Bengaluru Rain: ಮಳೆನೀರು ನಿಂತು ಜನರಿಗೆ ತೊಂದರೆ ಆಗದಂತೆ ಕ್ರಮ: ಅಧಿಕಾರಿಗಳಿಗೆ ಮಹೇಶ್ವರ್ ರಾವ್ ಖಡಕ್ ಸೂಚನೆ

ಬೆಂಗಳೂರು: ವರ್ತೂರು ಮುಖ್ಯರಸ್ತೆಯ ಜಾಮಿಯಾ ಮಸೀದಿ ಸಮೀಪದ ಪ್ರದೇಶದಲ್ಲಿ ಮಳೆನೀರು ಸರಾಗವಾಗಿ ಹರಿದುಹೋಗಲು ಅಡಚಣೆಯಾಗಿರುವ ಅಂಶಗಳನ್ನು ಪರಿಶೀಲಿಸಿ, ನೀರುಗಾಲುವೆ ವ್ಯವಸ್ಥೆಯನ್ನು ಸಮರ್ಪಕವಾಗಿ ಪರಿಶೀಲಿಸುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚಿಸಿದರು.

ಮಳೆನೀರು ನಿಲುಗಡೆಯಾಗುತ್ತಿರುವ ಸ್ಥಳದಲ್ಲಿ ಅಗತ್ಯ ಪರಿಹಾರ ಕ್ರಮಗಳನ್ನು ತ್ವರಿತವಾಗಿ ಕೈಗೊಂಡು, ನೀರು ನಿಲ್ಲದಂತೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಸಮಸ್ಯೆ ಮರುಕಳಿಸದಂತೆ ಅಗತ್ಯ ಕಾಮಗಾರಿಗಳನ್ನು ಕೈಗೊಂಡು ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸುವಂತೆ ನಿರ್ದೇಶನ ನೀಡಿದರು. ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ತೊಂದರೆಯಾಗದಂತೆ ಮಳೆನೀರು ಹರಿವಿನ ವ್ಯವಸ್ಥೆಯನ್ನು ಸಮರ್ಪಕಗೊಳಿಸಿ, ಕೈಗೊಂಡ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Bengaluru Rain Maheshwar Rao Directs Officials to Ensure Smooth Rainwater Drainage Near Varthur Main Road

ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಹೋಪ್‌ಫಾರ್ಮ್ ಜಂಕ್ಷನ್, ವರ್ತೂರು ಕೋಡಿ ಜಂಕ್ಷನ್, ವರ್ತೂರು ಮುಖ್ಯ ರಸ್ತೆ, ವರ್ತೂರು, ವರ್ತೂರು ಪೊಲೀಸ್ ಠಾಣೆ ಬಸ್ ಸ್ಟಾಪ್ ಬಳಿ ಹಾಗೂ ಗುಂಜೂರು ಜಂಕ್ಷನ್ ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ರಸ್ತೆ, ಕೆಳಸೇತುವೆ, ಮೇಲ್ಸೇತುವೆ, ಪೈಪ್‌ಲೈನ್, ಪಾದಚಾರಿ ಮಾರ್ಗ, ನೀರು ನಿಲುಗಡೆ ಹಾಗೂ ವಿವಿಧ ಮೂಲಸೌಕರ್ಯ ಕಾಮಗಾರಿಗಳ ಪರಿಶೀಲನೆ ನಡೆಸಿದರು‌.

