್ಥಿಗಳು, 11ನೇ ತರಗತಿಯ 3 ವಿದ್ಯಾರ್ಥಿಗಳು ಹಾಗೂ 12 ತರಗತಿಯ 9 ವಿದ್ಯಾರ್ಥಿಗಳು ಕೋವಿಡ್ ಪೀಡಿತರಾಗಿದ್ದಾರೆ.
'ಶಿಕ್ಷಣ ಸಂಸ್ಥೆಯ ಎಲ್ಲ ಸಿಬ್ಬಂದಿ ಕೋವಿಡ್ ಲಸಿಕೆ ಪಡೆದಿದ್ದಾರೆ. ಸೋಂಕಿತರು ಲಕ್ಷಣ ರಹಿತರಾಗಿದ್ದಾರೆ. ಹೀಗಾಗಿ, ಆಸ್ಪತ್ರೆಗೆ ದಾಖಲಿಸಲಿಲ್ಲ. ಸಂಪರ್ಕಿತರಿಗೆ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದ್ದು, ಶಿಕ್ಷಣ ಸಂಸ್ಥೆಯನ್ನು ಸೀಲ್‌ಡೌನ್ ಮಾಡಲಾಗಿದೆ. ಸೋಂಕಿತ ವಿದ್ಯಾರ್ಥಿಗಳಿಗೆ ಆರೈಕೆ ಒದಗಿಸುತ್ತಿರುವ ಕೇಂದ್ರ ಹಾಗೂ ವಸತಿ ನಿಲಯವನ್ನು ಪ್ರತ್ಯೇಕಿಸಲಾಗಿದೆ' ಎಂದು ಬೆಂಗಳೂರು ನಗರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ. ಶ್ರೀನಿವಾಸ್ ತಿಳಿಸಿದ್ದಾರೆ.
32 ವಿದ್ಯಾರ್ಥಿಗಳಿಗೆ ಸಂಸ್ಥೆಯ ವೈದ್ಯಕೀಯ ಕೇಂದ್ರದಲ್ಲಿಯೇ ಆರೈಕೆ ಮಾಡಲಾಗುತ್ತಿದೆ. ಮಹದೇವಪುರ ವಲಯದಲ್ಲಿ ವಾಸವಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿದ್ದವು. ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಯಿತು. ಕೋವಿಡ್ ಪೀಡಿತರಾಗಿರುವುದು ದೃಢಪಡುತ್ತಿದ್ದಂತೆ ಎಲ್ಲ ನೇರ ಹಾಗೂ ಪರೋಕ್ಷ ಸಂಪರ್ಕಿತರನ್ನು ಪರೀಕ್ಷೆ ಮಾಡಲಾಗಿದೆ.
ಎಸ್‌ಡಿಎಂ ವೈದ್ಯಕೀಯ ಮಹಾವಿದ್ಯಾಲಯದ 66 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಎರಡು ಹಾಸ್ಟೆಲ್‌ಗಳನ್ನು ಸೀಲ್‌ಡೌನ್ ಮಾಡಲಾಗಿದೆ.
400 ವಿದ್ಯಾರ್ಥಿಗಳು ಹಾಗೂ 3 ಸಾವಿರ ಸಿಬ್ಬಂದಿಯ ಸ್ವ್ಯಾಬ್ ಸಂಗ್ರಹಿಸಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಕಾಲೇಜಿನ ಎರಡು ಹಾಸ್ಟೆಲ್‌ಗಳನ್ನು ಸೀಲ್‌ಡೌನ್ ಮಾಡಲಾಗಿದೆ. ಸೋಂಕಿತರು ಕೋವಿಡ್ ಲಸಿಕೆಯ ಎರಡು ಡೋಸ್ ಪಡೆದಿರುವುದರಿಂದ ತೀವ್ರತರ ರೋಗ ಲಕ್ಷಣಗಳು ಕಂಡು ಬಂದಿಲ್ಲ. ಔಷಧೋಪಚಾರ, ಚಿಕಿತ್ಸೆ ನಡೆಯುತ್ತಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ತಿಳಿಸಿದರು
ಸತ್ತೂರಿನ ಎಸ್‌ಡಿಎಂ ವೈದ್ಯಕೀಯ ಕಾಲೇಜು ಆವರಣಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ, ವಿದ್ಯಾರ್ಥಿನಿಲಯ ಸೀಲ್‌ಡೌನ್ ಪ್ರದೇಶ ಪರಿಶೀಲಿಸಿದರು. ನಂತರ ಸಂಸ್ಥೆಯ ಆಡಳಿತ ಮಂಡಳಿಯವರೊಂದಿಗೆ ಚರ್ಚಿಸಿ, ನ.17ರಂದು ಕಾಲೇಜಿನ ಆವರಣದ ಕಲಾಕ್ಷೇತ್ರದಲ್ಲಿ ನಡೆದ ವಿದ್ಯಾರ್ಥಿಗಳ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಹಲವರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ ಎಂಬುದನ್ನು ದೃಢಪಡಿಸಿಕೊಂಡರು.
