ಶಿಕ್ಷಣ ಪಡೆದು ಆರು ತಿಂಗಳಲ್ಲಿ ಉದ್ಯೋಗ ಸಿಗದ ಯುವಜನರಿಗೆ ನಿರುದ್ಯೋಗ ಭತ್ಯೆ- ಸಿಎಂ
ಬೆಂಗಳೂರು ಆಗಸ್ಟ್ 15: ಶಿಕ್ಷಣ ಪಡೆದ ಆರು ತಿಂಗಳಲ್ಲಿ ಉದ್ಯೋಗ ಸಿಗದ ಯುವಜನರಿಗೆ ನಿರುದ್ಯೋಗ ಭತ್ಯೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣದ ಬಳಿಕ ಅವರು ಭಾಷಣ ಮಾಡಿದರು.
'ಪದವಿ, ಡಿಪ್ಲೊಮಾ ಪಡೆದ ಯುವಕರಿಗೆ ಕೂಡಲೇ ಉದ್ಯೋಗ ದೊರೆಯದಿದ್ದರೆ, ನಿರಾಶರಾಗದಂತೆ, ಅವರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ, ಬೆಂಬಲ ನೀಡುವ ಯೋಜನೆ ಯುವನಿಧಿ. ಶಿಕ್ಷಣ ಪಡೆದು ಆರು ತಿಂಗಳಾದರೂ ಉದ್ಯೋಗ ದೊರೆಯದ ಯುವಜನರಿಗೆ ಉದ್ಯೋಗ ದೊರೆಯುವವರೆಗೆ ಅಥವಾ ಗರಿಷ್ಠ ಎರಡು ವರ್ಷದವರೆಗೆ, ಪದವೀಧರರಿಗೆ 3000 ರೂ. ಹಾಗೂ ಡಿಪ್ಲೊಮಾ ಪಡೆದವರಿಗೆ 1500 ರೂ. ನಿರುದ್ಯೋಗ ಭತ್ಯೆ ನೀಡಲಾಗುವುದು. 2022-23ರ ಶೈಕ್ಷಣಿಕ ವರ್ಷ ಅಂತ್ಯಗೊಂಡ 6 ತಿಂಗಳ ನಂತರ ಈ ಯೋಜನೆ ಜಾರಿಯಾಗಲಿದೆ' ಎಂದು ಹೇಳಿದರು.

ನಮ್ಮ ಸರ್ಕಾರದ ಈ ಗ್ಯಾರಂಟಿ ಯೋಜನೆಗಳಿಂದ ಬಡ, ಮಧ್ಯಮ ವರ್ಗದ ಕುಟುಂಬಗಳ ಬದುಕಿನಲ್ಲಿ ಸಾಕಷ್ಟು ಬದಲಾವಣೆ ಬರಲಿದೆ. ಜಾತಿ, ಮತ, ವರ್ಗ, ವರ್ಣ ಭೇದವಿಲ್ಲದೆ ಈ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದರು.
ನಮ್ಮ ಗ್ಯಾರಂಟಿ ಯೋಜನೆಗಳ ಕುರಿತೂ ಸಹ ಕೆಲವರು ನಕಾರಾತ್ಮಕ ಭಾವನೆಯನ್ನು ಸಮಾಜದಲ್ಲಿ ಉತ್ಪಾದಿಸಲು ಪ್ರಯತ್ನಿಸುತ್ತಿದ್ದಾರೆ. ಸರ್ಕಾರವು ರಾಜ್ಯದ ಭೌತಿಕ ಅಭಿವೃದ್ಧಿ ಮತ್ತು ಸಾಮಾಜಿಕ ಅಭಿವೃದ್ಧಿ ಎಂಬ ಎರಡೂ ಮಾದರಿಗಳನ್ನು ಒಂದೇ ರೀತಿಯಲ್ಲಿ ಪರಿಭಾವಿಸಿದೆ. ನಾವು ಸೃಷ್ಟಿಸಲು ಹೊರಟಿರುವ ಅಭಿವೃದ್ಧಿಯಲ್ಲಿ ರಾಜ್ಯದ ಸರಾಸರಿ 1.30 ಕೋಟಿ ಕುಟುಂಬಗಳಿಗೆ ಸೇರಿದ ಜನರು ಪಾಲ್ಗೊಳ್ಳುತ್ತಿದ್ದಾರೆ ಎಂದು ಸಿಎಂ ಹೇಳಿದರು.