ಅಗತ್ಯ ಕ್ರಮಕ್ಕೆ ಅಧಿಕಾರಿಗಳಿಗೆ ನಿರ್ದೇಶನ

ಗುಂಜೂರು ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ವಿಳಂಬವಾಗದಂತೆ ಅಗತ್ಯ ಕ್ರಮ ಕೈಗೊಂಡು, ಕಾಮಗಾರಿಗೆ ವೇಗ ನೀಡುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು‌. ಸ್ಥಳೀಯವಾಗಿ ಸಾರ್ವಜನಿಕರಿಗೆ ಎದುರಾಗುತ್ತಿರುವ ಸಮಸ್ಯೆಗಳು ಹಾಗೂ ವಿವಿಧ ಕಾಮಗಾರಿಗಳ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ಬಾಕಿ ಇರುವ ಕಾಮಗಾರಿಗಳನ್ನು ತ್ವರಿತವಾಗಿ ಕೈಗೆತ್ತಿಕೊಂಡು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಹಾಗೂ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವರ್ತೂರು ಸೋಪಾನ ಅಂಡ್ ಮೋರ್ ಸಮೀಪ ನಡೆಯುತ್ತಿರುವ ಗುಂಜೂರು ರಸ್ತೆ ನಿರ್ಮಾಣ ಕಾಮಗಾರಿಯ ಪ್ರಗತಿ ಪರಿಶೀಲಿಸಿ, ಗುಂಜೂರು ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ವಿಳಂಬವಾಗದಂತೆ ಅಗತ್ಯ ಕ್ರಮ ಕೈಗೊಂಡು, ಕಾಮಗಾರಿಗೆ ವೇಗ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ರಾಜಿಯಾಗದಂತೆ ನಿಗದಿತ ಮಾನದಂಡಗಳನ್ನು ಪಾಲಿಸಿ, ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು. ಜೊತೆಗೆ ಕಾಮಗಾರಿ ಪೂರ್ಣಗೊಳ್ಳುವವರೆಗೆ ಸ್ಥಳದಲ್ಲಿನ ಸಂಚಾರಕ್ಕೆ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಜಂಕ್ಷನ್ ಸುತ್ತಮುತ್ತ ಸ್ವಚ್ಛತೆ ಕಾಪಾಡಿ

ಗುಂಜೂರು ಜಂಕ್ಷನ್ ಸುತ್ತಮುತ್ತಲಿನ ಪ್ರದೇಶದಲ್ಲಿರುವ ನಿರ್ಮಾಣ ತ್ಯಾಜ್ಯ ಹಾಗೂ ಇತರೆ ವಸ್ತುಗಳನ್ನು ತೆರವುಗೊಳಿಸಿ, ಪ್ರದೇಶವನ್ನು ಸ್ವಚ್ಛವಾಗಿಡಬೇಕು. ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಜಂಕ್ಷನ್ ಸುತ್ತಮುತ್ತ ನಿರಂತರವಾಗಿ ಸ್ವಚ್ಛತೆ ಕಾಪಾಡುವಂತೆ ನಿರ್ದೇಶನ ನೀಡಿದರು.

ರಸ್ತೆ ಸುರಕ್ಷತಾ ಫಲಕಗಳನ್ನು ಅಳವಡಿಸಿ

ಜಂಕ್ಷನ್ ವ್ಯಾಪ್ತಿಯಲ್ಲಿ ವಾಹನ ಸಂಚಾರದ ಸುರಕ್ಷತೆಗೆ ಅಗತ್ಯವಿರುವ ಕ್ರಮಗಳ ಕುರಿತು ಪರಿಶೀಲಿಸಿ, ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಸ್ಪಷ್ಟವಾಗಿ ಮಾರ್ಗದರ್ಶನ ದೊರೆಯುವಂತೆ ಅಗತ್ಯವಿರುವ ಸ್ಥಳಗಳಲ್ಲಿ ರಸ್ತೆ ಸುರಕ್ಷತಾ ಸೂಚನಾ ಫಲಕಗಳನ್ನು ಸೂಕ್ತವಾಗಿ ಅಳವಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗುಂಜೂರು ಜಂಕ್ಷನ್ ವ್ಯಾಪ್ತಿಯಲ್ಲಿ ಕಂಡುಬರುವ ರಸ್ತೆ ಗುಂಡಿಗಳನ್ನು ತ್ವರಿತವಾಗಿ ದುರಸ್ತಿಪಡಿಸಿ, ವಾಹನಗಳ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪಾದಚಾರಿ ಮಾರ್ಗವನ್ನು ಅಭಿವೃದ್ಧಿಪಡಿಸಿ

ಗುಂಜೂರು ಜಂಕ್ಷನ್‌ನಲ್ಲಿ ಪಾದಚಾರಿ ಮಾರ್ಗದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡು, ಯಾವುದೇ ರೀತಿಯ ಅಡಚಣೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಬಳಕೆಗೆ ಅನುಕೂಲವಾಗುವಂತೆ ಪಾದಚಾರಿ ಮಾರ್ಗವನ್ನು ಅಭಿವೃದ್ಧಿಪಡಿಸುವಂತೆ ನಿರ್ದೇಶನ ನೀಡಿದರು.

