ಬೆಂಗಳೂರಲ್ಲಿ 964 ಕಿಮೀ ಫುಟ್‌ಪಾತ್ ಒತ್ತುವರಿ ತೆರವು; ಬಾಕಿ ಮಾರ್ಗ, ಬಿಡಾಡಿ ವಾಹನಗಳ ತೆರವಿಗೆ ಡೆಡ್‌ಲೈನ್
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಬೆಂಗಳೂರು ನಗರವನ್ನು ಸಂದರಗೊಳಿಸಲಾಗುತ್ತಿದೆ. ಒತ್ತುವರಿ ತೆರವು, ಪಾದಚಾರಿ ಮಾರ್ಗದ ಒತ್ತುವರಿ ತೆರವು, ಸೂಕ್ತ ಕಸ ವಿಲೇವಾರಿ ಸೇರಿದಂತೆ ಅನೇಕ ಕ್ರಮ ಕೈಗೊಳ್ಳಲಾಗುತ್ತಿದೆ. ಈ ವರೆಗೆ ಜಿಬಿಎ ಎಲ್ಲ ಐದು ಪಾಲಿಕೆಗಳಿಂದ ಒಟ್ಟು 964 ಕಿಲೋ ಮೀಟರ್ ಪಾದಾಚಾರಿ ಮಾರ್ಗದ ಒತ್ತುವರಿ ತೆರವುಗೊಳಿಸಲಾಗಿದೆ. ಬಾಕಿ ಉಳಿದ ಮಾರ್ಗದ ತೆರವಿಗೆ ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಗಡುವು ನೀಡಿದ್ದಾರೆ.
ಬುಧವಾರ ಜಿಬಿಎ ವ್ಯಾಪ್ತಿಯಲ್ಲಿ 'ಪಾದಚಾರಿ ಮಾರ್ಗಗಳ ಒತ್ತುವರಿ ತೆರವು', 'ತ್ಯಾಜ್ಯದಿಂದ ಸ್ವಾತಂತ್ರ್ಯ' ಹಾಗೂ 'ಬಿಡಾಡಿ ವಾಹನಗಳ ತೆರವು ಕಾರ್ಯಾಚರಣೆ' ಕುರಿತು ಇಂದು ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಒಟ್ಟು 964 ಕಿ.ಮೀ. ಪಾದಚಾರಿ ಮಾರ್ಗ ತೆರವಾಗಿದೆ. ಬಾಕಿ ಉಳಿದ ಮಾರ್ಗದ ತೆರವು ಕಾರ್ಯವನ್ನು ಆಗಸ್ಟ್ ಪೂರ್ಣಗೊಳ್ಳುವ ಹೊತ್ತಿಗೆ ಮುಗಿಸುವಂತೆ ಅವರು ಗಡುವು ನೀಡಿದರು.

ನಗರದಲ್ಲಿ ಸುಮಾರು 1,500 ಕಿ.ಮೀ. ಉದ್ದದ ಆರ್ಟಿರಿಯಲ್ ಹಾಗೂ ಸಬ್-ಆರ್ಟಿರಿಯಲ್ ಪ್ರಮುಖ ರಸ್ತೆಗಳಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಮಾಡಲಾಗುತ್ತಿದೆ. ಇದಕ್ಕೆ ಸಾಕಷ್ಟು ವಿರೋಧ, ಪರ-ವಿರೋಧ ಚರ್ಚೆಗಳು ನಡೆದರೂ ಕೊನೆಗೂ ಈವರೆಗೆ 964 ಕಿ.ಮೀ. ಉದ್ದದ ಪಾದಚಾರಿ ಮಾರ್ಗ ತೆರವಾಗಿದೆ. ಬಾಕಿ ಯಾವ ಕೆಲಸ ಉಳಿಸದಂತೆ, ತ್ವರಿತ ತೆರವಿಗೆ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆಯನ್ನು ರೂಪಿಸಿರುವ ಯೋಜನೆಯಂತೆ ಸಮರ್ಪಕವಾಗಿ ಕೈಗೊಳ್ಳಬೇಕು. ಒತ್ತುವರಿ ತೆರವುಗೊಳಿಸಿರುವ ಸ್ಥಳಗಳಲ್ಲಿ ದುರಸ್ತಿ ಕಾರ್ಯವನ್ನೂ ಸಮಾನಾಂತರವಾಗಿ ಕೈಗೊಳ್ಳುವಂತೆ ಹೇಳಿದರು.
ಪುನಃ ಒತ್ತುವರಿ ಮಾಡಿದ್ರೆ ದುಪ್ಪಟ್ಟು ದಂಡ!
ನಗರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸಿರುವ ಸ್ಥಳಗಳಲ್ಲಿಯೇ ಬೀದಿ ಬದಿ ವ್ಯಾಪಾರಿಗಳು ಪುನಃ ಬಂದು ವ್ಯಾಪಾರ ಮುಂದುವರಿಸುತ್ತಿರುವುದು ಕಂಡುಬರುತ್ತಿದೆ. ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಂಡು, ಪುನಃ ಒತ್ತುವರಿ ಮಾಡಿಕೊಂಡು ವ್ಯಾಪಾರ ನಡೆಸುವವರ ಸಾಮಗ್ರಿಗಳನ್ನು ಜಪ್ತಿ ಮಾಡಿ, ಅವರಿಗೆ ದುಪ್ಪಟ್ಟು ದಂಡ ವಿಧಿಸುವಂತೆ ನಿರ್ದೇಶಿಸಿದರು.