ಈ ಕೋಟಿ, ಕೋಟಿ ಜನರಿಗೆ ಯಾವುದೇ ಮಧ್ಯವರ್ತಿಗಳ ಕಾಟವಿಲ್ಲದೆ ಸವಲತ್ತುಗಳು ನೇರವಾಗಿ ತಲುಪಲಿವೆ. ಮತ್ತು ಸಮಗ್ರ ಮಹಿಳಾ ಸಶಕ್ತೀಕರಣ ಸಾಧ್ಯವಾಗಲಿದೆ. ಇದರಿಂದ ಕರ್ನಾಟಕ ಮಾದರಿ ಅಭಿವೃದ್ಧಿ ವ್ಯಾಖ್ಯಾನವು ಪ್ರಾರಂಭವಾಗಲಿದೆ. ನಮ್ಮ ಸರ್ಕಾರವು ಹಿಂದಿನ ಸರ್ಕಾರಗಳಿಗಿಂತಲೂ ಹೆಚ್ಚಿನ ಸಂಪನ್ಮೂಲಗಳನ್ನು ಮೂಲಭೂತ ಸೌಕರ್ಯಗಳಿಗೆ ವಿನಿಯೋಗಿಸಲು ಬದ್ಧವಾಗಿದೆ. ಸರ್ಕಾರದ ಆದಾಯಗಳ ಸಂಗ್ರಹವು ಸಹ ಶಕ್ತಿಯುತವಾಗಿದೆ ಎಂದು ಅವರು ಹೇಳಿದರು.
ಡಾ.ಬಿ.ಆರ್. ಅಂಬೇಡ್ಕರ್ ಅವರು "ರಾಜಕೀಯ ಪ್ರಜಾಪ್ರಭುತ್ವವು ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಂತಿದೆ. ಸಾಮಾಜಿಕ ಪ್ರಜಾಪ್ರಭುತ್ವ ಎಂದರೆ ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವಗಳನ್ನು ಬದುಕಿನ ತತ್ವಗಳೆಂದು ಗುರುತಿಸುವ ಜೀವನ ವಿಧಾನವಾಗಿದೆ" ಎಂದು ಹೇಳಿದ್ದಾರೆ. ರಾಜಕೀಯ ಪ್ರಜಾಪ್ರಭುತ್ವ ಗಟ್ಟಿಯಾಗಿರಬೇಕಾದರೆ ಅದರ ತಳಹದಿಯಾದ ಸಾಮಾಜಿಕ ಪ್ರಜಾಪ್ರಭುತ್ವವು ಸುಭದ್ರವಾಗಿರಬೇಕು ಎಂಬ ಅಂಬೇಡ್ಕರ್ ಅವರ ಆಶಯದಂತೆ ನಮ್ಮ ಸರ್ಕಾರ ಸಮ ಸಮಾಜ ನಿರ್ಮಾಣಕ್ಕೆ ಒತ್ತು ನೀಡಿದೆ ಎಂದರು.
ಮುಂಗಾರು ವಿಳಂಬವಾಗಿ ಪ್ರಾರಂಭವಾದ್ದರಿಂದ ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ಬರದ ಛಾಯೆ ಇತ್ತು. ಜುಲೈ ತಿಂಗಳಲ್ಲಿ ಭಾರಿ ಮಳೆಯಾಗಿದ್ದರಿಂದ ಹಲವೆಡೆ ಪ್ರವಾಹ ಪರಿಸ್ಥಿತಿಯೂ ತಲೆದೋರಿತು. ಅತಿವೃಷ್ಟಿ, ಅನಾವೃಷ್ಟಿಗಳೆರಡನ್ನೂ ಸಮರ್ಥವಾಗಿ ಎದುರಿಸಲು ನಮ್ಮ ಸರ್ಕಾರ ಸಿದ್ಧವಾಗಿದೆ ಹಾಗೂ ಇದರಿಂದಾಗುವ ಹಾನಿಯನ್ನು ತಗ್ಗಿಸಲು ಎಲ್ಲ ರೀತಿಯ ಪ್ರಯತ್ನಗಳನ್ನೂ ಮಾಡುತ್ತಿದೆ ಎಂದರು.
ಗ್ಯಾರಂಟಿ ಯೋಜನೆಗಳ ಜೊತೆಗೆ ಕಳೆದ ಕೆಲವು ವರ್ಷಗಳಲ್ಲಿ ಸ್ಥಗಿತಗೊಂಡಿದ್ದ, ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿದ್ದ ಕೃಷಿ ಭಾಗ್ಯ, ಅನುಗ್ರಹ ಯೋಜನೆ, ವಿದ್ಯಾಸಿರಿ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸ್ಥಗಿತಗೊಂಡಿರುವ ವಿದ್ಯಾರ್ಥಿವೇತನ ಯೋಜನೆ ಸೇರಿದಂತೆ ಹಲವು ಯೋಜನೆಗಳ ಮರುಜಾರಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಅವಕಾಶ ವಂಚಿತ ಸಮುದಾಯಗಳ ಹಿತರಕ್ಷಣೆ ಹಾಗೂ ಅವರ ಅಭ್ಯುದಯ ನಮ್ಮ ಕಾಳಜಿಯಾಗಿದೆ. ಹಿಂದುಳಿದ ವರ್ಗದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ಅಲ್ಪಸಂಖ್ಯಾತರು, ಮಹಿಳೆಯರು, ಕಾರ್ಮಿಕರು, ರೈತರು ಹಾಗೂ ಇತರ ಶೋಷಿತ ವರ್ಗದವರ ಶ್ರೇಯೋಭಿವೃದ್ಧಿಗೆ ನಮ್ಮ ಸರ್ಕಾರ ಆದ್ಯತೆ ನೀಡುತ್ತದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರವು ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಪರಿಶಿಷ್ಟ ಜಾತಿ, ಪಂಗಡದವರಿಗೆ ಹಂಚಿಕೆಯಾದ ಭೂಮಿಯ ಅಕ್ರಮ ಪರಭಾರೆ ವಿರುದ್ಧ ದೂರು ನೀಡಲು ಯಾವುದೇ ಕಾಲಮಿತಿ ಇಲ್ಲ ಎಂಬುದನ್ನು ನಿಚ್ಚಳಗೊಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ವಿಶೇಷ ಯೋಜನೆ ಕಾಯ್ದೆ 2013ರ ಸೆಕ್ಷನ್ 7(ಡಿ) ಯನ್ನು ರದ್ದುಪಡಿಸುವ ಮೂಲಕ ಡೀಮ್ಡ್ ವೆಚ್ಚದ ಹೆಸರಲ್ಲಿ ಈ ಸಮುದಾಯಗಳಿಗೆ ಮೀಸಲಿರುವ ಅನುದಾನ ಇತರೆ ಕಾರ್ಯಗಳಿಗೆ ದುರ್ಬಳಕೆಯಾಗುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲಾಗುತ್ತಿದೆ. ಆಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ಯೋಜನೆಗಳಡಿ ವಸತಿ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಲಾಗುತ್ತಿದೆ. 'ಸ್ವಾವಲಂಬಿ ಸಾರಥಿʼ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತ ಸಮುದಾಯದ ನಿರುದ್ಯೋಗಿ ಯುವಜನರಿಗೆ ವಿದ್ಯುತ್ ಚಾಲಿತ ವಾಹನಗಳ ಖರೀದಿಗೆ ಸಾಲ-ಸಹಾಯಧನ ಸೌಲಭ್ಯ ನೀಡಲಾಗುವುದು ಎಂದು ಸಿಎಂ ಹೇಳಿದರು.
ದಮನಿತ ವರ್ಗಗಳಿಗೆ ಚೈತನ್ಯ ತುಂಬುವ ಉದ್ದೇಶದಿಂದ ಪರಿಶಿಷ್ಟ ಜಾತಿ/ ಪಂಗಡಗಳ ಜನರಿಗೆ ನೀಡುತ್ತಿದ್ದ ಗುತ್ತಿಗೆ ಮೊತ್ತದ ಮಿತಿಯನ್ನು 50 ಲಕ್ಷ ರೂ.ಗಳಿಂದ 1 ಕೋಟಿ ರೂ.ಗಳಿಗೆ ಏರಿಸಲಾಗಿದೆ. ಹಿಂದುಳಿದ ವರ್ಗಗಳ ಪ್ರವರ್ಗ-1 ಮತ್ತು ಪ್ರವರ್ಗ-2ಎ ನಲ್ಲಿ ಬರುವ ಸಮುದಾಯದ ಗುತ್ತಿಗೆದಾರರಿಗೆ ಒಂದು ಕೋಟಿ ರೂ.ವರೆಗಿನ ಸಿವಿಲ್ ಕಾಮಗಾರಿಗಳಲ್ಲಿ ಮೀಸಲಾತಿ ಸೌಲಭ್ಯ ಒದಗಿಸಲಾಗುವುದು. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ನಮ್ಮ ಸರ್ಕಾರ ಆದ್ಯತೆ ನೀಡಿದೆ. ಶಾಲಾ ಕೊಠಡಿಗಳ ನಿರ್ಮಾಣ, ದುರಸ್ತಿಗೆ 650 ಕೋಟಿ ರೂ. ಹಾಗೂ ಶಾಲೆ, ಕಾಲೇಜುಗಳಲ್ಲಿ ಶೌಚಾಲಯ ನಿರ್ಮಾಣವನ್ನು ಕೈಗೊಳ್ಳಲು 200 ಕೋಟಿ ರೂ. ಒದಗಿಸಲಾಗಿದೆ. ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ವಾರಕ್ಕೆ ಎರಡು ದಿನ ಮೊಟ್ಟೆ ಕೊಡಲು ತೀರ್ಮಾನಿಸಿದ್ದೇವೆ ಎಂದು ಅವರು ಹೇಳಿದರು.