ಕೆಳಸೇತುವೆ ಕಾಮಗಾರಿಗೆ ವೇಗ ನೀಡಿ

ಹೋಪ್‌ಫಾರ್ಮ್ ಜಂಕ್ಷನ್‌ನಲ್ಲಿ ನಡೆಯುತ್ತಿರುವ ಕೆಳಸೇತುವೆ ಕಾಮಗಾರಿ ಪರಿಶೀಲಿಸಿ, ಕಾಮಗಾರಿ ಪೂರ್ಣಗೊಳಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಸೂಚಿಸಿದರು.

ಕೆಳಸೇತುವೆ ಕಾಮಗಾರಿಗೆ ವೇಗ ನೀಡಿ, ನಿಗದಿತ ಅವಧಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಕಾಮಗಾರಿ ನಡೆಯುವ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರವಾಗಿ ಆರಂಭಿಸಿ, ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.

ದೇವಸ್ಥಾನವನ್ನು ಸೂಕ್ತ ಸ್ಥಳಕ್ಕೆ ಕ್ರಮ ಕೈಗೊಳ್ಳಿ

ಹೋಪ್‌ಫಾರ್ಮ್ ಜಂಕ್ಷನ್‌ನಲ್ಲಿರುವ ದೇವಸ್ಥಾನವನ್ನು ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸುವ ಕುರಿತು ಮುಖ್ಯ ಆಯುಕ್ತರು ಮಾಹಿತಿ ಪಡೆದರು. ಸಾರ್ವಜನಿಕರ ಸಂಚಾರ ಹಾಗೂ ಕೆಳಸೇತುವೆ ಕಾಮಗಾರಿಗೆ ಯಾವುದೇ ರೀತಿಯ ಅಡಚಣೆಯಾಗದಂತೆ ದೇವಸ್ಥಾನವನ್ನು ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸುವ ಕುರಿತು ಪರಿಶೀಲಿಸಿ, ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮೇಲ್ಸೇತುವೆ ಕಾಮಗಾರಿಗೆ ಅಗತ್ಯ ಕ್ರಮ ಕೈಗೊಳ್ಳಿ

ವರ್ತೂರು ಕೋಡಿ ಜಂಕ್ಷನ್‌ನಲ್ಲಿ ಮೇಲ್ಸೇತುವೆ ಕಾಮಗಾರಿಗೆ ಸಂಬಂಧಿಸಿದಂತೆ ಅಗತ್ಯ ಅನುಮತಿಗಳನ್ನು ಕೋರಲಾಗಿದೆಯೇ, ಅನುಮತಿಗಳು ದೊರೆತಿವೆಯೇ ಹಾಗೂ ಅನುಮತಿ ಪ್ರಕ್ರಿಯೆ ಯಾವ ಹಂತದಲ್ಲಿದೆ ಎಂಬುದನ್ನು ಪರಿಶೀಲಿಸಿ, ಸಂಪೂರ್ಣ ಮಾಹಿತಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಂಕ್ಷನ್‌ನಲ್ಲಿ ವಾಹನ ಸಂಚಾರಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಸಂಚಾರ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಆರಂಭವಾಗಬೇಕಿದ್ದ ಅಥವಾ ಬಾಕಿ ಉಳಿದಿರುವ ಕಾಮಗಾರಿಗಳ ಕುರಿತು ಪರಿಶೀಲಿಸಿ, ವಿಳಂಬಕ್ಕೆ ಕಾರಣಗಳನ್ನು ತಿಳಿದು, ಅಗತ್ಯ ಕ್ರಮ ಕೈಗೊಂಡು ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.

