ಬೆಂಗಳೂರಿನ ಪ್ರತಿಷ್ಠಿತ ದೇವಸ್ಥಾನಕ್ಕೆ 50 ಲಕ್ಷ ದೇಣಿಗೆ ಕೊಟ್ಟ ಬಿಬಿಎಂಪಿ!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಬೆಂಗಳೂರಿನ ಪ್ರತಿಷ್ಠಿತ ದೇವಾಲಯವೊಂದಕ್ಕೆ ಬರೋಬ್ಬರಿ 50 ಲಕ್ಷ ರೂಪಾಯಿ ದೇಣಿಗೆಯನ್ನು ನೀಡಿದೆ. ಹೌದು ಬೆಂಗಳೂರಿನ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಇಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಚೆಕ್ ವಿತರಣೆ ಮಾಡಿದ್ದಾರೆ. ಯಾವ ಕಾರಣಕ್ಕೆ ದೇಣಿಗೆ ನೀಡಲಾಗಿದೆ. ಏನಿದರ ಹಿನ್ನೆಲೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಬಿಬಿಎಂಪಿ ಕೇಂದ್ರ ಕಚೇರಿಯ ಆವರಣದಲ್ಲಿರುವ ಏಳು ಸುತ್ತಿನ ಕೋಟೆ ಸಪ್ತಮಾತೃಕಾ ಸಹಿತ ಆದಿಶಕ್ತಿ ದೇವಾಲಯ ನವೀಕರಣಕ್ಕಾಗಿ 50 ಲಕ್ಷ ರೂಪಾಯಿ ದೇಣಿಗೆಯ ಚೆಕ್ ನೀಡಲಾಗಿದೆ. ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ದೇವಸ್ಥಾನ ಆಡಳಿತ ಮಂಡಳಿಗೆ ಹಸ್ತಾಂತರಿಸಿದ್ದಾರೆ. ದೇವಸ್ಥಾನದ ನವೀಕರಣಕ್ಕೆ ಆರ್ಥಿಕ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದವರಿಗೆ ದೇವಸ್ಥಾನ ಆಡಳಿತ ಮಂಡಳಿಯ ಅರ್ಚಕರು ಆರ್ಥಿಕ ಸಹಕಾರ ನೀಡುವಂತೆ ಮನವಿ ಸಲ್ಲಿಸಿದ್ದರು.

ಮುಂದುವರಿದು, ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಕಾಯಂ ಅಧಿಕಾರಿ ಮತ್ತು ನೌಕರರಿಂದ (ಪೌರಕಾರ್ಮಿಕರನ್ನು ಹೊರತುಪಡಿಸಿ) ಮಾರ್ಚ್-2025ರ ತಿಂಗಳ ವೇತನದಲ್ಲಿ ತಲಾ 1000 ರೂಪಾಯಿಗಳನ್ನು ಕಡಿತ ಮಾಡಿ ದೇವಾಲಯ ನವೀಕರಣ ಜೀರ್ಣೋದ್ಧಾರಕ್ಕಾಗಿ ಆರ್ಥಿಕ ನೆರವು ನೀಡಲು ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘವು ಮುಖ್ಯ ಆಯುಕ್ತರಿಗೆ ಮನವಿ ಸಲ್ಲಿಸಲಾಗಿತ್ತು.
ಈ ಮನವಿ ಹಿನ್ನೆಲೆಯಲ್ಲಿ ಸೋಮವಾರ ದೇವಾಲಯ ನವೀಕರಣ ಕಾರ್ಯಕ್ಕಾಗಿ ಅಧಿಕಾರಿ/ಸಿಬ್ಬಂದಿಗಳ ವೇತನದಿಂದ 50 ಲಕ್ಷ ರೂಪಾಯಿ ಚೆಕ್ ಅನ್ನು ದೇವಸ್ಥಾನ ಆಡಳಿತ ಮಂಡಳಿಯ ಅರ್ಚಕರಿಗೆ ಹಸ್ತಾಂತರಿಸಲಾಗಿದೆ. ಅಲ್ಲದೇ ಕೂಡಲೆ ಬಾಕಿ ಇರುವ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಅಮೃತ್ ರಾಜ್ ಸೇರಿದಂತೆ ಸಂಘದ ಪದಾಧಿಕಾರಿಗಳು, ದೇವಸ್ಥಾನ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಜರಿದ್ದರು.
