ಪ್ರಜ್ವಲ್ ರೇವಣ್ಣ ಬಂಧನದ ಬೆನ್ನಲ್ಲೇ ಹೆಚ್‌ಡಿ ರೇವಣ್ಣ ಕುಟುಂಬಕ್ಕೆ ಮತ್ತೊಂದು ಆಘಾತ
35 ದಿನಗಳ ಕಾಲ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಶುಕ್ರವಾರ ಅರ್ಧರಾತ್ರಿ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದು ಅವರನ್ನು 6 ದಿನಗಳ ಕಾಲ ಎಸ್‌ಐಟಿ ವಶಕ್ಕೆ ನೀಡಿ ಕೋರ್ಟ್ ಆದೇಶ ಕೊಟ್ಟಿದೆ.
ಸಂಸದ ಪ್ರಜ್ವಲ್ ರೇವಣ್ಣ ಅವರ ತಾಯಿ ಹಾಗೂ ಶಾಸಕ ಹೆಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ.

ಮೈಸೂರು ಜಿಲ್ಲೆಯ ಕೆಆರ್ ನಗರದಲ್ಲಿ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಸೊಸೆ ಭವಾನಿ ರೇವಣ್ಣ ಬುಧವಾರ ನಿರೀಕ್ಷಣಾ ಜಾಮೀನು ಕೋರಿದ್ದರು.
ಭವಾನಿ ಮನವಿಗೆ ಎಸ್‌ಐಟಿ ಆಕ್ಷೇಪ
ಪ್ರಜ್ವಲ್ ರೇವಣ್ಣ ಮತ್ತು ಎಚ್‌ಡಿ ರೇವಣ್ಣ ವಿರುದ್ಧದ ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಅಪಹರಣ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನಿಗೆ ಆಕ್ಷೇಪ ವ್ಯಕ್ತಪಡಿಸಿದೆ.
ಮನೆ ಕೆಲಸದಾಕೆಯ ಅಪಹರಣದಲ್ಲಿ ಭವಾನಿ ರೇವಣ್ಣ ಅವರ ಪಾತ್ರವೇನು ಎನ್ನುವುದರ ಬಗ್ಗೆ ತನಿಖೆ ನಡೆಸಬೇಕು ಎಂದು ಎಸ್‌ಐಟಿ ಹೇಳಿದೆ.
ಭವಾನಿ ರೇವಣ್ಣ ಮತ್ತು ಅವರ ಕುಟುಂಬ ಸದಸ್ಯರು ಪ್ರಭಾವಿಗಳಾಗಿದ್ದು, ಸಾಕ್ಷಿಗಳನ್ನು ಹಾಳುಮಾಡಬಹುದು ಮತ್ತು ಸಂತ್ರಸ್ತರು ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಎಸ್‌ಐಟಿ ನ್ಯಾಯಾಲಯಕ್ಕೆ ಹೇಳಿದೆ.
ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿ ಜೂನ್ 6ರವರೆಗೆ ಕಸ್ಟಡಿಗೆ ಪಡೆದಿರುವ ಎಸ್‌ಐಟಿ ಭವಾನಿ ಅವರನ್ನು ಶನಿವಾರ ಹೊಳೆನರಸೀಪುರದ ನಿವಾಸದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.












Click it and Unblock the Notifications