Bengaluru GBA: ಬೆಂಗಳೂರು: ಪಾಲಿಕೆ ಆಯುಕ್ತರ ಹೆಸರಿನಲ್ಲಿ ವಾಟ್ಸ್ ಆ್ಯಪ್ ವಂಚನೆ ಯತ್ನ – ಸಾರ್ವಜನಿಕರಿಗೆ ಎಚ್ಚರಿಕೆ
Bengaluru GBA: ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪಾಲಿಕೆಗಳ ಆಯುಕ್ತರುಗಳ ಹೆಸರಿನಲ್ಲಿ ವಂಚನೆ ಪ್ರಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿ ಎರಡು ಪ್ರಮುಖ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್ಆ್ಯಪ್ ಹಾಗೂ ಸೋಷಿಯಲ್ ಮೀಡಿಯಾ ದುರ್ಬಳಕೆ ಬೆಳಕಿಗೆ ಬಂದಿದೆ. ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಪಾಲಿಕೆಗಳು ಹೇಳಿವೆ.
ಬೆಂಗಳೂರು ಪೂರ್ವ ನಗರ ಪಾಲಿಕೆಯ ಆಯುಕ್ತರ ಹೆಸರಿನಲ್ಲಿ ವಾಟ್ಸ್ಆ್ಯಪ್ ಮೂಲಕ ವಂಚನೆ ಯತ್ನ ನಡೆದಿದ್ದು, ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು ಪೂರ್ವ ನಗರ ಪಾಲಿಕೆಯ ಆಯುಕ್ತರಾದ ಡಿ.ಎಸ್. ರಮೇಶ್ ಅವರ ಹೆಸರು, ಹುದ್ದೆ ಹಾಗೂ ಭಾವಚಿತ್ರವನ್ನು ದುರುಪಯೋಗಪಡಿಸಿಕೊಂಡು ಕೆಲವು ಅಪರಿಚಿತ ವ್ಯಕ್ತಿಗಳು ವಾಟ್ಸ್ಆ್ಯಪ್ ಮೂಲಕ ಸಂದೇಶಗಳನ್ನು ಕಳುಹಿಸುತ್ತಿರುವುದು ಗಮನಕ್ಕೆ ಬಂದಿರುತ್ತದೆ.

ಈ ಸಂಬಂಧ, ಅಂತರಾಷ್ಟ್ರೀಯ ಮೊಬೈಲ್ ಸಂಖ್ಯೆಯಿಂದ ಬೆಂಗಳೂರು ಪೂರ್ವ ನಗರ ಪಾಲಿಕೆಯ ಅಪರ ಆಯುಕ್ತರು (ಕಂದಾಯ) ಡಾ. ಪ್ರಜ್ಞಾ ಅಮ್ಮೆಂಬಳ ಹಾಗೂ ಜಂಟಿ ಆಯುಕ್ತರು (ಮಹದೇವಪುರ ವಲಯ-1) ಡಾ. ದಾಕ್ಷಾಯಿಣಿ ಕೆ. ಅವರಿಗೆ ಸಂದೇಶ ಕಳುಹಿಸಿರುವ ಮಾಹಿತಿ ಲಭ್ಯವಾಗಿದ್ದು, ಇಂತಹ ಸಂದೇಶಗಳ ಮೂಲಕ ಆಯುಕ್ತರ ಹೆಸರಿನಲ್ಲಿ ಹಣಕಾಸು ಸಹಾಯ ಕೇಳಿ ವಂಚನೆ ನಡೆಸುವ ಯತ್ನ ನಡೆಯುತ್ತಿರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ ಎಂದು ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ, ಸಾರ್ವಜನಿಕರು ಯಾವುದೇ ಸಂದರ್ಭದಲ್ಲೂ ಇಂತಹ ಸಂದೇಶಗಳನ್ನು ನಂಬಬಾರದು ಎಂದು ತಿಳಿಯಪಡಿಸಿದೆ. ಇದೇ ವೇಳೆ, ಆಯುಕ್ತರು ಅಥವಾ ನಗರ ಪಾಲಿಕೆಯ ಯಾವುದೇ ಅಧಿಕಾರಿಗಳು ವೈಯಕ್ತಿಕ ವಾಟ್ಸಾಪ್ ಸಂದೇಶಗಳ ಮೂಲಕ ಹಣಕಾಸು ಸಹಾಯವನ್ನು ಕೇಳುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಅಪರಿಚಿತ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಂಬಂಧಿತ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಸಾರ್ವಜನಿಕರಿಗೆ ಮನವಿ
ಅಪರಿಚಿತ ಸಂಖ್ಯೆಯಿಂದ ಬರುವ ಇಂತಹ ಸಂದೇಶಗಳಿಗೆ ಪ್ರತಿಕ್ರಿಯೆಸದೇ, ತಕ್ಷಣವೇ ಸಮೀಪದ ಪೊಲೀಸ್ ಠಾಣೆಗೆ ದೂರು ನೀಡುವಂತೆ ನಾಗರಿಕರಲ್ಲಿ ಮನವಿ ಮಾಡಲಾಗಿದೆ ಎಂದು ಬೆಂಗಳೂರು ಪೂರ್ವ ನಗರ ಪಾಲಿಕೆಯ ಪ್ರಕಟಣೆ ತಿಳಿಸಿದೆ.
ಬೆಂಗಳೂರು ಉತ್ತರ ನಗರ ಪಾಲಿಕೆಯಲ್ಲೂ ಇದೇ ಮಾದರಿ: ವರದಿ
ಇನ್ನು ಬೆಂಗಳೂರಿನ ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲೂ ಇದೇ ಮಾದರಿ ವರದಿಯಾಗಿದೆ. ಅನಾಮಧೇಯರಿಂದ ವಾಟ್ಸ್ಆ್ಯಪ್ ಮೂಲಕ ವಂಚನೆ ಯತ್ನ ನಡೆದಿದ್ದು, ಸಾರ್ವಜನಿಕರಿಗೆ ಎಚ್ಚರಿಕೆ ಕೊಡಲಾಗಿದೆ. ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರ ಭಾವಚಿತ್ರ ಹಾಗೂ ಹುದ್ದೆಯನ್ನು ದುರುಪಯೋಗಪಡಿಸಿಕೊಂಡು ಅನಾಮಧೇಯ ವ್ಯಕ್ತಿಗಳು ವಾಟ್ಸ್ಆ್ಯಪ್ ಮೂಲಕ ಸಂದೇಶಗಳನ್ನು ಕಳುಹಿಸುತ್ತಿರುವ ಘಟನೆ ಗಮನಕ್ಕೆ ಬಂದಿದೆ.
ಈ ಸಂಬಂಧ, ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿಯಾದ ಅಮರೇಶ್ ಹೆಚ್. ಅವರಿಗೆ ವಿದೇಶಿ ಮೊಬೈಲ್ ಸಂಖ್ಯೆಯಿಂದ ಸಂದೇಶ ಕಳುಹಿಸಿರುವ ಬಗ್ಗೆ ಮಾಹಿತಿ ಲಭಿಸಿದೆ. ಆಯುಕ್ತರ ಹೆಸರು ಮತ್ತು ಭಾವಚಿತ್ರವನ್ನು ದುರುಪಯೋಗಪಡಿಸಿಕೊಂಡು ವಿವಿಧ ವ್ಯಕ್ತಿಗಳಿಗೆ ಸಂಪರ್ಕಿಸಿ ಹಣಕಾಸು ಸಹಾಯ ಕೋರುವ ಮೂಲಕ ವಂಚನೆ ಮಾಡಲು ಪ್ರಯತ್ನಿಸಲಾಗುತ್ತಿರುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ಇಂತಹ ಸಂದೇಶಗಳನ್ನು ಯಾವುದೇ ಸಂದರ್ಭದಲ್ಲೂ ನಂಬಬಾರದು ಎಂದು ಸಾರ್ವಜನಿಕರ ಗಮನಕ್ಕೆ ತರಲಾಗುತ್ತಿದೆ. ಆಯುಕ್ತರು ಅಥವಾ ನಗರ ಪಾಲಿಕೆಯ ಯಾವುದೇ ಅಧಿಕಾರಿಗಳು ವೈಯಕ್ತಿಕವಾಗಿ ವಾಟ್ಸಾಪ್ ಮೂಲಕ ಹಣಕಾಸು ಸಹಾಯ ಕೋರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪಾಲಿಕೆ, ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅನಾಮಧೇಯ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ವಿನಂತಿಸಲಾಗಿದೆ.
ಸಾರ್ವಜನಿಕರಿಗೆ ಮನವಿ: ಅಪರಿಚಿತ ಸಂಖ್ಯೆಯಿಂದ ಬಂದಿರುವ ಇಂತಹ ಸಂದೇಶಗಳಿಗೆ ಪ್ರತಿಕ್ರಿಯಿಸದೇ, ತಕ್ಷಣವೇ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ ಎಂದು ಬೆಂಗಳೂರು ಉತ್ತರ ನಗರ ಪಾಲಿಕೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.












Click it and Unblock the Notifications