ಜುಲೈ ಅಂತ್ಯಕ್ಕೆ ಬಿಬಿಎಂಪಿ ಚುನಾವಣೆ
ಬೆಂಗಳೂರು, ಜೂ. 08 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಜುಲೈ ಕೊನೆಯ ವಾರದಲ್ಲಿ ನಡೆಯುವ ಸಾಧ್ಯತೆ ಇದೆ. ಮೀಸಲಾತಿ ಪಟ್ಟಿ ಪ್ರಕಟಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ರಾಜ್ಯ ಚುನಾವಣಾ ಆಯುಕ್ತ ಪಿ.ಎನ್.ಶ್ರೀನಿವಾಸಚಾರಿ ತಿಳಿಸಿದರು.
ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಚುನಾವಣಾ ಆಯುಕ್ತರು, ಸುಪ್ರೀಂಕೋರ್ಟ್ ಆದೇಶದ ಅನ್ವಯ ಆ.5ರೊಳಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯನ್ನು ನಡೆಸಲಾಗುತ್ತದೆ ಎಂದರು. [ಮೂರು ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸಿ]

ಬಿಬಿಎಂಪಿ ಚುನಾವಣೆಗೆ ಸರ್ಕಾರ ಮೀಸಲಾತಿ ನಿಗದಿ ಮಾಡಿ ಪಟ್ಟಿ ಕಳುಹಿಸಬೇಕಾಗಿದೆ. ಮೀಸಲಾತಿ ಪಟ್ಟಿ ಬಂದ ನಂತರ ಚುನಾವಣೆ ದಿನಾಂಕ ನಿಗದಿ ಮಾಡಲಾಗುತ್ತದೆ. ಸದ್ಯ, ಗ್ರಾಮ ಪಂಚಾಯಿತಿ ಚುನಾವಣೆಯ ಅಧ್ಯಕ್ಷ, ಉಪಾಧ್ಯಕ್ಷ ಮೀಸಲು ನಿಗದಿ ನಡೆಯುತ್ತಿದೆ. ಈ ಪ್ರಕ್ರಿಯೆ ಮುಗಿದ ಬಳಿಕ ಚುನಾವಣೆ ಪ್ರಕ್ರಿಯೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು. [ಹಳೇ ಮೀಸಲಾತಿಯಂತೆ ಬಿಬಿಎಂಪಿ ಚುನಾವಣೆ]
ಜೂನ್ 11ರ ನಂತರ ಚುನಾವಣಾ ಪ್ರಕ್ರಿಯೆಯನ್ನು ಆರಂಭಿಸಲು ಚುನಾವಣಾ ಆಯೋಗ ನಿರ್ಧರಿಸಿದೆ. ರಾಜ್ಯ ಸರ್ಕಾರ ಹಿಂಪಡೆದಿರುವ ಮೀಸಲಾತಿ ಪಟ್ಟಿಯನ್ನು ಮತ್ತೆ ಪ್ರಕಟಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ತಿಳಿಸಿದರು. [ಬಿಬಿಎಂಪಿ ವಿಭಜನೆ ಹೇಗೆ, ಇಲ್ಲಿದೆ ಮಾಹಿತಿ]
ಸುಪ್ರೀಂಕೋರ್ಟ್ ಆದೇಶ ನೀಡಿತ್ತು : ಮೂರು ತಿಂಗಳಿನಲ್ಲಿ ಬಿಬಿಎಂಪಿ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ 2015ರ ಮೇ 5ರಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು ಮತ್ತು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠದ ಆದೇಶವನ್ನು ರದ್ದುಗೊಳಿಸಿತ್ತು.
ಮೇ 30ರೊಳಗೆ ಬಿಬಿಎಂಪಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಏಕ ಸದಸ್ಯ ಪೀಠ ನೀಡಿದ್ದ ಆದೇಶವನ್ನು ವಿಭಾಗೀಯ ಪೀಠ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಚುನಾವಣಾ ಆಯೋಗ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಮೂರು ತಿಂಗಳಲ್ಲಿ ಚುನಾವಣೆ ನಡೆಸುವಂತೆ ಆದೇಶ ನೀಡಿತ್ತು.












Click it and Unblock the Notifications