ನಮ್ಮ 5 ವರ್ಷಗಳ ಅವಧಿಯಲ್ಲಿ ಅಗತ್ಯ ಇರುವವರಿಗೆ ಸೂರು ನೀಡಲು ಯೋಜಿಸಿದ್ದೇವೆ. ಸರ್ಕಾರಿ ಬಸ್ಸುಗಳ ಟ್ರ್ಯಾಕಿಂಗ್ ವ್ಯವಸ್ಥೆ, ಪ್ಯಾನಿಕ್ ಬಟನ್ ವ್ಯವಸ್ಥೆಯನ್ನು ಪ್ರಾರಂಭಿಸುತ್ತಿದ್ದೇವೆ. ಅಗತ್ಯ ಇರುವೆಡೆ ಹೊಸ ಬಸ್ಸುಗಳನ್ನು ಒದಗಿಸಲು ಸಿದ್ಧರಿದ್ದೇವೆ. ಗಣಿಬಾಧಿತ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಯೋಜನೆಯನ್ನು ರೂಪಿಸಿದ್ದೇವೆ. ಹೈನುಗಾರಿಕೆಯನ್ನು ಉತ್ತೇಜಿಸಿ ಗ್ರಾಮೀಣ ಆರ್ಥಿಕತೆಗೆ ಚೈತನ್ಯ ನೀಡುವ ಉದ್ದೇಶದಿಂದ ಪ್ರತಿ ಲೀಟರ್ ಹಾಲಿಗೆ 3 ರೂಪಾಯಿಗಳಷ್ಟು ಮೊತ್ತವನ್ನು ಹೆಚ್ಚುವರಿಯಾಗಿ ರೈತರಿಗೆ ನೀಡಲಾಗುತ್ತಿದೆ. ಇದರ ಜೊತೆಗೆ ಕೃಷಿ ಕ್ಷೇತ್ರದ ಬಲವರ್ಧನೆಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿರುವ ಡಯಾಲಿಸಿಸ್ ಕೇಂದ್ರಗಳನ್ನು ಬಲ ಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಜೊತೆಗೆ ಎಂಆರ್‍ಐ/ಸಿಟಿ ಸ್ಕ್ಯಾನ್ ಸೌಲಭ್ಯಗಳನ್ನು ಜಿಲ್ಲಾ ಆಸ್ಪತ್ರೆಗಳಿಗೆ ವಿಸ್ತರಿಸುವ ಮೂಲಕ ಬಡ ರೋಗಿಗಳಿಗೆ ಉಚಿತ ಮತ್ತು ಉತ್ತಮ ಪರೀಕ್ಷೆ ಹಾಗೂ ಚಿಕಿತ್ಸಾ ಸೌಲಭ್ಯ ಕಲ್ಪಿಸಲು ನಿರ್ಧರಿಸಲಾಗಿದೆ. ಜೊತೆಗೆ ರಾಜ್ಯದ ಆರೋಗ್ಯ ವ್ಯವಸ್ಥೆಯನ್ನು ಸುಗಮಗೊಳಿಸಿ ಜನರ ಕೈಗೆಟುಕುವಂತೆ ಕ್ರಿಯಾಯೋಜನೆಗಳನ್ನು ರೂಪಿಸುತ್ತಿದ್ದೇವೆ ಎಂದು ಅವರು ಹೇಳಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications