Bird Flu: ಬೆಂಗಳೂರಲ್ಲಿ ಹಕ್ಕಿಜ್ವರ ತಡೆಗೆ ಕ್ರಮ: ನಾನ್‌ವೆಜ್ ಪ್ರಿಯರೇ ಈ ನಿಯಮ ಪಾಲಿಸಿ!
ಕರ್ನಾಟಕದ ವಿವಿಧ ಭಾಗದಲ್ಲಿ ಹಕ್ಕಿಜ್ವರ ಹೆಚ್ಚಳವಾಗುತ್ತಿದೆ. ಸಾವಿರಾರು ಕೋಳಿಗಳಿಗೆ ಹಕ್ಕಿಜ್ವರ ಬಂದಿದ್ದು, ಸಾವನ್ನಪ್ಪುತ್ತಿವೆ. ಈ ರೀತಿ ಇರುವಾಗಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಪ್ರಮುಖ ಸೂಚನೆಯೊಂದನ್ನು ಕೊಟ್ಟಿದೆ. ನಗರದಲ್ಲಿ ಹಕ್ಕಿಜ್ವರ ನಿಯಂತ್ರಣಕ್ಕೆ ಕ್ರಮವ ವಹಿಸಲಾಗುತ್ತಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಹಕ್ಕಿಜ್ವರ ನಿಯಂತ್ರಣಕ್ಕಾಗಿ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸೂರಳ್ಕರ್ ವಿಕಾಸ್ ಕಿಶೋರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಲ್ಲದೆ ಇದೇ ಸಂದರ್ಭದಲ್ಲಿ ಜನರಿಗೂ ಕೆಲವೊಂದು ಪ್ರಮುಖ ಸೂಚನೆಗಳನ್ನು ನೀಡಲಾಗಿದೆ. ಅದೇನು ಎನ್ನುವ ವಿವರ ಇಲ್ಲಿದೆ.
ನಗರದಲ್ಲಿ ಹಕ್ಕಿ ಜ್ವರಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಯಲ್ಲಿ ಸಭೆಯನ್ನು ನಡೆಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಬೇರೆ-ಬೇರೆ ಜಿಲ್ಲೆಗಳಲ್ಲಿ ಹಕ್ಕಿಜ್ವರ ಪ್ರಕರಣಗಳು ವರದಿಯಾಗುತ್ತಿರುವುದರಿಂದ. ಪಾಲಿಕೆ ವ್ಯಾಪ್ತಿಯಲ್ಲಿ ಹಕ್ಕಿ ಜ್ವರ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಎಲ್ಲಾ ವಲಯಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ.

ಹಕ್ಕಿಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಎನ್1 ವೈರಸ್‌ನಿಂದ ಹರಡುವ ರೋಗವಾಗಿದ್ದು, ಇದು ಟರ್ಕಿ ಕೋಳಿ, ಗಿಣಿ ಕೋಳಿ, ಬಾತು ಕೋಳಿ, ಗೀಜಗ ಮುಂತಾದ ಹಕ್ಕಿಗಳಲ್ಲಿ ಕಾಣಿಸಿಕೊಳ್ಳುವ ಸಾಂಕ್ರಾಮಿಕ ಖಾಯಿಲೆಯಾಗಿದೆ. ಸಾಮಾನ್ಯವಾಗಿ ಹಕ್ಕಿಗಳಿಂದ ಹಕ್ಕಿಗಳಿಗೆ ಹರಡಲಿದೆ. ಕೆಲವೊಮ್ಮೆ ರೋಗ ಪೀಡಿತ ಹಕ್ಕಿಗಳ ಸಂಪರ್ಕದಿಂದ ಮನುಷ್ಯರಲ್ಲೂ ಈ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಆದ್ದರಿಂದ ಪಾಲಿಕೆಯ 8 ವಲಯಗಳಲ್ಲಿ ಬರುವ ಎಲ್ಲಾ ವಾರ್ಡ್‌ಗಳಲ್ಲಿಯೂ ಹಕ್ಕಿಜ್ವರ ನಿಯಂತ್ರಣ ಕಾರ್ಯಕ್ರಮದ ಅರಿವು ಮೂಡಿಸುವ ಹಾಗೂ ತಡೆಗಟ್ಟಲು ಸೂಕ್ತ ಕ್ರಮಗಳನ್ನು ಜರುಗಿಸಲು ನಿರ್ದೇಶನ ನೀಡಲಾಗಿದೆ.
