Bengaluru Rain: ಬಿಬಿಎಂಪಿ ವ್ಯಾಪ್ತಿಯಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ
ಬೆಂಗಳೂರಿನ ಹಲವು ಭಾಗಗಳಲ್ಲಿ ಮೋಡಕವಿದ ವಾತಾವರಣ ಇದ್ದು, ಬಲವಾದ ಗಾಳಿ ಬೀಸುತ್ತಿದೆ. ಸೋಮವಾರ ರಾತ್ರಿ ನಗರದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಲವು ದಿನಗಳಿಂದ ಸುಮ್ಮನಾಗಿದ್ದ ಮಳೆ ಮತ್ತೆ ಅಬ್ಬರಿಸುವ ಮುನ್ಸೂಚನೆ ನೀಡಿದೆ. ಜೂನ್ 4 ರಂದು ಕೇರಳಕ್ಕೆ ಮುಂಗಾರು ಮಾರುತಗಳು ಪ್ರವೇಶಿಸಬೇಕಾಗಿತ್ತು, ಆದರೆ ನಾಲ್ಕು ದಿನ ತಡವಾಗಿ ಮುಂಗಾರು ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಿಬಿಎಂಪಿಯ ಮಹದೇವಪುರ ವ್ಯಾಪ್ತಿಯಲ್ಲಿ ಹೊರತುಪಡಿಸಿ ಉಳಿದ ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆಯ ಜೊತೆ ಭಾರಿ ಗಾಳಿ ಬೀಸುವ ಸಾಧ್ಯತೆ ಇರುವುದಾಗಿ ಕೂಡ ಎಚ್ಚರಿಕೆ ನೀಡಿದೆ. ಯಲಹಂಕ, ಬೊಮ್ಮನಹಳ್ಳಿ, ರಾಜರಾಜೇಶ್ವರಿ ನಗರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಪೂರ್ವ ವಲಯಗಳಲ್ಲಿ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ.
ಇನ್ನು ನಗರದಲ್ಲಿ ಭಾರಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮರಗಳ ಅಡಿಯಲ್ಲಿ ನಿಲ್ಲುವುದು ಮತ್ತು ಗಾಡಿಗಳನ್ನು ನಿಲ್ಲಿಸುವುದನ್ನು ತಪ್ಪಿಸಿದರೆ ಉತ್ತಮವಾಗಿರುತ್ತದೆ. ಸಂಜೆ ವೇಳೆಗೆ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಮುಂಚಿತವಾಗಿ ಮನೆ ತಲುಪಿದರೆ ಟ್ರಾಫಿಕ್ ಕಿರಿ ಕಿರಿ ತಪ್ಪಲಿದೆ.
ರಾಜ್ಯದ ಹಲವು ಭಾಗಗಳಲ್ಲಿ ಮಳೆ ಮುನ್ಸೂಚನೆ
ಇನ್ನು ರಾಜ್ಯಾದ್ಯಂತ ಕೂಡ ಸೋಮವಾರದಿಂದ ಉತ್ತಮ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಮಳೆಯಾಗಲಿದೆ ಎಂದು ತಿಳಿಸಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಚಾಮರಾಜನಗರ, ಕೊಡಗು, ಮಂಡ್ಯ ಜಿಲ್ಲೆಗಳ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಕೂಡ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ 24 ಗಂಟೆಯಲ್ಲಿ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡಹೆಜ್ಜೂರು ವ್ಯಾಪ್ತಿಯಲ್ಲಿ ರಾಜ್ಯದಲ್ಲೇ ಅತ್ಯಧಿಕ 81 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.












Click it and Unblock the Notifications