ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎ ಕೃಷ್ಣಪ್ಪ ಅಧಿಕಾರ ಸ್ವೀಕಾರ
ಬೆಂಗಳೂರು, ಸೆ.13- ಮೊನ್ನೆಯಷ್ಟೇ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಆಯ್ಕೆಗೊಂಡ ಮಾಜಿ ಸಚಿವ ಎ. ಕೃಷ್ಣಪ್ಪ ಅವರು ಇಂದು ಪಕ್ಷದ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪದಗ್ರಹಣ ಮಾಡಿದರು. ಈ ಸಂದರ್ಭದಲ್ಲಿ, ಹೋಮ ಹವನಗಳನ್ನು ನೆರವೇರಿಸಲಾಯಿತು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶತಾಯಗತಾಯ ಹೆಚ್ಚುಹೆಚ್ಚು ಸ್ಥಾನ ಗಳಿಸಬೇಕೆಂದು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನವನ್ನು ಮೊದಲ ಬಾರಿಗೆ ಕುಟುಂಬದ ಹೊರಗಿನ ವ್ಯಕ್ತಿಗೆ ಬಿಟ್ಟುಕೊಟ್ಟಿರುವ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಕೃಷ್ಣಪ್ಪ ಅವರಿಗೆ ಪಕ್ಷದ ಬಾವುಟ ಹಸ್ತಾಂತರಿಸಿದರು.

ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರಲು ನನ್ನ ಎಲ್ಲ ಶಕ್ತಿಯನ್ನೂ ಧಾರೆ ಎರೆಯುವುದಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಕೃಷ್ಣಪ್ಪ ಅವರು ವಾಗ್ದಾನ ಮಾಡಿದರು.
'ಜೆಡಿಎಸ್ ಪಕ್ಷ ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಿದ್ದು, ಎಲ್ಲ ವರ್ಗದ ಬೆಂಬಲ ಗಳಿಸಿಕೊಂಡು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ತರಲು ಪ್ರಯತ್ನ ಮಾಡುತ್ತೇನೆ. ಪಕ್ಷವನ್ನು ಅಧಿಕಾರಕ್ಕೆ ತರುವವರೆಗೆ ವಿರಾಮ ಪಡೆಯುವುದಿಲ್ಲ. ದೇವೇಗೌಡರ ಮಾರ್ಗದರ್ಶನ ಪಡೆದುಕೊಂಡು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕನಿಷ್ಟ 15-20 ಸ್ಥಾನ ಗೆಲ್ಲಲು ಬೇಕಾದ ಎಲ್ಲ ತಯಾರಿಯನ್ನೂ ಈಗಲೇ ಆರಂಭಿಸುತ್ತೇನೆ' ಎಂದು ತಿಳಿಸಿದರು.
ಮುಖಂಡರಾದ ಬಸವರಾಜ ಪಾಟೀಲ್ ಯತ್ನಾಳ್, ಇಕ್ಬಾಲ್ ಅನ್ಸಾರಿ, ಬಂಡೆಪ್ಪ ಕಾಶಂಪೂರ್, ಅಖಂಡ ಶ್ರೀನಿವಾಸಮೂರ್ತಿ, ಮಾನಪ್ಪ ವಜ್ಜಲ್, ಸಯ್ಯದ್ ಮುದೀರ್ ಆಗಾ ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
ಎ ಕೃಷ್ಣಪ್ಪ ಕಿರು ಪರಿಚಯ: ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿದ್ದರು. ಯಾದವ ಸಮುದಾಯದ ಪ್ರಭಾವಿ ನಾಯಕರು. ಕೆಆರ್ ಪುರಂನಲ್ಲಿ ಕಾಂಗ್ರೆಸ್ ಟಿಕೆಟ್ ಸಿಕ್ಕಿರಲಿಲ್ಲ. ಹಾಗಾಗಿ, ಜೆಡಿಎಸ್ ಟಿಕೆಟ್ ಪಡೆದು ಹಿರಿಯೂರು ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. 1985ರಲ್ಲಿ ವರ್ತೂರು ವಿಧಾನಸಭೆಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು.












Click it and Unblock the Notifications