'ತ್ಯಾಜ್ಯದಿಂದ ಸ್ವಾತಂತ್ರ್ಯ' ಅಭಿಯಾನ ಜಾರಿ
ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ಇದುವರೆಗೆ 4,483 ಸ್ಥಳಗಳಲ್ಲಿ 1,02,002 ಮೆಟ್ರಿಕ್ ಟನ್ ಸಿ ಆಂಡ್ ಡಿ ತ್ಯಾಜ್ಯವನ್ನು ಗುರುತಿಸಲಾಗಿದ್ದು, ಈವರೆಗೆ 1,810 ಸ್ಥಳಗಳಿಂದ 43,492 ಮೆಟ್ರಿಕ್ ಟನ್ ಸಿ ಆಂಡ್ ಡಿ ತ್ಯಾಜ್ಯವನ್ನು ತೆರವುಗೊಳಿಸಲಾಗಿದೆ. ಈ ಕಾರ್ಯಾಚರಣೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಕೈಗೊಳ್ಳಬೇಕು. ಅಧಿಕಾರಿಗಳು ಸಮರ್ಪಕವಾಗಿ ಮೇಲ್ವಿಚಾರಣೆ ನಡೆಸಿ ಅಭಿಯಾನ ಯಶಸ್ವಿಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದರು.
ಹೆಬ್ಬಾಳ ಜಂಕ್ಷನ್ ಸುತ್ತಮುತ್ತಲಿನ ಪ್ರದೇಶದಲ್ಲಿ ಬಿಡಿಎ ವತಿಯಿಂದ ಸಂಪೂರ್ಣ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ಹೆಬ್ಬಾಳದಿಂದ ಕೆ.ಆರ್. ಪುರಂವರೆಗೆ ಇರುವ ಹೊರ ವರ್ತುಲ ರಸ್ತೆಯ ಭಾಗದಲ್ಲಿ ಬೆಂಗಳೂರು ಉತ್ತರ, ಬೆಂಗಳೂರು ಪೂರ್ವ ಹಾಗೂ ಬೆಂಗಳೂರು ಕೇಂದ್ರ ನಗರ ಪಾಲಿಕೆಗಳು ಜಂಟಿಯಾಗಿ ಸಂಪೂರ್ಣ ಸ್ವಚ್ಛತಾ ಕಾರ್ಯ ಕೈಗೊಳ್ಳುವಂತೆ ನಿರ್ದೇಶಿಸಿದರು.
ಬಿಡಾಡಿ ವಾಹನಗಳ ತೆರವು ಕಾರ್ಯಾಚರಣೆ
ಬಿಡಾಡಿ ವಾಹನಗಳ ತೆರವು ಕಾರ್ಯಾಚರಣೆ ಸಕ್ರಿಯವಾಗಿ ನಡೆಯಬೇಕು. ಆಯಾ ನಗರ ಪಾಲಿಕೆಗಳಲ್ಲಿ ಕಿರಿಯ ಆರೋಗ್ಯ ಪರಿವೀಕ್ಷಕರು, ಪೌರಕಾರ್ಮಿಕರ ಮೇಲ್ವಿಚಾರಕರು ಹಾಗೂ ಮಾರ್ಷಲ್‌ಗಳಿಗೆ ಬಿಡಾಡಿ ವಾಹನಗಳಿಗೆ ನೋಟಿಸ್ ಅಂಟಿಸುವ ಜವಾಬ್ದಾರಿ ನೀಡಬೇಕು. ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.
ಬಿಡಾಡಿ ವಾಹನಗಳ ತೆರವು ಕಾರ್ಯಾಚರಣೆಯ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಸಮರ್ಪಕವಾಗಿ ಮೇಲ್ವಿಚಾರಣೆ ನಡೆಸಬೇಕು. ನೋಟಿಸ್ ಅಂಟಿಸಿದ ಬಳಿಕ ದಂಡ ಪಾವತಿಸಿ, ಅದೇ ವಾಹನವನ್ನು ಬೇರೆ ಸ್ಥಳದಲ್ಲಿ ನಿಲ್ಲಿಸುತ್ತಿದ್ದಾರೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು. ಈ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸದ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.
ಅನಾಥ ವಾಹನಗಳ ತೆರವಿಗೆ ಆ.30ರ ಗಡುವು
ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ, 'ತ್ಯಾಜ್ಯದಿಂದ ಸ್ವಾತಂತ್ರ್ಯ' ಅಭಿಯಾನ ಹಾಗೂ ಬಿಡಾಡಿ ವಾಹನಗಳ ತೆರವು ಕಾರ್ಯವನ್ನು ಆಗಸ್ಟ್ 30ರೊಳಗಾಗಿ ಪೂರ್ಣಗೊಳಿಸಬೇಕು. ಅದಾದ ಬಳಿಕ ನಾಗರಿಕರಿಗೆ ದೂರುಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಬೇಕು. ಕಾರ್ಯಗಳು ಸಮರ್ಪಕವಾಗಿ ನಡೆಯದಿರುವುದು ಗಮನಕ್ಕೆ ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.


Click it and Unblock the Notifications
