Bengaluru Rain: ಮಳೆ ನೋಡಲಿದೆ ನಾಲ್ಕು ತಿಂಗಳು ಬಿಸಿಲಿನಿಂದ ಬೆಂದ ಬೆಂಗಳೂರು ನಗರ!
ಬೆಂಗಳೂರು, ಏಪ್ರಿಲ್. 19: ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ನಾಲ್ಕು ತಿಂಗಳಿಗೂ ಹೆಚ್ಚು ಕಾಲ ಇದ್ದ ಒಣಹವೆ ಅಂತಿಮವಾಗಿ ಕೊನೆಗೊಳ್ಳಲಿದೆ ಎಂಬುದನ್ನು ಸೂಚಿಸಿದೆ. ಮಳೆಯಿಲ್ಲದೆ, ನೀರಿಲ್ಲದೆ ಬಿಸಿಲಿನ ಬೇಗೆಯಲ್ಲಿ ಪರದಾಡುತ್ತಿರುವ ಸಿಲಿಕಾನ್ ಸಿಟಿ ಜನ ಕೊಂಚ ನೆಮ್ಮದಿಯ ನಿಟ್ಟುಸಿರು ಬಿಡಲಿದ್ದಾರೆ.
ಭಾರತೀಯ ಹವಾಮಾನ ಇಲಾಖೆ (IMD) ಯ ತಾಜಾ ಹವಾಮಾನ ಮುನ್ಸೂಚನೆಯ ಪ್ರಕಾರ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಮುಂಬರುವ ದಿನಗಳಲ್ಲಿ ಮಳೆ ಬೀಳಲಿದೆ. ಏಪ್ರಿಲ್ 19ರ ಶುಕ್ರವಾರದಿಂದ ಏಪ್ರಿಲ್ 23ರ ಮಂಗಳವಾರದವರೆಗೆ ಮಳೆಯಾಗಲಿದೆ ಎಂದು ಹಮಾವಾನ ಇಲಾಖೆ ಸೂಚಿಸಿದೆ.

ಈಗಾಗಲೇ ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಮಳೆಯಾಗಿರುವುದು ಬೆಂಗಳೂರಿಗರಿಗೆ ಸಮಾಧಾನ ತಂದಿದೆ. ಹೀಗಾಗಿಯೇ ಇಂದು, ನಾಳೆ ಮಳೆಯಾಗಲಿದೆ ಎಂಬ ನಿರೀಕ್ಷೆಯಲ್ಲಿರುವ ಮಂದಿಗೆ ಹವಾಮಾನ ಇಲಾಕೆಯ ಮುನ್ಸೂಚನೆ ಮತ್ತಷ್ಟು ನೆಮ್ಮದಿ ನೀಡಿದೆ.
ಇನ್ನು, ಹವಾಮಾನ ಇಲಾಖೆ ನಿರೀಕ್ಷೆಯಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರು, ವಿಜಯನಗರ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಶುಕ್ರವಾರ ಭಾರೀ ಮಳೆಯ ಎಚ್ಚರಿಕೆಯನ್ನು ಇಲಾಖೆ ನೀಡಿದೆ. "ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಏಪ್ರಿಲ್ 19 ರವರೆಗೆ ಬಿಸಿ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಏಪ್ರಿಲ್ 21 ರವರೆಗೆ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಗಾಳಿಯ ವೇಗದೊಂದಿಗೆ ಗುಡುಗು ಸಹಿತ ಮಿಂಚಿನ ಸಹಿತ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ.
ಬೆಂಗಳೂರು ನಗರದಲ್ಲಿ ಮಳೆಯ ಮುನ್ಸೂಚನೆ
ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಮುಂದಿನ 48 ಗಂಟೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಲಘು ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಡಿಗ್ರಿ ಸೆಲ್ಸಿಯಸ್ ಮತ್ತು 23 ಡಿಗ್ರಿ ಸೆಲ್ಸಿಯಸ್ ಆಗಿರಬಹುದು ಎಂದೂ ಮಾಹಿತಿ ನೀಡಿದೆ.












Click it and Unblock the Notifications