ಅನ್ನಭಾಗ್ಯದ ಅಕ್ಕಿ ರಾಜಕೀಯ: ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು, ಜೂನ್ 20: ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಪೂರೈಕೆ ಮಾಡಲು ಸಾಧ್ಯವಿಲ್ಲ ಎಂದ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದೆ. ಮಂಗಳವಾರ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.
ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಬೇಕಿತ್ತು ಆದರೆ ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದು ಪ್ರತಿಭಟನೆಗೆ ಅಡ್ಡಿಪಡಿಸಿದೆ. ಕಾಂಗ್ರೆಸ್ ಪ್ರತಿಭಟನೆಗೆ ತಿರುಗೇಟು ನೀಡಲು ಬಿಜೆಪಿ ನಾಯಕರು ಕೂಡ ಮೌರ್ಯ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಎರಡೂ ಕಡೆ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.

ಎರಡೂ ಕಡೆಗಳಲ್ಲಿ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ. ಡಿಸಿಪಿಗಳಾದ ಶ್ರೀನಿವಾಸಗೌಡ, ಲಕ್ಷ್ಮಣ ನಿಂಬರಗಿ 500ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. 6 ಎಸಿಪಿ, 25 ಪಿಐ ಸೇರಿ 500ಕ್ಕೂ ಹೆಚ್ಚು ಪೊಲೀಸರು ಹಾಜರಿದ್ದಾರೆ, ಕೆಎಸ್‌ಆರ್ ಪಿ ತುಕಡಿಯನ್ನು ಕೂಡ ನಿಯೋಜಿಸಲಾಗಿದೆ.
ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಮೈಸೂರಿನ ಗಾಂಧಿ ವೃತ್ತದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ಬೇಕಂತಲೇ ಅಕ್ಕಿ ವಿತರಿಸಲು ರಾಜಕೀಯ ಮಾಡುತ್ತಿದೆ. ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರದ ಕಾರಣ ಈ ರೀತಿ ಸೇಡು ತೀರಿಸಿಕೊಳ್ಳುವ ಕೆಲಸಕ್ಕೆ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಶಾಸಕ ಎಂ ಕೆ ಸೋಮಶೇಖರ್, ಜಿಲ್ಲಾಧ್ಯಕ್ಷ ಡಾ ಬಿಜೆ ವಿಜಯ್ ಕುಮಾರ್, ನಗರಾಧ್ಯಕ್ಷ ಆರ್ ಮೂರ್ತಿ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

ಚಿಕ್ಕಮಗಳೂರು, ಹಾಸನದಲ್ಲಿ ಕೂಡ ಪ್ರತಿಭಟನೆ
ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲಾ ಕೇಂದ್ರದಲ್ಲಿ ಕೂಡ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಚಿಕ್ಕಮಗಳೂರು ನಗರದ ಹನುಮಂತಪ್ಪ ವೃತ್ತದಲ್ಲಿ ಜಿಲ್ಲಾ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಅಕ್ಕಿಯನ್ನು ಕೊಡದೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.
ಹಾಸನ ಜಿಲ್ಲಾಧಿಕಾರಿ ಎದುರು ಕಾಂಗ್ರೆಸ್ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ನಡೆಸಿದರು. ಮಹಿಳಾ ಕಾರ್ಯಕರ್ತರು ತಟ್ಟೆ, ಸೌಟು ಹಿಡಿದು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಅರಸೀಕೆರೆ ಶಾಸಕ ಕೆ.ಎಂ ಶಿವಲಿಂಗೇಗೌಡ ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ತುಮಕೂರು ಜಿಲ್ಲಾ ಕೇಂದ್ರದಲ್ಲಿ ಕೂಡ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿತ್ತು,ನಗರದ ಬಿಜಿಎಸ್ ಸರ್ಕಲ್‌ನಲ್ಲಿ ವಿನೂತನವಾಗಿ ಪ್ರತಿಭಟನೆ ಮಾಡಿದರು. ಕಾಂಗ್ರೆಸ್ ಮುಖಂಡರು ಚೀಲಗಳಲ್ಲಿ ಅನ್ನಭಾಗ್ಯ ಅಕ್ಕಿಯನ್ನು ಇಟ್ಟು, ಭತ್ತ, ರಾಗಿ, ಜೋಳ ರಾಶಿಗಳನ್ನು ಹಾಕಿ ಪೂಜೆ ಸಲ್ಲಿಸಿ, ಭಾರತೀಯ ಆಹಾರ ಪ್ರಾಧಿಕಾರಕ್ಕೆ ಕಳುಹಿಸುವ ವಿನೂತನ ಪ್ರತಿಭಟನೆ ನಡೆಸಿದರು.












Click it and Unblock the Notifications