ಬಿಬಿಎಂಪಿ ಲ್ಯಾಬ್‌ನಲ್ಲಿ ಅಗ್ನಿ ಅವಘಡ: ಮೂವರು ಡಿ ಗ್ರೂಪ್ ನೌಕರರು ವಶಕ್ಕೆ- ಯಾಕೋ.. ದಾಲ್ ಮೆ ಕುಚ್ ಕಾಲಾ ಹೈ?
ಬೆಂಗಳೂರು, ಆಗಸ್ಟ್ 12: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯ ಗುಣಮಟ್ಟ ನಿಯಂತ್ರಣ ಪ್ರಯೋಗಾಲಯದಲ್ಲಿ ಶುಕ್ರವಾರ ಸಂಜೆ ಅಗ್ನಿ ಅವಘಡ ಸಂಭವಿಸಿದೆ. ಇದು ಹಲವು ಸಂಶಯಗಳನ್ನು ಹುಟ್ಟುಹಾಕಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪೊಲೀಸರು ಮೂವರನ್ನು ಡಿ ಗ್ರೂಪ್ ನೌಕರರನ್ನು ವಶಕ್ಕೆ ಪಡೆದಿದ್ದಾರೆ.
ಪ್ರತಿಷ್ಠಿತ ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದಕ್ಕೆ ನಿಖರವಾದ ಕಾರಣವನ್ನು ಕಂಡುಹಿಡಿಯುವ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಘಟನೆಯಲ್ಲಿ ಗಾಯಗೊಂಡ ಒಂಬತ್ತು ಅಧಿಕಾರಿಗಳು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಖ್ಯ ಇಂಜಿನಿಯರ್ ಕೆ ಪ್ರಹ್ಲಾದ್ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖೆಗೆ ಮೂರು ಪ್ರತ್ಯೇಕ ತಂಡ
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಘಟನೆಗೆ ಸಂಬಂಧಿಸಿದಂತೆ ಶುಕ್ರವಾರ ರಾತ್ರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸಲು ಮೂರು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ.
ಬಿಬಿಎಂಪಿಯ ತಾಂತ್ರಿಕ ತಂಡ, ಪೊಲೀಸರು ಮತ್ತು ಇಂಧನ ಇಲಾಖೆಯ ಅಧಿಕಾರಿಗಳ ತಂಡಗಳು ಬೆಂಕಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ಸ್ವತಂತ್ರ ತನಿಖೆ ನಡೆಸಲಿದ್ದಾರೆ.

ಆಕಸ್ಮಿಕವೋ, ಪೂರ್ವನಿಯೋಜಿತವೋ?
ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ತನಿಖೆಗೆ ಆದೇಶಿಸಿದೆ. ಇದು ಆಕಸ್ಮಿಕವೋ ಅಥವಾ ಪೂರ್ವನಿಯೋಜಿತವೋ ಎಂಬುದನ್ನು ಪತ್ತೆ ಹಚ್ಚಬೇಕಿದೆ. ಈ ಅವಘಡವು ಬೇಜವಾಬ್ದಾರಿಯಿಂದ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಆದರೆ, ಕಳೆದ ಸರ್ಕಾರದ ಕಡತಗಳನ್ನು ಸುಟ್ಟುಹಾಕಲು ವ್ಯವಸ್ಥಿತವಾಗಿ ಯೋಜನೆ ರೂಪಿಸಲಾಗಿದೆ ಎಂಬ ಸಂಶಯಗಳು ವ್ಯಕ್ತವಾಗಿದೆ. ಕಾರಣ, ಹಳೆಯ ಸರ್ಕಾರದ ಅವಧಿಯಲ್ಲಿ ಬಿಬಿಎಂಪಿ ಕಚೇರಿಯೊಳಗೆ ನಡೆದಿರುವ ಅಕ್ರಮಗಳ ತನಿಖೆಗೆ ಈಗಿನ ಸರ್ಕಾರ ಆದೇಶಿಸಿದೆ. ಇದೇ ಸಂದರ್ಭದಲ್ಲಿ, ಈ ಘಟನೆ ನಡೆದಿರುವುದು ಶಂಕೆಗಳನ್ನು ಇನ್ನಷ್ಟು ದಟ್ಟವಾಗಿಸಿದೆ.

