ಬೀದಿ ವ್ಯಾಪಾರಿಗಳ ಸಮೀಕ್ಷೆ- ಮಾರಾಟ ವಲಯ ಗುರುತಿಸಲು ಬಿಬಿಎಂಪಿ ಸಜ್ಜು
ಬೆಂಗಳೂರು, ಜುಲೈ 22: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿರುವ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಗೆ ಕೈ ಹಾಕಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ವ್ಯಾಪಾರಿಗಳ ವಲಯ (Vending Zones) ಗಳನ್ನು ತ್ವರಿತವಾಗಿ ಗುರುತಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ವ್ಯಾಪಾರಿಗಳ ಸಮೀಕ್ಷೆ ಹಾಗೂ ಮಾರಾಟ ವಲಯಗಳನ್ನು ಗುರುತಿಸುವ ಸಂಬಂಧ ಬಿ.ಎಸ್.ಡಬ್ಲ್ಯೂ.ಎಂ.ಎಲ್ ನಲ್ಲಿ ಇಂದು ವರ್ಚ್ಯುವಲ್(VC) ಮೂಲಕ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ನಗರದ ಬೀದಿ ವ್ಯಾಪಾರಿಗಳ ಸಮೀಕ್ಷೆಗಾಗಿ ಈಗಾಗಲೇ ಪ್ರಮಾಣಿತ ಕಾರ್ಯಾಚರಣೆಯ ವಿಧಾನ(ಎಸ್.ಒ.ಪಿ) ಬಿಡುಗಡೆಗೊಳಿಸಿದ್ದು, ಅದರನುಸಾರ ಆಯಾ ವಲಯಗಳಲ್ಲಿ ಬೀದಿ ವ್ಯಾಪಾರಿಗಳ ವ್ಯಾಪಾರ ವಲಯಗಳನ್ನು ಗುರುತಿಸುವಂತೆ ತಿಳಿಸಿದರು.
ಸಮೀಕ್ಷೆಗೆ ಅಗತ್ಯ ಸಿಬ್ಬಂದಿ ನಿಯೋಜನೆ
ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು ಎಷ್ಟು ಮಂದಿ ಬೀದಿ ವ್ಯಾಪಾರಿಗಳಿದ್ದಾರೆ? ಎಂಬುದರ ನಿಖರವಾದ ಮಾಹಿತಿಯನ್ನು ಪಡೆಯುವ ನಿಟ್ಟಿನಲ್ಲಿ, ಬೀದಿ ವ್ಯಾಪಾರಿಗಳ ಸಮಿಕ್ಷೆಯಾಗಬೇಕಿದೆ. ಈ ಸಂಬಂಧ ಬೀದಿ ವ್ಯಾಪಾರಿಗಳ ಸಮೀಕ್ಷೆಗಾಗಿ ಕೂಡಲೆ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಿ ನಿಗದಿತ ಸಮಯದಲ್ಲಿ ಸಮೀಕ್ಷೆಯನ್ನು ಪೂರ್ಣಗೊಳಿಸಬೇಕಿದೆ ಎಂದರು.

ಕಲ್ಯಾಣ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ಮಾತನಾಡಿ, ಬೀದಿ ಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ವ್ಯಾಪಾರ ನಿಯಂತ್ರಣ) ಅಧಿನಿಯಮ, 2014 ಮತ್ತು ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ(ಜೀವನೋಪಾಯ ಸಂರಕ್ಷಣೆ, ಬೀದಿ ಬದಿ ವ್ಯಾಪಾರದ ನಿಯಂತ್ರಣ ಮತ್ತು ಪರವಾನಗಿ) ಯೋಜನೆ, 2020 ರಂತೆ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ಕೈಗೊಳ್ಳಬೇಕು.
ಈ ಸಂಬಂಧ ಆಯಾ ವಲಯಗಳಲ್ಲಿ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಗಾಗಿ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಿಕೊಂಡು ಬೀದಿ ವ್ಯಾಪಾರಿಗಳನ್ನು ಗುರುತಿಸಬೇಕೆಂದು ಎಂದು ಹೇಳಿದರು.
ಜನಸಂಖ್ಯೆಗೆ ಅನುಗುಣವಾಗಿ ಶೇ.2.5 ಮಾರಾಟ ವಲಯ
ಆಯಾ ವಲಯದ ಜನಸಂಖ್ಯೆಗೆ ಅನುಗುಣವಾಗಿ ಶೇ. 2.5 ರಷ್ಟು ಮಾರಾಟ ವಲಯ ಗುರುತಿಸಬೇಕು. ಬೀದಿ ವ್ಯಾಪಾರಿಗಳ ಸಮೀಕ್ಷೆ ಮಾಡಲು ವೆಬ್ ಅಫ್ಲಿಕೇಷನ್ ಹಾಗೂ ಮೊಬೈಲ್ ಅಫ್ಲಿಕೇಷನ್ ಸಿದ್ದಪಡಿಸಲಾಗಿದೆ. ಅದರ ಮೂಲಕ ಬೀದಿ ವ್ಯಾಪಾರ ಮಾಡುತ್ತಿರುವ ಸ್ಥಳದಲ್ಲಿ ಜಿಯೋ ಟ್ಯಾಗಿಂಗ್ ಮೂಲಕ ಸಮೀಕ್ಷೆ ಮಾಡಲಾಗುತ್ತದೆ ಎಂದು ಹೇಳಿದರು.
ಆಯಾ ವಲಯಗಳಲ್ಲಿ ಸಮೀಕ್ಷೆ ನಡೆದ ನಂತರ ಪೂರ್ಣ ವಿವರಗಳುಳ್ಳ ಪಟ್ಟಿಯನ್ನು ಪಟ್ಟಣ ಮಾರಾಟ ಸಮಿತಿಯ ಮುಂದಿರಿಸಿ ಆಕ್ಷೇಪಣೆಗಳಿದ್ದಲ್ಲಿ ಸ್ವೀಕರಿಸಲು ಕಾಲಾವಕಾಶ ನೀಡಿ ಪಾಲಿಕೆಯ ಅಧಿಕೃತ ವೆಬ್‌ಸೈಟ್ ನಲ್ಲಿ ಅಪ್ಲೋಡ್ ಮಾಡಲಾಗುತ್ತದೆ ಎಂದು ವಿವರಿಸಿದರು.
ಸಭೆಯಲ್ಲಿ ಎಲ್ಲಾ ವಲಯ ಆಯುಕ್ತರು, ಎಲ್ಲಾ ವಲಯ ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಪಾಲ್ಗೊಂಡಿದ್ದರು.











Click it and Unblock the Notifications