ಸಂಸ್ಥೆಯಲ್ಲಿ ಪದವಿ ಓದುತ್ತಿರುವ 400 ವಿದ್ಯಾರ್ಥಿಗಳಲ್ಲಿ ಈಗಾಗಲೇ 300 ವಿದ್ಯಾರ್ಥಿಗಳ ಕೋವಿಡ್ ಪರೀಕ್ಷೆ ವರದಿ ಬಂದಿದ್ದು, 66 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ. ಉಳಿದ 100 ವಿದ್ಯಾರ್ಥಿಗಳ ಸ್ವ್ಯಾಬ್ ಸಂಗ್ರಹಿಸಿ ಪರೀಕ್ಷಿಸಲಾಗುತ್ತಿದೆ. ಸೋಂಕಿತರನ್ನು ಪ್ರತ್ಯೇಕವಾಗಿ ಇರಿಸಲಾಗಿದೆ.
ತಪಾಸಣೆಗೆ ಒಳಪಟ್ಟವರನ್ನು ಕೂಡ ಕ್ವಾರಂಟೈನ್ ಮಾಡಲಾಗಿದೆ. ಆವರಣದಲ್ಲಿರುವ ಎಲ್ಲಾ ವಿದ್ಯಾರ್ಥಿಗಳು ಹಾಗೂ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸುಮಾರು 3 ಸಾವಿರ ಸಿಬ್ಬಂದಿಯನ್ನೂ ತಪಾಸಣೆಗೆ ಒಳಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.
ಜಿಲ್ಲಾಡಳಿತ, ಆರೋಗ್ಯ ಮತ್ತು ಕುಂಟುಂಬ ಕಲ್ಯಾಣ ಇಲಾಖೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಪೊಲೀಸ್ ಹಾಗೂ ಎಸ್‌ಡಿಎಂ ಆಡಳಿತ ಮಂಡಳಿ ಈಗಾಗಲೇ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮವಹಿಸಿವೆ.
ರಾಜ್ಯದಲ್ಲಿ ಮಾರಕ ಕೋವಿಡ್ ಸಾಂಕ್ರಾಮಿಕ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 306 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಪತ್ತೆಯಾಗಿರುವ ಹೊಸ ಸೋಂಕು ಪ್ರಕರಣಗಳ ಮೂಲಕ ಮೂಲಕ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 29,94,561ಕ್ಕೆ ಏರಿಕೆಯಾಗಿದೆ. ಅಂತೆಯೇ ಇಂದು ಕೋರೋನಾದಿಂದಾಗಿ 2 ಸೋಂಕಿತರು ಸಾವನ್ನಪ್ಪಿದ್ದು, ಕೋವಿಡ್ ಗೆ ಬಲಿಯಾದವರ ಸಂಖ್ಯೆ 38,187 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 224 ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಸಂಖ್ಯೆ 29,49,853ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 6,492ಕ್ಕೆ ಕುಸಿದಿದೆ.
ರಾಜಧಾನಿ ಬೆಂಗಳೂರಿನಲ್ಲಿ 171 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಶೂನ್ಯ ಸಾವು ವರದಿಯಾಗಿದೆ. ಬೆಂಗಳೂರಿನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 12,55,611ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 16,326ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಇಂದು 147 ಮಂದಿ ಸೋಂಕಿತರು ಗುಣಮುಖರಾಗಿದ್ದು, ನಗರದಲ್ಲಿ ಒಟ್ಟಾರೆ ಗುಣಮುಖರ ಪ್ರಮಾಣ 12,34,143ಕ್ಕೆ ಏರಿಕೆಯಾಗಿದೆ.












Click it and Unblock the Notifications