ಗುತ್ತಿಗೆದಾರರಿಗೆ ಸಂಬಂಧಿಸಿದ ದಾಖಲೆಗಳಿಗೆ ಬೆಂಕಿ?
ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ 40 ಪರ್ಸೆಂಟ್ ಕಮಿಷನ್ ಆರೋಪಗಳನ್ನು ಗುತ್ತಿಗೆದಾರರು ಮಾಡಿದ್ದರು. ಇದು ಆಗಿನ ಬಿಜೆಪಿ ಸರ್ಕಾರಕ್ಕೆ ತೀವ್ರ ಮುಜುಗರವನ್ನು ಉಂಟು ಮಾಡಿತ್ತು. ಗುತ್ತಿಗೆದಾರರಿಗೆ ಸಂಬಂಧಿಸಿದಂತೆ ಬಿಬಿಎಂಪಿ ಕಚೇರಿಯಲ್ಲಿಯೂ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದೆ. ಈಗ ಬೆಂಕಿ ಬಿದ್ದಿರುವುದು ಗುತ್ತಿಗೆದಾರರಿಗೆ ಸಂಬಂಧಿಸಿದ ಕಡತಗಳಿಗೆ ಎಂದು ಹೇಳಲಾಗುತ್ತಿದೆ. ಇದು ಮತ್ತೊಂದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ.
ಇದೇ ವೇಳೆ, ಬಿಜೆಪಿ ಕಡೆಗೆ ಬೊಟ್ಟು ಮಾಡಿರುವ ಕಾಂಗ್ರೆಸ್, 'ಬಿಬಿಎಂಪಿ ಗುಣಮಟ್ಟ ನಿಯಂತ್ರಣ ಪ್ರಯೋಗಲಯದಲ್ಲಿ ಬೆಂಕಿ ಬಿದ್ದಿರುವುದು ಆಕಸ್ಮಿಕವಲ್ಲ, ಷಡ್ಯಂತ್ರ' ಎಂದು ಆರೋಪಿಸಿದೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಕೆಪಿಸಿಸಿ, 'ಬಿಬಿಎಂಪಿ ಕಚೇರಿಯ ಕಾಮಗಾರಿಗಳ ಗುಣಮಟ್ಟ ನಿಯಂತ್ರಣ ಪ್ರಯೋಗಲಯದಲ್ಲಿ ಕಾಮಗಾರಿಗಳ ದಾಖಲೆ ಇದ್ದಂತಹ ಕೊಠಡಿಗೆ ಬೆಂಕಿ ಬಿದ್ದಿರುವುದು ಆಕಸ್ಮಿಕವಲ್ಲ, ಷಡ್ಯಂತ್ರ' ಎಂದು ಹೇಳಿದೆ.
'ನಲವತ್ತು ಪರ್ಸೆಂಟ್ ಕಮಿಷನ್ನಿನ ಕಳಪೆ ಕಾಮಗಾರಿಗಳ ಬಗ್ಗೆ ನ್ಯಾಯಾಂಗ ತನಿಖೆಗೆ ವಹಿಸಿದ ಬೆನ್ನಲ್ಲೇ ದಾಖಲೆಗಳಿದ್ದ ಕೊಠಡಿಗೆ ಬೆಂಕಿ ಹಚ್ಚಿರುವ ದುಷ್ಕರ್ಮಿಗಳನ್ನು, ಇದರ ಹಿಂದಿರುವ ಬಿಜೆಪಿ ಭ್ರಷ್ಟರನ್ನು ಹೆಡೆಮುರಿ ಕಟ್ಟುವುದು ನಿಶ್ಚಿತ. ಬಿಜೆಪಿ ತಾನು ಮಾಡಿದ ಭ್ರಷ್ಟಾಚಾರದ ಸಾಕ್ಷ್ಯಗಳಿಗೆ ಬೆಂಕಿ ಇಟ್ಟು ಬಚಾವಾಗಿಬಿಡುವ ಹುನ್ನಾರ ನಡೆಸಿದೆ' ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.












Click it and Unblock the Notifications