Bengaluru Road: ಪ್ರಮುಖ ರಸ್ತೆಯ ಗುಂಡಿಗಳ ರಿಪೇರಿ, ಕೆಳಸೇತುವೆ ಕಾಮಗಾರಿಗೆ ವೇಗಕ್ಕೆ ಜಿಬಿಎ ನಿರ್ದೇಶನ
ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ರಸ್ತೆ ಗುಂಡಿಗಳ ಸಮಸ್ಯೆ ಹೆಚ್ಚಾಗಿದ್ದನ್ನು ಖುದ್ದು ಸಾರ್ವಜನಿಕರು ವಿಡಿಯೋ ಸಹಿತ ಹಂಚಿಕೊಂಡು ಆಕ್ರೋಶ ಹೊರ ಹಾಕುತ್ತಿದ್ದಾರೆ. ಇದರ ಬೆನ್ನಲ್ಲೆ ಎಚ್ಚೆತ್ತಿರುವ ಜಿಬಿಎ ವ್ಯಾಪ್ತಿಯ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯು ಪ್ರಮುಖ ರಸ್ತೆಯ ರಸ್ತೆಗುಂಡಿಗಳ ದುರಸ್ತಿಗೆ ಮುಂದಾಗಿದೆ. ಜೊತೆಗೆ ಜಾಲಹಳ್ಳಿ ಕ್ರಾಸ್‌ನಲ್ಲಿ ಕೆಳ ಸೇತುವೆ ಕಾಮಗಾರಿ ಆರಂಭಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ನಿರ್ದೇಶಿಸಿದ್ದಾರೆ..
ಇಂದು ಶುಕ್ರವಾರ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ ವಿವಿಧ ಸ್ಥಳಗಳಿಗೆ ಇಂದು ಭೇಟಿ ನೀಡಿದ ಅವರು ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಜಾಲಹಳ್ಳಿ ಕ್ರಾಸ್‌ನಲ್ಲಿ ಉಂಟಾಗುತ್ತಿರುವ ವಾಹನ ದಟ್ಟಣೆಯನ್ನು ನಿವಾರಿಸುವ ಉದ್ದೇಶದಿಂದ ಕೆಳಸೇತುವೆ ನಿರ್ಮಿಸಲಾಗುತ್ತಿದೆ., ಕಾಮಗಾರಿಯನ್ನು ತ್ವರಿತವಾಗಿ ಪ್ರಾರಂಭಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕೆಳಸೇತುವೆ: 48 ಆಸ್ತಿ ಭೂಸ್ವಾಧೀನ
ಜಾಲಹಳ್ಳಿ ಕ್ರಾಸ್‌ನಲ್ಲಿ ಕೆಳಸೇತುವೆ ನಿರ್ಮಾಣಕ್ಕಾಗಿ ಒಟ್ಟು 48 ಆಸ್ತಿಗಳನ್ನು ಭೂಸ್ವಾಧೀನ ಮಾಡಿಕೊಳ್ಳುವ ಅಗತ್ಯತೆ ಇದೆ. ಈ ಪೈಕಿ ಈಗಾಗಲೇ 22 ಆಸ್ತಿಗಳನ್ನು ಭೂಸ್ವಾಧೀನಪಡಿಸಿಕೊಂಡು ಪಾಲಿಕೆಯ ವಶಕ್ಕೆ ಪಡೆಯಲಾಗಿದೆ. ಉಳಿದ 26 ಆಸ್ತಿಗಳನ್ನು ಕೂಡಲೇ ಭೂಸ್ವಾಧೀನಪಡಿಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕೆಳಸೇತುವೆ ಕಾಮಗಾರಿಗಾಗಿ ಈಗಾಗಲೇ ಭೂಸ್ವಾಧೀನಪಡಿಸಿಕೊಂಡಿರುವ ಜಾಗದಲ್ಲಿ ಸರ್ವೀಸ್ ರಸ್ತೆ ನಿರ್ಮಿಸಿ, ಆ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಬಳಿಕ ಕೆಳಸೇತುವೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಕೂಡಲೇ ವೈಟ್ ಟಾಪಿಂಗ್ ಕಾಮಗಾರಿ ಪ್ರಾರಂಭಿಸಿ
ಎನ್.ಟಿ.ಟಿ.ಎಫ್‌ನಿಂದ ಸೊನಾಲ್ ಗಾರ್ಮೆಂಟ್ ಮಾರ್ಗವಾಗಿ ಟಿವಿಎಸ್ ಕ್ರಾಸ್ ಜಂಕ್ಷನ್‌ವರೆಗೆ 2.5 ಕಿ.ಮೀ ಉದ್ದದ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈ ಪೈಕಿ ಜಲಮಂಡಳಿಯಿಂದ ಕೈಗೊಳ್ಳಲಾಗುತ್ತಿರುವ ಪೈಪ್‌ಲೈನ್ ಕಾಮಗಾರಿ ಪ್ರಗತಿಯಲ್ಲಿದ್ದು, ಅದರ ಮೇಲ್ವಿಚಾರಣೆ ನಡೆಸಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು.
