Bengaluru Heavy Rain: ಬೆಂಗಳೂರಲ್ಲಿ 4 ದಿನ ಭಾರೀ ಮಳೆ: ಯಲ್ಲೋ ಅಲರ್ಟ್ ಘೋಷಣೆ, ಧರೆಗುರುಳಿದ 131 ಮರಗಳು
Bengaluru Heavy Rain: ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವುದರಿಂದ ಬೆಂಗಳೂರಿನಲ್ಲಿ ಭಾರೀ ಮಳೆ ಮುಂದುವರಿದಿದೆ. ಬೆಂಗಳೂರಿನ ವಿವಿಧ ಭಾಗಗಳಲ್ಲಿ ಗುರುವಾರ ರಾತ್ರಿ ಭಾರೀ ಮಳೆಯಾಗಿದೆ. ಇನ್ನೂ ಮೂರರಿಂದ ಐದು ದಿನಗಳ ವರೆಗೆ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಭಾರತೀಯ ಹವಾಮಾನ ಇಲಾಖೆಯು ಯಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರಿನಲ್ಲಿ ಶುಕ್ರವಾರವೂ ಸಹ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಮೇ 25ರ ವರೆಗೆ ಬೆಂಗಳೂರಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ಮೇ 25ರ ವರೆಗೆ ಬೆಂಗಳೂರಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮೇ 25ರ ನಂತರವೂ ಸಾಧಾರಣ ಮಳೆ ಮುಂದುವರಿಯಲಿದೆ. ಇನ್ನು ಮೇ 22ರ ಬೆಳಗಿನ ಜಾವ 3 ಗಂಟೆಯವರೆಗೆ ನಗರದ ಕೆಲವು ಭಾಗಗಳಲ್ಲಿ ಭಾರೀ ಮಳೆ ಮತ್ತು ಬಿರುಗಾಳಿ ಬೀಸಿದ್ದು, ಇದರಿಂದಾಗಿ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಮತ್ತು ಮರ ಬಿದ್ದ ಜನ ಜೀವನ ಅಸ್ತವ್ಯಸ್ತವಾಗಿದೆ.

ಮೇ 25 ರವರೆಗೆ ನಿರಂತರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ಕೊಟ್ಟಿದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಲ್ಲಿ ಕಳೆದ ಎರಡು ದಿನಗಳಿಂದಲೂ ಭಾರೀ ಮಳೆಯಾಗುತ್ತಿದ್ದು, ಗಾಳಿಯು ಜೋರಾಗಿದೆ. ಮಳೆ ಮತ್ತು ಗಾಳಿಯಿಂದ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಮರಗಳು ಧರೆಗುರುಳಿವೆ.
Bengaluru Heavy Rain: ಬೆಂಗಳೂರಿನ ಹವಾಮಾನ ಹೇಗಿದೆ
ಇನ್ನು ಬೆಂಗಳೂರಿನ ಬಹುತೇಕ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿದೆ. ಮುಂದಿನ 24 ಗಂಟೆ ಅವಧಿಯಲ್ಲಿ ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗಾಳಿಯ ವೇಗವು ಪ್ರತಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಇರಲಿದೆ. ಮಿಂಚು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 ಡಿಗ್ರಿ ಸೆಲ್ಸಿಯಸ್ ಹಾಗೂ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ತಿಳಿಸಿದೆ.
ಬೆಂಗಳೂರಲ್ಲಿ ಧರೆಗುರುಳಿದ 131 ಮರಗಳು
ಮೇ 21 ರಂದು ಸಂಜೆ ಸುರಿದ ಭಾರೀ ಮಳೆಯಿಂದಾಗಿ ನಗರದ ಹಲವಾರು ಭಾಗಗಳಲ್ಲಿ ಈಗಾಗಲೇ ಜನಜೀವನ ಅಸ್ತವ್ಯಸ್ತವಾಗಿದೆ. ನಮ್ಮ ಮೆಟ್ರೋ ಸೇವೆಗಳು ವಿಳಂಬವಾಗಿದ್ದು, ಅನೇಕ ಪ್ರದೇಶಗಳಲ್ಲಿ ವಿದ್ಯುತ್ ಕಡಿತದ ವರದಿಯಾಗಿದೆ. ಐಎಂಡಿ ಪ್ರಕಾರ, ಬೆಂಗಳೂರು ನಗರದಲ್ಲಿ ಮೇ 21 ರಂದು ರಾತ್ರಿ 8.30 ರವರೆಗೆ 44.2 ಮಿ.ಮೀ ಮಳೆಯಾಗಿದ್ದರೆ, ಎಚ್ಎಎಲ್ ಪ್ರದೇಶದಲ್ಲಿ 3.8 ಮಿ.ಮೀ ಮಳೆಯಾಗಿದೆ.
ಇನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳಲ್ಲಿ ಮೇ 22 ರಂದು ಬೆಳಿಗ್ಗೆ 10.30ರ ವೇಳೆಗೆ ಬರೋಬ್ಬರಿ 131 ಮರಗಳು ಧರೆಗುರುಳಿವೆ ಮತ್ತು 192 ಕೊಂಬೆಗಳು ಉರುಳಿ ಬಿದ್ದಿರುವ ಘಟನೆಗಳು ವರದಿಯಾಗಿವೆ. ಬೆಳಿಗ್ಗೆಯಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಒಟ್ಟು 63 ಮರಗಳು ಹಾಗೂ 95 ಮರದ ರಂಬೆ - ಕೊಂಬೆಗಳನ್ನು ತೆರವುಗೊಳಿಸಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೆಂಗಳೂರಲ್ಲಿ ಮರಗಳು ಧರೆಗುರುಳಿರಿವುದರಿಂದ ಕಾರು, ಬೈಕ್ ಸೇರಿದಂತೆ ಹಲವು ವಾಹನಗಳು ಜಖಂ ಆಗಿದ್ದು ಭಾರೀ ಹಾನಿ ಸಂಭವಿಸಿದೆ.











Click it and Unblock the Notifications