Bengaluru Rain: ಮಣಿಪಾಲ್ ಆಸ್ಪತ್ರೆ ಬಳಿ ಜಲಾವೃತ ಸಮಸ್ಯೆ ಪರಿಹರಿಸಿ

ಮಣಿಪಾಲ್ ಆಸ್ಪತ್ರೆ ಮುಂಭಾಗದಲ್ಲಿ ಮಳೆನೀರು ನಿಂತು ಜಲಾವೃತ ಉಂಟಾಗುತ್ತಿರುವ ಕುರಿತು ಮುಖ್ಯ ಆಯುಕ್ತರು ಅಧಿಕಾರಿಗಳಿಂದ ಮಾಹಿತಿ ಪಡೆದು, ಸಮಸ್ಯೆಗೆ ಕಾರಣವಾಗಿರುವ ಅಂಶಗಳ ಕುರಿತು ಚರ್ಚಿಸಿದರು.

ಮಳೆನೀರು ಸರಾಗವಾಗಿ ಹರಿದುಹೋಗುವಂತೆ ಅಗತ್ಯ ಒಳಚರಂಡಿ ವ್ಯವಸ್ಥೆಯನ್ನು ಪರಿಶೀಲಿಸಿ, ವಾಟರ್‌ಲಾಗಿಂಗ್‌ಗೆ ಕಾರಣವಾಗಿರುವ ಅಂಶಗಳನ್ನು ಗುರುತಿಸಿ ತ್ವರಿತವಾಗಿ ಪರಿಹರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಮಳೆ ಸಂದರ್ಭದಲ್ಲಿ ಮತ್ತೆ ನೀರು ನಿಲ್ಲದಂತೆ ಶಾಶ್ವತ ಪರಿಹಾರದ ಕ್ರಮಗಳನ್ನು ಕೈಗೊಂಡು, ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.

Bengaluru Rain: ರಸ್ತೆ ಗುಂಡಿಗಳನ್ನು ತ್ವರಿತವಾಗಿ ದುರಸ್ತಿಪಡಿಸಿ

ವರ್ತೂರು ಮುಖ್ಯರಸ್ತೆ ವ್ಯಾಪ್ತಿಯಲ್ಲಿ ಕಂಡುಬಂದ ರಸ್ತೆ ಗುಂಡಿಗಳಿಂದ ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ಉಂಟಾಗಬಹುದಾದ ತೊಂದರೆ ಕುರಿತು ಗಮನಹರಿಸಿದ ಮುಖ್ಯ ಆಯುಕ್ತರು, ಸುರಕ್ಷಿತ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಾರ್ವಜನಿಕರು ಹಾಗೂ ವಾಹನ ಸವಾರರ ಸುರಕ್ಷತೆಗೆ ಆದ್ಯತೆ ನೀಡಿ, ರಸ್ತೆ ಗುಂಡಿಗಳನ್ನು ತಕ್ಷಣ ದುರಸ್ತಿಪಡಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಸೂಚಿಸಿದರು.

ವರ್ತೂರು ವಿವಾ ಫಿಟ್ ಜಿಮ್ ಸಮೀಪದ ಪ್ರದೇಶಕ್ಕೆ ಭೇಟಿ ನೀಡಿ ರಸ್ತೆ ಹಾಗೂ ವಿವಿಧ ಕಾಮಗಾರಿಗಳ ಸ್ಥಿತಿಗತಿಯನ್ನು ಮುಖ್ಯ ಆಯುಕ್ತರು ಅವಲೋಕಿಸಿದರು. ಸ್ಥಳದಲ್ಲಿ ಸಂಗ್ರಹವಾಗಿರುವ ನಿರ್ಮಾಣ ತ್ಯಾಜ್ಯವನ್ನು (ಡೆಬ್ರಿಸ್) ತಕ್ಷಣ ತೆರವುಗೊಳಿಸಿ, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು. ರಸ್ತೆ ಗುಂಡಿಗಳನ್ನು ದುರಸ್ತಿಪಡಿಸಿ, ಬಾಕಿ ಇರುವ ಪೈಪ್‌ಲೈನ್ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+