ಪೈಪ್‌ಲೈನ್ ಕಾಮಗಾರಿ ಪೂರ್ಣಗೊಂಡ ಬಳಿಕ ರಸ್ತೆಯ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟು, ಮತ್ತೊಂದು ಭಾಗದಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಿ ವೈಟ್ ಟಾಪಿಂಗ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕು. ಕಾಮಗಾರಿಯನ್ನು ನಿಗದಿತ ಕಾಲಮಿತಿಯೊಳಗೆ ಮುಗಿಸಬೇಕು ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಮಾಡಬೇಕು.
ತ್ಯಾಜ್ಯ ತೆರವಿಗೆ ಸೂಚನೆ
ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ರಸ್ತೆ ಬದಿಯಲ್ಲಿ ತ್ಯಾಜ್ಯ ಸುರಿದಿರುವುದನ್ನು ಗಮನಿಸಿದ ಮುಖ್ಯ ಆಯುಕ್ತರು, ರಸ್ತೆ ಬದಿಯಲ್ಲಿ ಬಿಸಾಡಿರುವ ತ್ಯಾಜ್ಯವನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ, ಮುಂದಿನ ದಿನಗಳಲ್ಲಿ ಅದೇ ಸ್ಥಳದಲ್ಲಿ ಮತ್ತೆ ತ್ಯಾಜ್ಯ ಸುರಿಯದಂತೆ ಅಗತ್ಯ ಕ್ರಮ ಕೈಗೊಳ್ಳಲು ನಿರ್ದೇಶಿಸಿದರು.
ಕಂಠೀರವ ರಸ್ತೆ ಗುಂಡಿಗಳ ದುರಸ್ತಿಗೆ ಕ್ರಮ
ಕಂಠೀರವ ಸ್ಟುಡಿಯೋ ರಸ್ತೆಯಲ್ಲಿ ಗುಂಡಿಗಳು ಬಿದ್ದಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮುಖ್ಯ ಆಯುಕ್ತರು, ರಸ್ತೆಯಲ್ಲಿರುವ ಗುಂಡಿಗಳನ್ನು ತ್ವರಿತವಾಗಿ ಮುಚ್ಚುಬೇಕು. ಈಗಾಗಲೇ ರಸ್ತೆಯ ಒಂದು ಭಾಗದಲ್ಲಿ ಗುಂಡಿಗಳನ್ನು ಮುಚ್ಚುವ ಕೆಲಸ ಪ್ರಗತಿಯಲ್ಲಿದೆ. ಉಳಿದ ಭಾಗದಲ್ಲಿ ಮಳೆ ಬಾರದಿದ್ದರೆ ಇಂದು ರಾತ್ರಿಯೇ ಗುಂಡಿಗಳನ್ನು ಮುಚ್ಚುವ ಕೆಲಸವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಇಂಜಿನಿಯರ್‌ಗಳು ಮುಖ್ಯ ಆಯುಕ್ತರಿಗೆ ಮಾಹಿತಿ ನೀಡಿದರು.


Click it and Unblock the Notifications
