Ranya Rao: ನಟಿ ರನ್ಯಾ ರಾವ್‌ಗೆ ಶಾಕ್ ಕೊಟ್ಟ ನ್ಯಾಯಾಲಯ
ಚಿನ್ನ ಕಳ್ಳ ಸಾಗಾಣೆ ಪ್ರಕರಣದಲ್ಲಿ ಬಂಧಿತವಾಗಿರುವ ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್‌ಗೆ ದಿನದಿಂದ ದಿನಕ್ಕೆ ಸಂಕಷ್ಟ ಹೆಚ್ಚಾಗುತ್ತಲೇ ಇದೆ. ಜಾಮೀನು ನೀಡುವಂತೆ ನಟಿ ರನ್ಯಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಶುಕ್ರವಾರ ಆರ್ಥಿಕ ಅಪರಾಧ ನ್ಯಾಯಾಲಯ ತಿರಸ್ಕರಿಸಿದೆ ಎಂದು ಎಎನ್‌ಐ ವರದಿ ಮಾಡಿದೆ.
ಇದೇ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ತರುಣ್ ಕೊಂಡೂರು ಕೂಡ ಆರ್ಥಿಕ ಅಪರಾಧ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಶನಿವಾರ ಮಧ್ಯಾಹ್ನ 3 ಗಂಟೆಗೆ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಲಾಗುತ್ತದೆ.

34 ವರ್ಷದ ನಟಿ ರನ್ಯಾ ರಾವ್ ಮಾರ್ಚ್ 3ರಂದು ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ, ಅವರನ್ನು ಬಂಧಿಸಲಾಗಿತ್ತು. ಬಂಧನದ ವೇಳೆ ರನ್ಯಾ ರಾವ್ ಬಳಿಕ 12.56 ಕೋಟಿ ರೂಪಾಯಿ ಮೌಲ್ಯದ 14 ಕೆಜಿ ಚಿನ್ನದ ಗಟ್ಟಿಗಳು ಪತ್ತೆಯಾಗಿದ್ದವು. ಡಿಆರ್‌ಐ ಅಧಿಕಾರಿಗಳು ರನ್ಯಾ ರಾವ್ ಚಿನ್ನದ ಕಳ್ಳಸಾಗಣೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಬುಧವಾರ ನ್ಯಾಯಾಲಯದಲ್ಲಿ ವಿಚಾರಣೆಯ ಸಂದರ್ಭದಲ್ಲಿ, ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅವರ ಜಾಮೀನು ಅರ್ಜಿಯನ್ನು ವಿರೋಧಿಸಿದ್ದು, ರನ್ಯಾ ರಾವ್ ಮಹತ್ವದ ಚಿನ್ನದ ಕಳ್ಳಸಾಗಣೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದೆ.
ಜಾಮೀನು ನೀಡಿದರೆ ತನಿಖೆಗೆ ಅಡ್ಡಿ!
ರನ್ಯಾ ರಾವ್‌ಗೆ ಈಗ ಜಾಮೀನು ನೀಡಿದರೆ ಡಿಆರ್ ಐ ಅಧಿಕಾರಿಗಳು ನಡೆಸುತ್ತಿರುವ ತನಿಖೆಗೆ ಹಿನ್ನಡೆಯಾಗಬಹುದು ಎಂದು ವಾದಿಸಲಾಗಿದೆ. ರನ್ಯಾರಾವ್ ಸಾಕ್ಷಿಗಳನ್ನು ಹಾಳು ಮಾಡುವ ಅಥವಾ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟಿದೆ.
ಬಂಧನದ ವೇಳೆ ಡಿಆರ್ ಐ ಅಧಿಕಾರಿಗಳು ತನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ರನ್ಯಾ ರಾವ್ ಆರೋಪಿಸಿದ್ದಾರೆ. ಕೆಲವು ಪ್ರಶ್ನೆಗಳಿಗೆ ಉತ್ತರ ಕೊಡದೇ ಇದ್ದಾಗ ಅಧಿಕಾರಿಗಳು ದೌರ್ಜನ್ಯ ಎಸಗಿದ್ದಾರೆ, ಮಾನಸಿಕವಾಗಿ ಹಿಂಸೆ ಕೊಟ್ಟಿದ್ದಾರೆ ಎಂದು ನ್ಯಾಯಾಲಯದಲ್ಲಿ ಕಣ್ಣೀರು ಹಾಕಿದ್ದಾರೆ.
ಸರಿಯಾದ ಒಪ್ಪಿಗೆಯಿಲ್ಲದೆ ದಾಖಲೆಗಳಿಗೆ ಸಹಿ ಹಾಕುವಂತೆ ಡಿಆರ್‌ಐ ಅಧಿಕಾರಿಗಳು ಒತ್ತಾಯಿಸಿದ್ದಾರೆ ಎಂದು ರನ್ಯಾ ರಾವ್ ಆರೋಪಿಸಿದ್ದಾರೆ. ಆದರೆ ಈ ಆರೋಪಗಳನ್ನು ತಳ್ಳಿ ಹಾಕಿರುವ ಡಿಆರ್‌ಐ ಬಂಧನ ಮತ್ತು ತನಿಖೆಯನ್ನು ಕಾನೂನುಬದ್ಧವಾಗಿ ಮತ್ತು ಗೌರವಯುತವಾಗಿ ನಡೆಸಲಾಗಿದೆ ಎಂದು ಹೇಳಿದೆ. ವಿಚಾರಣೆಯ ವಿಡಿಯೋ ಚಿತ್ರೀಕರಣ ಮಾಡಲಾಗಿದೆ ಎಂದು ಕೂಡ ಹೇಳಿದೆ.
ರನ್ಯಾ ರಾವ್ ಪ್ರಸ್ತುತ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅವರ ಮಲಮಗಳು. ಆದರೆ ಮಗಳ ಕೃತ್ಯದ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ರಾಮಚಂದ್ರ ರಾವ್ ತಿಳಿಸಿದ್ದಾರೆ.












Click it and Unblock the Notifications