ಯಡಿಯೂರಪ್ಪ ಪುತ್ರ ವಿಜಯೇಂದ್ರನಿಗೆ ಅಮಿತ್ ಶಾ ಕರೆ
ಬೆಂಗಳೂರು, ಡಿಸೆಂಬರ್ 11: ಉಪ ಚುನಾವಣೆಯ ಫಲಿತಾಂಶದಲ್ಲಿ ಭಾರತೀಯ ಜನತಾ ಪಕ್ಷ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಸರ್ಕಾರವನ್ನು ಭದ್ರಪಡಿಸಿಕೊಂಡಿದೆ. ಹಾಗೆಯೇ ಇದೇ ಮೊದಲ ಬಾರಿಗೆ ಮಂಡ್ಯದ ಕೆ.ಆರ್.ಪೇಟೆಯಲ್ಲಿ ಬಿಜೆಪಿ ಗೆದ್ದಿರುವುದು ಕೇಂದ್ರ ನಾಯಕರಿಗೂ ಖುಷಿ ನೀಡಿದೆ.
ಮಂಡ್ಯದಲ್ಲಿ ಬಿಜೆಪಿ ಖಾತೆ ತೆರೆಯಲು ಪ್ರಮುಖ ಪಾತ್ರ ವಹಿಸಿರುವ ಸಿಎಂ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬುಲಾವ್ ನೀಡಿದ್ದಾರೆ.
ಬುಧವಾರ ಸಾಯಂಕಾಲ ಬಿಜೆಪಿಯ ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಅವರು ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.

ನಿನ್ನೆಯೇ ವಿಜಯೇಂದ್ರ ಅವರಿಗೆ ದೂರವಾಣಿ ಕರೆ ಮಾಡಿ ಅಮಿತ್ ಶಾ ಅಭಿನಂದನೆ ಹೇಳಿದ್ದಾರೆ, ಇದೇ ಸಂದರ್ಭದಲ್ಲಿ ನವದೆಹಲಿಗೆ ಬಂದು ತಮ್ಮನ್ನು ಭೇಟಿ ಮಾಡುವಂತೆ ವಿಜಯೇಂದ್ರ ಅವರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಜೆಡಿಎಸ್ ಭದ್ರಕೋಟೆ ಮಂಡ್ಯದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಜಯ ಗಳಿಸಿದ್ದು, ಇದಕ್ಕೆ ಕಾರಣ ವಿಜಯೆಂದ್ರ ಅವರ ತಂತ್ರಗಾರಿಕೆ. ಇದು ಅಮಿತ್ ಶಾ ಅವರ ಸಂತೋಷಕ್ಕೆ ಕಾರಣವಾಗಿದೆ. ಪಕ್ಷದಲ್ಲಿ ಉನ್ನತ ಸ್ಥಾನ ನೀಡುವ ಕುರಿತು ಚಿಂತಿಸಿದ್ದಾರೆ ಎನ್ನಲಾಗಿದೆ.
ಈ ಭೇಟಿಯ ಸಂದರ್ಭದಲ್ಲಿ ರಾಜ್ಯ ರಾಜಕೀಯ ಬೆಳವಣಿಗೆ ಮತ್ತು ಪಕ್ಷದ ಸಂಘಟನೆಯ ಕುರಿತು ಚರ್ಚಿಸಲಿದ್ದಾರೆ. 2018 ರಲ್ಲಿ ವಿಜಯೇಂದ್ರ ಅವರಿಗೆ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ್ದರು. ಕೆ.ಆರ್.ಪೇಟೆಯಲ್ಲಿ ವಿಜಯೇಂದ್ರ ತಮ್ಮ ಸಾಮರ್ಥ್ಯ ತೋರಿಸಿದ್ದಾರೆ.












Click it and Unblock the Notifications