Bengaluru Property: ಬೆಂಗಳೂರಿನಲ್ಲಿ ಈ ಪ್ರಾಪರ್ಟಿಗಳಿಗೆ ಹೊಸ ಶಾಕ್ ಕೊಡಲು ಮುಂದಾದ ಜಿಬಿಎ: ಕೃಷ್ಣಬೈರೇಗೌಡ ಹೇಳಿದ್ದೇನು
Bengaluru Property: ಬೆಂಗಳೂರಿನಲ್ಲಿ ಖಾಲಿ ನಿವೇಶನಗಳ ಸ್ವಚ್ಛತೆ ವಿಷಯದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಕಠಿಣ ನಿಯಮಗಳನ್ನು ಅನುಸರಿಸುತ್ತಿದೆ. ಬೆಂಗಳೂರು ನಗರದ ಐದೂ ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸ್ವಚ್ಛಗೊಳಿಸಬೇಕಾದ ಖಾಲಿ ನಿವೇಶನಗಳನ್ನು ಗುರುತಿಸಿ, ಅವುಗಳಿಗೆ ನೋಟಿಸ್ ಅಂಟಿಸಿ, ತ್ವರಿತವಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಗರದಲ್ಲಿ ಖಾಲಿ ನಿವೇಶನಗಳ ಸ್ವಚ್ಛತಾ ಕಾರ್ಯ ಕೈಗೊಳ್ಳುವ ಕುರಿತು ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಖಾಲಿ ನಿವೇಶನಗಳ ಮಾಲೀಕರು ಸ್ವತಃ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಆಗಸ್ಟ್ 22ರವರೆಗೆ ಗಡುವು ನೀಡಲಾಗಿತ್ತು.ಆದರೆ, ಈ ಪೈಕಿ ಕೆಲವೇ ಪ್ರದೇಶಗಳಲ್ಲಿ ಶೇ.20ರಷ್ಟು ನಿವೇಶನಗಳ ಮಾಲೀಕರು ಮಾತ್ರ ಸ್ವತಃ ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ. ಎಲ್ಲಾ ಖಾಲಿ ನಿವೇಶನಗಳಲ್ಲಿಯೂ ಪರಿಣಾಮಕಾರಿಯಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕಿದ್ದು, ಈ ನಿಟ್ಟಿನಲ್ಲಿ ಐದೂ ನಗರ ಪಾಲಿಕೆಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಸ್ವಚ್ಛತಾ ಕಾರ್ಯವನ್ನು ಸಕ್ರಿಯವಾಗಿ ನಡೆಸಬೇಕು. ಇದಕ್ಕೆ ತಗಲುವ ವೆಚ್ಚವನ್ನು ಆಸ್ತಿ ತೆರಿಗೆ ಮೂಲಕ ವಸೂಲಿ ಮಾಡಬೇಕು ಎಂದು ಸೂಚಿಸಿದ್ದಾರೆ.

Bengaluru Property: ಖಾಲಿ ನಿವೇಶನಗಳನ್ನು ಗುರುತಿಸಿ ನೋಟಿಸ್ ಅಂಟಿಸಿ
ಇನ್ನು ಬೆಂಗಳೂರಿನಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕಾದ ಖಾಲಿ ನಿವೇಶನಗಳನ್ನು ಕಂದಾಯ ಅಧಿಕಾರಿಗಳು ಗುರುತಿಸಿ ಪಟ್ಟಿ ಮಾಡಬೇಕು. ಪಟ್ಟಿ ಮಾಡಲಾದ ನಿವೇಶನಗಳಿಗೆ ಮಾರ್ಷಲ್‌ಗಳು ಹಾಗೂ ಕಿರಿಯ ಆರೋಗ್ಯ ಪರಿವೀಕ್ಷಕರು ನೋಟೀಸ್ ಅಂಟಿಸಬೇಕು. ಬಳಿಕ ಪಾಲಿಕೆಯ ವತಿಯಿಂದ ನಿವೇಶನಗಳ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಬೇಕು. ಇದೇ ಗುರುವಾರದಿಂದ ಎಲ್ಲಾ ನಗರ ಪಾಲಿಕೆಗಳಲ್ಲಿಯೂ ಖಾಲಿ ನಿವೇಶನಗಳ ಸ್ವಚ್ಛತಾ ಕಾರ್ಯವನ್ನು ಆರಂಭಿಸಬೇಕು. ಮುಂದಿನ ಸೋಮವಾರದಿಂದ ಈ ಕಾರ್ಯವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ನಗರದಾದ್ಯಂತ ಖಾಲಿ ನಿವೇಶನಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಜೆಸಿಬಿ, ಟಿಪ್ಪರ್, ಟ್ರ್ಯಾಕ್ಟರ್ ಹಾಗೂ ಅಗತ್ಯ ಸಿಬ್ಬಂದಿ ಸೇರಿದಂತೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಸ್ವಚ್ಛತಾ ಕಾರ್ಯಕ್ಕಾಗಿ ಏಜೆನ್ಸಿಗಳನ್ನು ಗುರುತಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಖಾಲಿ ನಿವೇಶನಗಳ ಸ್ವಚ್ಛತಾ ಕಾರ್ಯ ಕೈಗೊಳ್ಳುವ ಮೊದಲು ಮತ್ತು ನಂತರದ ಸ್ಥಿತಿಯನ್ನು ಜಿಯೋ-ಲೊಕೇಷನ್ ಸಹಿತ ವೀಡಿಯೋದಲ್ಲಿ ಕಡ್ಡಾಯವಾಗಿ ದಾಖಲಿಸಬೇಕು. ಈ ವೀಡಿಯೋ ದಾಖಲೆಗಳ ಆಧಾರದ ಮೇಲೆಯೇ ಗುತ್ತಿಗೆದಾರರಿಗೆ ಹಣ ಪಾವತಿಸುವ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ಕೊಡಲಾಗಿದೆ.
ಎಂಡ್-ಟು-ಎಂಡ್ ಮಾಹಿತಿ ಲಭ್ಯವಾಗಲಿ
ಸ್ವಚ್ಛತಾ ಕಾರ್ಯ ಕೈಗೊಂಡ ಬಳಿಕ ಸಂಗ್ರಹವಾಗುವ ತ್ಯಾಜ್ಯ ಹಾಗೂ ಭಗ್ನಾವಶೇಷಗಳನ್ನು ರಸ್ತೆ ಬದಿ ಅಥವಾ ಇತರೆ ಖಾಲಿ ಜಾಗಗಳಲ್ಲಿ ವಿಲೇವಾರಿ ಮಾಡಬಾರದು. ಪಾಲಿಕೆ ಗುರುತಿಸಿರುವ ಅಧಿಕೃತ ಸ್ಥಳಗಳಲ್ಲಿಯೇ ಅವುಗಳನ್ನು ವಿಲೇವಾರಿ ಮಾಡುವುದನ್ನು ಖಚಿತಪಡಿಸಿಕೊಳ್ಳಬೇಕು.
ಈ ಸಂಬಂಧ ಸ್ವಚ್ಛತಾ ಕಾರ್ಯಕ್ಕಾಗಿ ಅಭಿವೃದ್ಧಿಪಡಿಸಿರುವ 'clear it' ತಂತ್ರಾಂಶದಲ್ಲಿ ಸ್ವಚ್ಛತಾ ಕಾರ್ಯದ ಸಂಪೂರ್ಣ ಮಾಹಿತಿಯು ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಅಲ್ಲದೆ ಮುಂದುವರಿದು ಸ್ವಚ್ಛತಾ ಕಾರ್ಯ ಕೈಗೊಳ್ಳದಿರುವ ಖಾಲಿ ನಿವೇಶನಗಳ ಮಾಹಿತಿಯನ್ನು ನಾಗರಿಕರು 'clear it' ತಂತ್ರಾಂಶದ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಬೇಕು. ಈ ಸಂಬಂಧ ತಂತ್ರಾಂಶದಲ್ಲಿ ಅಗತ್ಯ ವ್ಯವಸ್ಥೆಯನ್ನು ಕೂಡಲೇ ಅಭಿವೃದ್ಧಿಪಡಿಸಬೇಕು ಎಂದು ಸೂಚಿಸಿದರು.


Click it and Unblock the Notifications
