ರಾಜಕೀಯ ನಿವೃತ್ತಿಗೆ ಮುನ್ನ ಭ್ರಷ್ಟಾಚಾರಿಗಳಿಗೆ ಶಿಕ್ಷೆ ಕೊಡಿಸಿ: ಸಿಎಂ ಸಿದ್ದರಾಮಯ್ಯಗೆ ಆಮ್ ಆದ್ಮಿ ಪಕ್ಷ ಒತ್ತಾಯ
ಬೆಂಗಳೂರು: ಪ್ರಾಸಿಕ್ಯೂಷನ್ ಅನುಮತಿ ನೀಡುವಲ್ಲಿ ಲೋಪದಿಂದಾಗಿ ಮಾಡಾಳ್ ವಿರೂಪಾಕ್ಷಪ್ಪ ಮತ್ತು ದೇವೇಂದ್ರಪ್ಪ ಸೇರಿದಂತೆ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದ ಭ್ರಷ್ಟಾಚಾರ ಪ್ರಕರಣಗಳು ನ್ಯಾಯಾಲಯಗಳಲ್ಲಿ ವಜಾ ಆಗುತ್ತಿರುವುದಕ್ಕೆ ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಬೇಸರ ವ್ಯಕ್ತಪಡಿಸಿದರು.
ಪ್ರಾಸಿಕ್ಯೂಷನ್ ಅನುಮತಿ ನೀಡುವಲ್ಲಿ ಆದ ಲೋಪದಿಂದಾಗಿ ಭ್ರಷ್ಟಾಚಾರಿಗಳ ವಿರುದ್ಧದ ಪ್ರಕರಣಗಳು ನ್ಯಾಯಾಲಯದಲ್ಲಿ ವಜಾ ಆಗುತ್ತಿದ್ದು, ಲೋಕಾಯುಕ್ತ ಹಾಗೂ ರಾಜ್ಯ ಸರ್ಕಾರ ಭ್ರಷ್ಟರಿಗೆ ಕಠಿಣ ಶಿಕ್ಷೆ ಕೊಡಿಸುವಲ್ಲಿ ವಿಫಲವಾಗುತ್ತಿರುವುದನ್ನು ಖಂಡಿಸಿ ಆಮ್ ಆದ್ಮಿ ಪಕ್ಷವು ಬುಧವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿತು.

ಪ್ರತಿಭಟನೆ ವೇಳೆ ಮಾತನಾಡಿದ ಮೋಹನ್ ದಾಸರಿ ಅವರು, ನೂರಾರು ಕೋಟಿ ಲೂಟಿ ಮಾಡಿರುವ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧದ ಪ್ರಕರಣವನ್ನು ಪ್ರಾಸಿಕ್ಯೂಷನ್ ಅನುಮತಿ ಪಡೆದಿಲ್ಲ ಎಂದು ರದ್ದು ಮಾಡಲಾಗಿದೆ. ದೇವೇಂದ್ರಪ್ಪ ಅವರು ₹ 20 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು. ಆದರೂ, ಅವರೀಗ ಹೊರಗಿದ್ದಾರೆ ಎಂದರು.
ಲೋಕಾಯುಕ್ತ ಹಲ್ಲು ಕಿತ್ತ ಹಾವು!
ಮುಖ್ಯಮಂತ್ರಿಯಾಗಿದ್ದ ಬಿಎಸ್ ಯಡಿಯೂರಪ್ಪ ಅವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರುವಂತೆ ಮಾಡಿದ್ದು ಸಂತೋಷ್ ಹೆಗಡೆ ಅವರಿದ್ದ ಲೋಕಾಯುಕ್ತ ಸಂಸ್ಥೆ. ಆಗ ಲೋಕಾಯುಕ್ತ ಎಂದರೆ ಎಲ್ಲರಿಗೂ ಭಯವಿತ್ತು. ಆದರೆ, ಸಿದ್ದರಾಮಯ್ಯ ಅವರು ಎಸಿಬಿ ರಚಿಸಿ, ಲೋಕಾಯುಕ್ತ ಸಂಸ್ಥೆಯನ್ನು ಹಲ್ಲು ಕಿತ್ತ ಹಾವಿನಂತೆ ಮಾಡಿದರು. ಎಸಿಬಿ ರದ್ದು ಬಳಿಕವೂ ಲೋಕಾಯುಕ್ತಕ್ಕೆ ಸಂಪೂರ್ಣ ಅಧಿಕಾರ ನೀಡಿಲ್ಲ ಎಂದರು.
ಕಳೆದ ಅವಧಿಯ ಬಿಜೆಪಿ ಸರ್ಕಾರ ಕೋವಿಡ್ ಅವಧಿಯಲ್ಲಿ ಹಲವು ಹಗರಣಗಳನ್ನು ಮಾಡಿತು. 45 ರೂ. ಬೆಲೆ ಬಾಳುವ ಮಾಸ್ಕ್‌ಗೆ 450 ರೂ. ಬಿಲ್ ಮಾಡಲಾಗಿತ್ತು ಎಂದು ಅವರ ನಾಯಕರೇ ಹೇಳಿದ್ದಾರೆ. ಹಗರಣಳಾಗಿವೆ ಎಂದು ಬಿಜೆಪಿ ನಾಯಕರೇ ಹೇಳಿದ್ದರೂ, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ತಲೆಕೆಡಿಸಿಕೊಳ್ಳುತ್ತಿಲ್ಲ. ಭ್ರಷ್ಟಾಚಾರ ವಿಚಾರದಲ್ಲಿ ಎರಡೂ ಪಕ್ಷಗಳು ಒಂದೇ ಎಂದರು.
ಅಡಕೆ ಮಾರಿ ಆರೂವರೆ ಕೋಟಿ ರೂ. ಹಣವನ್ನು ಮನೆಯಲ್ಲಿಟ್ಟುಕೊಂಡಿದ್ದ ಮಾಡಾಳ್ ವಿರೂಪಾಕ್ಷಪ್ಪ ಅವರು ಯಾವ ಸೀಮೆಯ ರೈತ. ಸಿದ್ದರಾಮಯ್ಯ ಅವರಿಗೆ ರಾಜ್ಯದ ಜನರ ಬಗ್ಗೆ ಯಾವುದೇ ಕಾಳಜಿ ಕಾಣಿಸುತ್ತಿಲ್ಲ. ಈಗಲಾದರೂ ಬಿಜೆಪಿ ನಾಯಕರ ಭ್ರಷ್ಟಾಚಾರದ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದರು.
ಲೋಕಾಯುಕ್ತ ನ್ಯಾಯಾಲಯದಲ್ಲಿ ಹಲವಾರು ಪ್ರಕರಣಗಳು ಬಾಕಿ ಇವೆ. ರಾಜ್ಯದ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ, ಸಿದ್ದರಾಮಯ್ಯ ಅವರು ಲೋಕಾಯುಕ್ತದಲ್ಲಿ ಉಳಿದಿರುವ ಎಲ್ಲಾ ಪ್ರಕರಣಗಳಲ್ಲಿ ಆರೋಪಪಟ್ಟಿ ಸಲ್ಲಿಸಲು ಒಪ್ಪಿಗೆ ನೀಡಲಿ ಎಂದರು.
ನಕಲಿ ಗ್ಯಾರಂಟಿಗಳ ಮೂಲಕ ರಾಜ್ಯವನ್ನು ಉದ್ಧಾರ ಮಾಡಲು ಸಾಧ್ಯವಿಲ್ಲ. ಈಗಲೂ ಕಾಲ ಮಿಂಚಿಲ್ಲ. ಇಡೀ ರಾಜ್ಯದ ಮುಂದೆ ಬೆತ್ತಲಾಗಿದ್ದ ಭ್ರಷ್ಟಾಚಾರ ಪ್ರಕರಣಗಳನ್ನು ಮರುತನಿಖೆಗೆ ಒಳಪಡಿಸಿ. ಭ್ರಷ್ಟಾಚಾರದ ವಿರುದ್ಧ ಒಂದಾದರೂ ಒಳ್ಳೆ ಕೆಲಸ ಮಾಡಿ ರಾಜಕೀಯ ನಿವೃತ್ತಿ ಪಡೆಯಿರಿ. ಮಾಡಾಳ್ ವಿರೂಪಾಕ್ಷಪ್ಪ ಮತ್ತು ದೇವೇಂದ್ರಪ್ಪ ಪ್ರಕರಣಗಳನ್ನು ಮರುತನಿಖೆಗೆ ಒಪ್ಪಿಸಿ, ಅವರನ್ನು ಜೈಲಿನಲ್ಲಿ ಕೊಳೆಯುವಂತೆ ಮಾಡಿ ಎಂದು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.












Click it and Unblock the Notifications