Bengaluru: ಭ್ರಷ್ಟಾಚಾರಕ್ಕೆ ಬ್ರೇಕ್ ಡಿ.ಕೆ ಶಿವಕುಮಾರ್ ಎಚ್ಚರಿಕೆ ಬೆನ್ನಲ್ಲೇ: ಬೆಂಗಳೂರಿನ ಆರೋಗ್ಯ ಅಧಿಕಾರಿ ಅಮಾನತು
Bengaluru Corporation: ಕರ್ನಾಟಕದ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಲಾಗುವುದು ಹಾಗೂ ಯಾವುದೇ ಅಧಿಕಾರಿಗಳು, ಸಿಬ್ಬಂದಿ ಭ್ರಷ್ಟಾಚಾರ ನಡೆಸಿದರೆ ಸಹಿಸುವುದಿಲ್ಲ ಎಂದು ಈಚೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದರು. ಇದರ ಬೆನ್ನಲ್ಲೇ ಲಂಚದ ಆರೋಪದ ಮೇಲೆ ಪ್ರಮುಖ ಕ್ರಮ ತೆಗೆದುಕೊಳ್ಳಲಾಗಿದೆ. ಇದೀಗ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆರೋಗ್ಯ ಇಲಾಖೆಯ ಅಧಿಕಾರಿಯ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ.
ಬೆಂಗಳೂರು ಉತ್ತರ ನಗರ ಪಾಲಿಕೆಯ ಯಲಹಂಕ ವಿಭಾಗದಲ್ಲಿ ಹಿರಿಯ ಆರೋಗ್ಯ ಪರಿವೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ರೈಸ್ ಅಹಮ್ಮದ್ ಅಜೀಜ್ ಮಿಯಾನವರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತು ಮಾಡಿ ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.

ವಾರ್ಡ್ ಸಂಖ್ಯೆ 3ರಲ್ಲಿ ಕಟಿಂಗ್ ಶಾಪ್ (ಸಲೂನ್) ಉದ್ದಿಮೆಯ ಮಾಲೀಕರಿಂದ ಉದ್ದಿಮೆ ಪರವಾನಗಿ ಹಾಗೂ ಆರೋಗ್ಯ ಇಲಾಖೆಯ ಪರಿಶೀಲನೆಗೆ ಸಂಬಂಧಿಸಿದ ಕಾರ್ಯಗಳನ್ನು ನಿರ್ವಹಿಸುವ ಸಲುವಾಗಿ ಅಕ್ರಮವಾಗಿ ಹಣ (ಲಂಚ) ಪಡೆದಿರುವುದಾಗಿ ಬಂದ ದೂರಿನನ್ವಯ ಹಾಗೂ ಮಾಧ್ಯಮಗಳಲ್ಲಿ ಪ್ರಸಾರಗೊಂಡ ವರದಿಯನ್ವಯ 1957ರ ಸಿಸಿಎ ನಿಯಮಾವಳಿಯ ನಿಯಮ 10(1)(ಎ)ರನ್ವಯ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
ಅಲ್ಲದೆ ಮುಂದುವರಿದು ನೌಕರರು ಮೂಲ ಪೌರಾಡಳಿತ ನಿರ್ದೇಶನಾಲಯ ಇಲಾಖೆಯಿಂದ ನಿಯೋಜನೆ ಮೇರೆಗೆ ಬೆಂಗಳೂರು ಉತ್ತರ ನಗರ ಪಾಲಿಕೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿನ್ನೆಲೆಯಲ್ಲಿ, ಸದರಿಯವರ ಅಮಾನತ್ತು ಆದೇಶದ ಸ್ಥಿರೀಕರಣ ಹಾಗೂ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಸೂಕ್ತ ಕ್ರಮ ಕೈಗೊಳ್ಳಲು ಪೌರಾಡಳಿತ ನಿರ್ದೇಶನಾಲಯಕ್ಕೆ ಪತ್ರ ಬರೆಯಲಾಗಿದೆ ಎಂದೂ ಹೇಳಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಆರೋಗ್ಯ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಯ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ. ಇದು ಹಲವರಿಗೆ ಎಚ್ಚರಿಕೆಯಾಗಿರಲಿ ಎಂದೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದೇನು ?
ಇನ್ನು ಈಚೆಗೆ ಕರ್ನಾಟಕದಲ್ಲಿ ಉತ್ತಮ ಆಡಳಿತ ನೀಡುವ ಬಗ್ಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಾತನಾಡಿದ್ದರು. ಕರ್ನಾಟಕದ ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಭ್ರಷ್ಟಾಚಾರದ ವಿರುದ್ಧಶೂನ್ಯ ಸಹಿಷ್ಣುತೆ ಕ್ರಮ ಅನುಸರಿಸುವುದಾಗಿ ಹೇಳಿದ್ದರು. ಭ್ರಷ್ಟಾಚಾರದ ವಿಚಾರದಲ್ಲಿ ನಾನು ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವುದಿಲ್ಲ. ನಕಲಿ ಬಿಲ್ ಹಾಗೂ ಡಬಲ್ ಬಿಲ್ ಮಾಡುವವರನ್ನು ಸಹಿಸುವುದಿಲ್ಲ. ದಾಖಲೆ ತಿದ್ದುವುದಕ್ಕೆ ಬ್ರೇಕ್ ಹಾಕಲು ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗುತ್ತಿದೆ. ಅಧಿಕಾರಿಗಳು ಯಾರ ಒತ್ತಡಕ್ಕೂ ಮಣಿಯದೆ ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ, ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಅಧಿವೇಶನ ಆದ ಮೇಲೆ ನಾನು ಪ್ರತಿ ತಾಲ್ಲೂಕಿಗೂ ಭೇಟಿ ನೀಡುತ್ತೇನೆ ಎಂದೂ ಈಚೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದರು.


Click it and Unblock the Notifications
