ಎಲ್ಲಾ ಹೊಸ ತಾಲೂಕುಗಳಿಗೂ ಆಡಳಿತ ಕಟ್ಟಡಗಳ ನಿರ್ಮಾಣಕ್ಕೆ ಸರ್ಕಾರ ಬದ್ಧ: ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು ಫೆಬ್ರವರಿ 19: ರಾಜ್ಯದ ಎಲ್ಲಾ 49 ಹೊಸ ತಾಲೂಕುಗಳಿಗೂ ತಾಲೂಕು ಆಡಳಿತ ಕಟ್ಟಡಗಳ ನಿರ್ಮಾಣಕ್ಕೆ ಮುಂದಿನ ಎರಡು-ಮೂರು ವರ್ಷದಲ್ಲಿ ಅನುಮತಿ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ತಾಲೂಕು ಆಡಳಿತ ಕಟ್ಟಡಗಳ ದುರಸ್ತಿ ಬಗ್ಗೆ ಸೋಮವಾರ ವಿಧಾನ ಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಬೈಲಹೊಂಗಲದ ಶಾಸಕ ಕೌಜಲಗಿ ಮಹಾಂತೇಶ್ ಶಿವಾನಂದ್ ಪ್ರಶ್ನಿಸಿದ್ದರು.

ಶಾಸಕರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, "2018ರಲ್ಲಿ 63 ಹೊಸ ತಾಲೂಕುಗಳನ್ನು ಘೋಷಿಸಲಾಗಿತ್ತು. ಆದರೆ, ಹಿಂದಿನ ಸರ್ಕಾರ 14 ತಾಲೂಕುಗಳಿಗೆ ಮಾತ್ರ ಆಡಳಿತ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಿತ್ತು. ಉಳಿದ 49 ತಾಲೂಕುಗಳಿಗೆ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡಿರಲಿಲ್ಲ. ಮುಂದಿನ ಎರಡು-ಮೂರು ವರ್ಷದಲ್ಲಿ ಈ ಎಲ್ಲಾ ತಾಲೂಕುಗಳಿಗೂ ಹೊಸ ಆಡಳಿತ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡಲಾಗುವುದು" ಎಂದು ಭರವಸೆ ನೀಡಿದರು.
"ಹೊಸ ತಾಲೂಕುಗಳಲ್ಲದೆ, ಹೆಚ್ಚುವರಿಯಾಗಿ 80 ರಿಂದ 100 ತಾಲೂಕುಗಳ ಆಡಳಿತ ಕಚೇರಿಗಳ ದುರಸ್ತಿಯಾಗಬೇಕಿದ್ದು, ಹೊಸ ಆಡಳಿತ ಕಚೇರಿಗಳ ನಿರ್ಮಾಣಕ್ಕೆ ಬೇಡಿಕೆ ಇದೆ. ಅನುದಾನದ ಲಭ್ಯತೆಯನ್ನು ನೋಡಿಕೊಂಡು ಆದ್ಯತೆ ಮೇರೆಗೆ ಆಡಳಿತ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡಲಾಗುವುದು" ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ಮಾಹಿತಿ ನೀಡಿದರು.
ಸಾಗುವಳಿ ಭೂ ಮಂಜೂರಾತಿಗಾಗಿ ಬಗರ್ ಹುಕುಂ (ಅಕ್ರಮ ಸಕ್ರಮ) ಯೋಜನೆಯ ಅಡಿ ತಿರಸ್ಕೃತಗೊಂಡ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನದಲ್ಲಿ ಭರವಸೆ ನೀಡಿದರು.
ಸೋಮವಾರ ಪ್ರಶ್ನೋತ್ತರ ಅವಧಿಯ ವೇಳೆ ಬೈಂದೂರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ, ಬಗರ್ ಹುಕುಂ ಯೋಜನೆ ಅಡಿ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಅನರ್ಹಗೊಂಡ ಅರ್ಜಿಗಳ ಸಂಖ್ಯೆ ಎಷ್ಟು? ಮತ್ತು ಅನರ್ಹಗೊಳಿಸಲು ಕಾರಣವೇನು? ಎಂದು ಪ್ರಶ್ನಿಸಿದ್ದರು.
