ಬೆಂಗಳೂರಿನ ವರ್ತೂರು–ಗುಂಜೂರು ವ್ಯಾಪ್ತಿಯ ಕಾಮಗಾರಿಗಳಿಗೆ ವೇಗ: ಜಿಬಿಎ ಹೊಸ ಅಪ್ಡೇಟ್ಸ್
ವರ್ತೂರು-ಗುಂಜೂರು ವ್ಯಾಪ್ತಿಯ ಕಾಮಗಾರಿಗಳಿಗೆ ವೇಗ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮಹತ್ವದ ಮಾಹಿತಿ ಹಂಚಿಕೊಂಡಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ.
ವರ್ತೂರು-ಗುಂಜೂರು ವ್ಯಾಪ್ತಿಯ ಕಾಮಗಾರಿಗಳಿಗೆ ವೇಗ ನೀಡಿ, ಸಮನ್ವಯದಿಂದ ಸಮಸ್ಯೆಗಳನ್ನು ಪರಿಹರಿಸಲು ನಿರ್ದೇಶನ ನೀಡಲಾಗಿದೆ. ವರ್ತೂರು -ಗುಂಜೂರು ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಸ್ತೆ, ಸೇತುವೆ ಹಾಗೂ ಇತರೆ ಮೂಲಸೌಕರ್ಯ ಕಾಮಗಾರಿಗಳ ಪ್ರಗತಿ ಕುರಿತು ಪರಿಶೀಲಿಸಲು ಬೆಂಗಳೂರು ಪೂರ್ವ ನಗರ ಪಾಲಿಕೆಯ ಅಪರ ಆಯುಕ್ತರಾದ ಲೋಖಂಡೆ ಸ್ನೇಹಲ್ ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಭೂಸ್ವಾಧೀನ, ಯುಟಿಲಿಟಿ ಸ್ಥಳಾಂತರ, ನೀರು ಸರಬರಾಜು, ಎಸ್ಡಬ್ಲ್ಯೂಡಿ ಕಾಮಗಾರಿಗಳು, ಸಂಚಾರ ನಿರ್ವಹಣೆ ಸೇರಿದಂತೆ ವಿವಿಧ ಮೂಲಸೌಕರ್ಯ ಸಂಬಂಧಿತ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ.

ರಸ್ತೆ ಹಾಗೂ ಸೇತುವೆ ಕಾಮಗಾರಿಗಳಿಗೆ ವೇಗ ನೀಡಲು ಸೂಚನೆ
ವರ್ತೂರು-ಗುಂಜೂರು ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಸ್ತೆ ಹಾಗೂ ಸೇತುವೆ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಲಾಯಿತು. ಕಾಮಗಾರಿಗಳಲ್ಲಿ ವಿಳಂಬವಾಗದಂತೆ ಅಗತ್ಯ ಕ್ರಮ ಕೈಗೊಂಡು, ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಸ್ತೆ ಹಾಗೂ ಸೇತುವೆ ಕಾಮಗಾರಿಗಳ ಪ್ರಗತಿಗೆ ಅಡ್ಡಿಯಾಗುತ್ತಿರುವ ವಿದ್ಯುತ್ ಮಾರ್ಗಗಳು ಹಾಗೂ ನೀರಿನ ಪೈಪ್ಲೈನ್ ಸೇರಿದಂತೆ ವಿವಿಧ ಯುಟಿಲಿಟಿಗಳನ್ನು ಸ್ಥಳಾಂತರಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ಯುಟಿಲಿಟಿ ಸ್ಥಳಾಂತರ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಯುಸಿಡಿ ಪೈಪ್‌ಲೈನ್‌ಗೆ ಸಂಬಂಧಿಸಿದ ವಿಷಯಗಳ ಬಗ್ಗೆಯೂ ಚರ್ಚಿಸಲಾಯಿತು. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು. ಅಗತ್ಯವಿರುವ ನೀರಿನ ಪೈಪ್ಲೈನ್ ಕಾಮಗಾರಿಗಳನ್ನು ತಕ್ಷಣ ಪೂರ್ಣಗೊಳಿಸಿ, ರಸ್ತೆ ಹಾಗೂ ಸೇತುವೆ ಕಾಮಗಾರಿಗಳ ಪ್ರಗತಿಗೆ ಯಾವುದೇ ಅಡ್ಡಿಯಾಗದಂತೆ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.
ಕಾಮಗಾರಿಗಳು ನಡೆಯುತ್ತಿರುವ ಪ್ರದೇಶಗಳಲ್ಲಿ ನೀರು ಸರಬರಾಜಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಶೀಲಿಸಲಾಯಿತು. ಅಗತ್ಯವಿರುವ ನೀರಿನ ಪೈಪ್ಲೈನ್ ಕಾಮಗಾರಿಗಳನ್ನು ತಕ್ಷಣ ಪೂರ್ಣಗೊಳಿಸುವಂತೆ ಹಾಗೂ ನಡೆಯುತ್ತಿರುವ ರಸ್ತೆ ಮತ್ತು ಸೇತುವೆ ಕಾಮಗಾರಿಗಳಿಂದ ನೀರು ಸರಬರಾಜಿಗೆ ಯಾವುದೇ ತೊಂದರೆ ಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಭೂಸ್ವಾಧೀನ ಸಮಸ್ಯೆಗಳನ್ನು ಪರಿಹರಿಸಿ
ಸೇತುವೆ ಹಾಗೂ ರಸ್ತೆ ಕಾಮಗಾರಿಗಳಿಗೆ ಅಗತ್ಯವಿರುವ ಜಾಗಕ್ಕೆ ಸಂಬಂಧಿಸಿದ ಭೂಸ್ವಾಧೀನ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು. ಸಂಬಂಧಪಟ್ಟ ಆಸ್ತಿಗಳ ದಾಖಲೆಗಳು ಹಾಗೂ ಅಳತೆಗಳನ್ನು ಪರಿಶೀಲಿಸಿ, ಬಾಕಿ ಇರುವ ಭೂಸ್ವಾಧೀನ ಪ್ರಕ್ರಿಯೆಗಳನ್ನು ತ್ವರಿತಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು.
