ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ
ಬೆಂಗಳೂರು ನವೆಂಬರ್ 25: ರಾಜ್ಯದ ಯಾವ ಗ್ರಾಮಗಳಲ್ಲೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ವಹಿಸುವಹಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸೂಚನೆ ನೀಡಿದರು.
ಬರಗಾಲವನ್ನು ಪರಿಣಾಮಕಾರಿಯಾಗಿ ಎದುರಿಸುವ ಹಾಗೂ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಲ್ಲಿ ತುರ್ತು ಕ್ರಮ ಜರುಗಿಸುವ ಸಂಬಂಧ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಲಾಯಿತು. ಬರಗಾಲ ನಿರ್ವಹಣೆ ಮತ್ತು ಕುಡಿಯುವ ನೀರು, ಮೇವಿನ ಬಗ್ಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ವಿ. ರಶ್ಮಿ ಮಹೇಶ್ ಅವರ ಜೊತೆ ಶುಕ್ರವಾರ ಕೃಷ್ಣಬೈರೇಗೌಡ ಅವರು ಸಭೆ ನಡೆಸಿದರು.

ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, " ಕುಡಿಯುವ ನೀರಿನ ಸಮಸ್ಯೆಗಳಿರುವ ಗ್ರಾಮಗಳನ್ನು ಜಿಲ್ಲಾಧಿಕಾರಿಗಳು ಮೊದಲು ಗುರುತಿಸಬೇಕು. ಇಂತಹ ಗ್ರಾಮಗಳಲ್ಲಿ ಖಾಸಗಿ ಬೋರ್ ವೆಲ್ ಖರೀದಿಸಿ ಎಲ್ಲೇ ನೀರಿನ ಸಮಸ್ಯೆ ಕಂಡುಬಂದರೂ 24 ಗಂಟೆಯಲ್ಲಿ ನೀರನ್ನು ಪೂರೈಸಬೇಕು" ಎಂದು ಸೂಚಿಸಿದರು.
ಬೋರ್ ವೆಲ್ ಖರೀದಿಗೆ ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ದರ ನಿಗದಿಗೊಳಿಸಬೇಕು. ಟ್ಯಾಂಕರ್ ಮೂಲಕ ನೀರನ್ನು ಪೂರೈಸುವುದಾದರೆ, ಟೆಂಡರ್ ಕರೆಯಿಸಿ. 15 ದಿನಗಳ ಒಳಗಾಗಿ ಬಿಲ್ ಪಾವತಿ ಮಾಡಿ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಗ್ರಾಮ ಪಂಚಾಯತಿಗಳು ತಮ್ಮ ಖಾತೆಯಲ್ಲಿರುವ ಹಣವನ್ನು ಬಳಸಿಕೊಳ್ಳಬಹುದು. ಕುಡಿಯುವ ನೀರಿಗಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲೂ ಹಣ ಇದ್ದು ಇದನ್ನು ಬಳಸಿಕೊಳ್ಳಬಹುದು ಎಂದರು.

ಜಿಲ್ಲಾಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಈ ಎಲ್ಲಾ ಕ್ರಮಗಳನ್ನೂ ಕೈಗೊಳ್ಳಬೇಕು. ಅಲ್ಲದೆ, ಮೇವಿಗೂ ಕೊರತೆಯಾಗದಂತೆ ಜಾಗೃತವಹಿಸಬೇಕು. ಈಗಾಗಲೇ ನೀರಿನ ಲಭ್ಯತೆ ಇರುವ ರೈತರಿಗೆ ಉಚಿತ ಮೇವಿನ ಕಿಟ್ ನೀಡಲಾಗಿದ್ದು, ರಾಜ್ಯದಲ್ಲಿ ಸದ್ಯಕ್ಕೆ ಮೇವಿನ ಕೊರತೆ ಇಲ್ಲ. ಆದರೆ, ರಾಜ್ಯದ ಮೇವು ಪಕ್ಕದ ರಾಜ್ಯಕ್ಕೆ ಕಳ್ಳಸಾಗಾಣೆಯಾಗದಂತೆ ನೋಡಿಕೊಳ್ಳಿ ಎಂದು ಅವರು ತಿಳಿಸಿದರು.
ಇನ್ನೂ ಕಳೆದ ದಿನ ರಾಜ್ಯದಲ್ಲಿ ಈಗಾಗಲೇ ಬರ ಘೋಷಣೆ ಮಾಡಲಾಗಿದ್ದು, ಕೇಂದ್ರ ಸರ್ಕಾರಕ್ಕೆ ಮನವಿಯನ್ನೂ (ಮೆಮೊರಾಂಡಂ) ಸಲ್ಲಿಸಲಾಗಿದೆ. ಈ ಸಂಬಂಧ ಶೀಘ್ರ ನಿರ್ಧಾರ ತೆಗೆದುಕೊಂಡು ಬರ ಪರಿಹಾರ ಹಣ ಬಿಡುಗಡೆಗೊಳಿಸಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಳಿ ಸಚಿವ ಕೃಷ್ಣ ಬೈರೇಗೌಡ ಅವರು ಮನವಿ ಸಲ್ಲಿಸಿದರು.
ರಾಗಿ ಸಜ್ಜೆ ಜೋಳ ಸೇರಿದಂತೆ ರೈತರು ಬೆಳೆಯುವ ಎಲ್ಲಾ ಸಿರಿಧಾನ್ಯಗಳನ್ನೂ ಯಾವುದೇ ನಿಬಂಧನೆ ಇಲ್ಲದೆ ಕನಿಷ್ಠ ಬೆಂಬಲ ಬೆಲೆ ನೀಡಿ ಸರ್ಕಾರವೇ ಖರೀದಿ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಸಚಿವರಾದ ನಿರ್ಮಲಾ ಸೀತಾರಾಮನ್ ಅವರ ಬಳಿ ಮನವಿ ಮಾಡಿರುವುದಾಗಿ ಅವರು ತಿಳಿಸಿದರು.
ಸಭೆಯಲ್ಲಿ ರಾಜ್ಯದ ಸಿರಿಧಾನ್ಯದ ಇತಿಹಾಸವನ್ನು ನಿರ್ಮಲಾ ಸೀತಾರಾಮನ್ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ. ಸರ್ಕಾರವೇ ಎಲ್ಲಾ ಸಿರಿಧಾನ್ಯಗಳನ್ನೂ ಖರೀದಿಸಿದರೆ ಸಿರಿಧಾನ್ಯಗಳನ್ನು ಬೆಳೆಯುವ ವ್ಯಾಪ್ತಿಯೂ ಹೆಚ್ಚಲಿದೆ, ಇದರಿಂದ ರೈತರಿಗೂ ಅನುಕೂಲವಾಗಲಿದೆ ಎಂದು ಅವರಿಗೆ ತಿಳಿಸಿಕೊಡಲಾಗಿದೆ. ಈ ಬೇಡಿಕೆಗೂ ನಿರ್ಮಲಾ ಸೀತಾರಾಮನ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.












Click it and Unblock the Notifications