ಮಳೆ ಮುನ್ನೆಚ್ಚರಿಕೆಗೆ ಬಿಬಿಎಂಪಿ ಆಯುಕ್ತರ ಸೂಚನೆ
ಇನ್ನು ಬೆಂಗಳೂರಿನಲ್ಲಿ ಆಗಾಗ ಮಳೆಯಾಗುತ್ತಿದ್ದು ಸಣ್ಣ ಮಳೆಗೂ ಸಮಸ್ಯೆ ಆಗುತ್ತಿದೆ. ಬೆಂಗಳೂರಿನಲ್ಲಿ ಮಳೆಗಾಲದಲ್ಲಿ ಎದುರಾಗಬಹುದಾದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೂಚನೆ ನೀಡಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಮುಂಗಾರು ಮಳೆಗಾಲದಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಪಾಲಿಕೆಯ ಆಯುಕ್ತರು ಸೂಚನೆ ಕೊಟ್ಟಿದ್ದಾರೆ. ಮುಂಗಾರು ಮಳೆಯಿಂದ ಉಂಟಾಗುವ ಸಮಸ್ಯೆಗಳನ್ನು ತಪ್ಪಿಸುವ ಸಲುವಾಗಿ ಎಲ್ಲಾ ಅಧಿಕಾರಿಗಳಿಗೆ ವಿಪತ್ತು ನಿರ್ವಹಣೆ ಕಾಯ್ದೆಯಡಿ ಅಗತ್ಯ ಕ್ರಮಗಳನ್ನು ಕೈಗೊಂಡು ತ್ವರಿತಗತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.
ಕಳೆದ ಬಾರಿ ಮಳೆಗಾಲದಲ್ಲಿ ಬೆಂಗಳೂರಿನ ವಿವಿಧ ಭಾಗದಲ್ಲಿ ಹೆಚ್ಚು ಸಮಸ್ಯೆಯಾಗಿದ್ದ ನಿರ್ದಿಷ್ಟ ಪ್ರದೇಶಗಳಲ್ಲಿ ಈ ಬಾರಿ ಯಾವುದೇ ರೀತಿಯ ಸಮಸ್ಯೆ ಆಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಸಾಯಿ ಲೇಔಟ್, ಪೈ ಲೇಔಟ್, ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್, ಕೋಗಿಲು ಕ್ರಾಸ್, ಸರ್ಜಾಪುರ ರಸ್ತೆ (ಇಬ್ಬಲೂರು ಜಂಕ್ಷನ್), ಅಬ್ಬಿಗೆರೆ ಕೆರೆ ಕೋಡಿ, ಮೈಸೂರು ರಸ್ತೆ ಹಾಗೂ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.
ಇನ್ನು ಬೆಂಗಳೂರಿನಲ್ಲಿ 198 ಪ್ರವಾಹ ಪೀಡಿತ ಪ್ರದೇಶಗಳಿವೆ. ಇದರೊಂದಿಗೆ ಹೊಸದಾಗಿ 11 ಪ್ರದೇಶಗಳು ಸೇರಿದಂತೆ ಒಟ್ಟು 209 ಪ್ರವಾಹ ಪೀಡಿದ ಪ್ರದೇಶಗಳಿವೆ. ಈ ಸಂಬಂಧ ಈಗಾಗಲೇ 166 ಸ್ಥಳಗಳಲ್ಲಿ ಯಾವುದೇ ಸಮಸ್ಯೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬಾಕಿ 43 ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಯಾವುದೇ ಸಮಸ್ಯೆಯಾಗದಂತೆ ಸೂಕ್ತ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು. ಅಧಿಕಾರಿಗಳು ಕುದ್ದು ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಬೇಕೆಂದು ಎಂದು ಸೂಚನೆ ನೀಡಲಾಗಿದೆ.












Click it and Unblock the Notifications