ಟಿ.ಡಿ.ಆರ್ ಸ್ವೀಕರಿಸದಿರುವ ಆಸ್ತಿ ಮಾಲೀಕರಿಗೆ ಸಂಬಂಧಿಸಿದಂತೆ ನಿಯಮಾನುಸಾರ ಮುಂದಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಸರ್ಕಾರದ ಮಟ್ಟದಲ್ಲಿ ಬಾಕಿ ಇರುವ ಪ್ರಕ್ರಿಯೆಗಳನ್ನು ತ್ವರಿತಗೊಳಿಸಿ
ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸರ್ಕಾರದ ಮಟ್ಟದಲ್ಲಿ ಬಾಕಿ ಇರುವ ಅನುಮತಿಗಳು ಹಾಗೂ ನಿರ್ಧಾರಗಳನ್ನು ತ್ವರಿತವಾಗಿ ಪಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು. ಅಗತ್ಯ ದಾಖಲೆಗಳು ಹಾಗೂ ಪ್ರಸ್ತಾವನೆಗಳನ್ನು ಸಮರ್ಪಕವಾಗಿ ಸಲ್ಲಿಸಿ, ಕಾಮಗಾರಿಗಳ ಪ್ರಗತಿಗೆ ಯಾವುದೇ ಅಡ್ಡಿಯಾಗದಂತೆ ನಿರಂತರವಾಗಿ ಅನುಸರಣೆ ನಡೆಸುವಂತೆ ತಿಳಿಸಲಾಯಿತು.
ಎಸ್ಡಬ್ಲ್ಯೂಡಿ ಕಲ್ವಟರ್‌ಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆಯೂ ಚರ್ಚಿಸಲಾಯಿತು. ಸಮಸ್ಯೆಗಳನ್ನು ಪರಿಶೀಲಿಸಿ, ಅವುಗಳನ್ನು ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿಗೆ ಯಾವುದೇ ಅಡ್ಡಿಯಾಗದಂತೆ ನೋಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು.
30 ಸೆಪ್ಟೆಂಬರ್ 2026ರಂದು ಜಂಟಿ ಸ್ಥಳ ಪರಿಶೀಲನೆ
30 ಸೆಪ್ಟೆಂಬರ್ 2026ರಂದು ಬೆಳಿಗ್ಗೆ 11:00 ಗಂಟೆಗೆ ಅಪರ ಆಯುಕ್ತರಾದ ಲೋಖಂಡೆ ಸ್ನೇಹಲ್ ಸುಧಾಕರ್ ಅವರ ನೇತೃತ್ವದಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಕೆಆರ್ಡಿಸಿಎಲ್, ಎಸ್ಡಬ್ಲ್ಯೂಡಿ, ಸಂಚಾರ ಪೊಲೀಸ್ ಇಲಾಖೆ ಹಾಗೂ ಜಿಬಿಎಯ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಜಂಟಿ ಸ್ಥಳ ಪರಿಶೀಲನೆ ನಡೆಸಲಾಗುವುದು. ಈ ಸಂದರ್ಭದಲ್ಲಿ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು, ಕಾಮಗಾರಿಗಳಿಗೆ ಸಂಬಂಧಿಸಿದ ಸ್ಥಳಗಳು ಹಾಗೂ ಸಮಸ್ಯೆಗಳನ್ನು ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಸಂಚಾರ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಿ
ಕಾಮಗಾರಿಗಳು ನಡೆಯುತ್ತಿರುವ ಪ್ರದೇಶಗಳಲ್ಲಿ ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಸಂಚಾರ ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ, ಕಾಮಗಾರಿ ಸ್ಥಳಗಳಲ್ಲಿ ಅಗತ್ಯ ಸಂಚಾರ ನಿರ್ವಹಣಾ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು.
ವರ್ತೂರು-ಗುಂಜೂರು ವ್ಯಾಪ್ತಿಯ ಕಾಮಗಾರಿಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ತ್ವರಿತವಾಗಿ ಪರಿಹರಿಸಬೇಕು. ಕಾಮಗಾರಿಗಳನ್ನು ಯೋಜಿತವಾಗಿ ಕೈಗೊಂಡು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದರ ಜೊತೆಗೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಪರ ಆಯುಕ್ತರಾದ ಲೋಖಂಡೆ ಸ್ನೇಹಲ್ ಸುಧಾಕರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.


Click it and Unblock the Notifications