ಹಕ್ಕಿಜ್ವರ ಪೀಡಿತ ಪ್ರದೇಶಗಳಲ್ಲಿ ನಾಗರಿಕರು ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೆ ಹಕ್ಕಿಜ್ವರದ ತಡೆಯಬಹುದಾಗಿರುತ್ತದೆ. ಶಂಕಿತ ಹಕ್ಕಿಜ್ವರ ಪೀಡಿತ ಹಕ್ಕಿಗಳ ಸಂಪರ್ಕಕ್ಕೆ ಬರದಂತೆ ಎಚ್ಚರ ವಹಿಸುವುದು ಹಾಗೂ ಫಾರಂಗಳಿಗೆ ಬೇಟಿ ನೀಡಬಾರದು. ಸೊಂಕಿತ ಪ್ರದೇಶಗಳಿಗೆ ಭೇಟಿ ನೀಡಿ ಯಾವುದೇ ವಸ್ತುಗಳನ್ನು ಮುಟ್ಟಿದಲ್ಲಿ ಸಾಬೂನಿನಿಂದ ಕೈಕಾಲು ಮುಖ ತೊಳೆದು ಬಟ್ಟೆ ಬದಲಿಸುವುದು ಮತ್ತು ಮುಂದಿನ 4 ದಿನದವರೆಗೂ ದೇಹದಲ್ಲಿ ಆಗುವ ಬದಲಾವಣೆಗಳನ್ನು ಗಮನಿಸಬೇಕು. ಜ್ವರ ಕಂಡುಬಂದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಲು ಅರಿವು ಮೂಡಿಸಬೇಕೆಂದು ತಿಳಿಸಲಾಗಿದೆ.
ಕೋಳಿ ಮಾಂಸ ಮತ್ತು ಮೊಟ್ಟೆಯನ್ನು 70°C ಅಧಿಕ ಉಷ್ಣಾಂಶದಲ್ಲಿ ಬೇಯಿಸಿದ ನಂತರವೇ ಸೇವಿಸಬೇಕು, ಸೋಂಕಿತ ಹಸಿ ಮೊಟ್ಟೆಯನ್ನು ಸೇವಿಸದಂತೆ ಜಾಗೃತಿ ಮೂಡಿಸಲು ಸೂಚಿಸಿದರು.
ಸಮೀಕ್ಷಾ ಕಾರ್ಯ ನಡೆಸಿ: ಪಾಲಿಕೆಯ ಪಶುಸಂಗೋಪನಾ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಣಾ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ನಮ್ಮ ಕ್ಲಿನಿಕ್ ವೈದ್ಯರ ತಂಡ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿ ಮತ್ತು ಸಿಬ್ಬಂದಿ ತಂಡಗಳನ್ನು ರಚಿಸಿಕೊಂಡು ಪ್ರದೇಶಗಳಲ್ಲಿ ಹಕ್ಕಿಜ್ವರ ಪ್ರಕರಣಗಳ ಪತ್ತೆ ಹಚ್ಚುವ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಲು ಸೂಚನೆ ನೀಡಲಾಗಿದೆ.
ಈ ವೇಳೆ ಮುಖ್ಯ ಆರೋಗ್ಯಾಧಿಕಾರಿಯಾದ ಡಾ. ಸೈಯದ್ ಸಿರಾಜುದ್ದೀನ್ ಮದನಿ, ಪಶುಸಂಗೋಪನಾ ವಿಭಾಗದ ಜಂಟಿ ನಿರ್ದೇಶಕರಾದ ಡಾ.ಚಂದ್ರಯ್ಯ, ಎಲ್ಲಾ ವಲಯ ಆರೋಗ್ಯಾಧಿಕಾರಿಗಳು ಸೇರಿದಂತೆ ಹಲವರು ಇದ್ದರು.












Click it and Unblock the Notifications