ಈ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, "ಬಗರ್ ಹುಕುಂ ಕಾನೂನನ್ನು ಜಾರಿಗೆ ತಂದಿರುವುದೇ ಬಡವರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ. ಅರ್ಹ ಫಲಾನುಭವಿಗಳಿಗೆ ಭೂ ಮಂಜೂರು ಮಾಡುವುದು ಸರ್ಕಾರದ ಕರ್ತವ್ಯವೂ ಹೌದು. ಹೀಗಾಗಿ ತಿರಸ್ಕೃತ ಅಥವಾ ಅನರ್ಹಗೊಂಡ ಬಗರ್ ಹುಕುಂ ಅರ್ಜಿಗಳಲ್ಲಿ ತಪ್ಪಾಗಿದ್ದರೆ, ನಿಯಮ ಮೀರಿ ಅನರ್ಹಗೊಂಡಿದ್ದರೆ ಮತ್ತೊಮ್ಮೆ ಪುನರ್ ಪರಿಶೀಲನೆಗೆ ಸೂಚಿಸಲಾಗುವುದು" ಎಂದು ಭರವಸೆ ನೀಡಿದರು.
ಬಗರ್ ಹುಕುಂ ಅರ್ಜಿಗಳನ್ನು ಅನರ್ಹಗೊಳಿಸಲು ಕಾರಣವೇನು? ಎಂಬ ಬಗ್ಗೆಯೂ ಮಾಹಿತಿ ನೀಡಿದ ಸಚಿವರು,"ಗೋಮಾಳ ಜಮೀನಿನ ಮಂಜೂರಾತಿಗೆ ಸಂಬಂಧಿಸಿದ ಅರ್ಜಿಗಳನ್ನು ಮಾತ್ರ ಅನರ್ಹಗೊಳಿಸಿಲ್ಲ. ಬದಲಾಗಿ ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಬರುವ ಭೂಮಿಗೂ ಅರ್ಜಿ ಸಲ್ಲಿಸಲಾಗಿದೆ. ಆದರೆ, ಕಾನೂನಿನ ಪ್ರಕಾರ ಸದರಿ ವ್ಯಾಪ್ತಿಯಲ್ಲಿರುವ ಭೂಮಿಯನ್ನು ಬಗರ್ ಹುಕುಂ ಅಡಿಯಲ್ಲಿ ಮಂಜೂರು ಮಾಡಲು ಸಾಧ್ಯವಿಲ್ಲ" ಎಂದು ತಿಳಿಸಿದರು.
ಮುಂದುವರೆದು, "ಗೋಮಾಳ ಜಮೀನಿನ ಮಂಜೂರಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಿಂದ ಕಟ್ಟುನಿಟ್ಟಿನ ಸೂಚನೆಗಳಿವೆ. ಗೋಮಾಳದಲ್ಲಿ ಹೆಚ್ಚುವರಿ ಜಮೀನಿನ ಲಭ್ಯತೆ ಇದ್ದಲ್ಲಿ ಮಾತ್ರ ಬಗರ್ ಹುಕುಂ ಅರ್ಜಿದಾರರಿಗೆ ಭೂ ಮಂಜೂರು ಮಾಡಬಹುದು. ಜಿಲ್ಲಾಧಿಕಾರಿಗಳ ಘೋಷಣೆಯ ನಂತರ ಮುಂದಿನ ಪ್ರಕ್ರಿಯೆಗಳು ಚಾಲನೆಗೊಳ್ಳುತ್ತವೆ. ಆದರೆ, ಹೆಚ್ಚುವರಿ ಭೂಮಿ ಇಲ್ಲದಿದ್ದರೆ ಗೋಮಾಳ ಜಮೀನಿನ ಮಂಜೂರಾತಿ ಸಾಧ್ಯವಿಲ್ಲ. ಒಂದು ವೇಳೆ ಮಂಜೂರುಗೊಳಿಸಿದರೆ, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಎದುರು ನಾವು ತಪ್ಪಿತಸ್ಥರಾಗಿ ನಿಲ್ಲಬೇಕಾದ ಪರಿಸ್ಥಿತಿ ಎದುರಾಗುತ್ತದೆ" ಎಂದು ಮಾಹಿತಿ ನೀಡಿದರು.












Click it and Unblock the Notifications