Teachers' Constituency By-Election: ಬೆಂಗಳೂರು ಶಿಕ್ಷಕರ ಕ್ಷೇತ್ರ ಉಪ ಚುನಾವಣೆ ಭರ್ಜರಿ ಸಿದ್ದತೆ : ಕಮಲ-ದಳ ಮೈತ್ರಿ?
ಬೆಂಗಳೂರು, ಜುಲೈ 24: 2023 ರ ವಿಧಾನಸಭಾ ಚುಣಾವಣೆ ಹಿನ್ನೆಲೆ ಬಿಜೆಪಿ ನಾಯಕ ಪುಟ್ಟಣ್ಣ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಇನ್ನೂ ರಾಜೀನಾಮೆಯಿಂದ ತೆರವಾದ ಬೆಂಗಳೂರು ಶಿಕ್ಷಣ ಕ್ಷೇತ್ರಕ್ಕೆ ಶೀಘ್ರದಲ್ಲೇ ಚುನಾವಣೆ ಘೋಷಣೆಯಾಗಲಿದ್ದು, ಈ ಬಾರೀ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯನ್ನ ಕಣಕ್ಕಿಳಿಸುವ ಸಾಧ್ಯತೆ ಇದೆ.
ಹೌದು, ಈಗಾಗಲೇ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ದ ವಿಧಾನಸಭೆ ಅಧಿವೇಶನದ ಹೊರಗೆ ಹಾಗೂ ಒಳಗೆ ಹೋರಾಟ ನಡೆಸಿರುವ ಬಿಜೆಪಿ ಹಾಗೂ ಜೆಡಿಎಸ್ ನಾಯಕರು, ಮುಂದೆ ಸರ್ಕಾರದ ವಿರುದ್ದ ಒಟ್ಟಾಗಿ ಹೋರಾಟ ಮಾಡುವುದಾಗಿ ಹೇಳಿದ್ದು, ಇತ್ತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿ ಚುನಾವಣೆ ಎದುರಿಸಲಿದೆ ಎನ್ನುವ ಮಾತುಗಳು ಕೇಳಿ ಬಂದಿದ್ದು, ಇದೀಗ ಬೆಂಗಳೂರು ಶಿಕ್ಷಣ ಕ್ಷೇತ್ರದ ಚುನಾವಣೆಯಲ್ಲೂ ಮೈತ್ರಿಯಾಗಲಿವೆ ಎಂದು ಹೇಳಲಾಗಿದೆ.

ಈಗಾಗಲೇ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಲೇ ನಾಲ್ಕು ಬಾರಿ ಗೆಲುವು ಸಾಧಿಸಿರುವ ಮಾಜಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರು ಈ ಬಾರೀ ಕಾಂಗ್ರೆಸ್‌ನಿಂದ ಸ್ಪರ್ಧಿಸುವುದು ಖಚಿತ ಎನ್ನಲಾಗಿದ್ದು, ಈಗಾಗಲೇ ಕ್ಷೇತ್ರಾದಲ್ಲಿ ಮತದಾರ ಶಿಕ್ಷಕರನ್ನು ಭೇಟಿಯಾಗಿ ಒಂದು ಸುತ್ತಿನ ಪ್ರಚಾರ ನಡೆಸಿದ್ದಾರೆ ಎನ್ನಲಾಗಿದೆ.
ಇತ್ತ ಶಿಕ್ಷಣ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯನ್ನ ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಲಾಗಿದ್ದು, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ ಜೆಡಿಎಸ್ನಿಂದ ಪ್ರಬಲ ಆಕಾಂಕ್ಷಿಯಾಗಿದ್ದು, ಇದುವರೆಗೂ ಬಿಜೆಪಿ ಅಭ್ಯರ್ಥಿ ಯಾರು ಎಂಬ ಸುಳಿವು ಸಿಕ್ಕಿಲ್ಲ. ಈಗಾಗಲೇ ಲೋಕಸಭಾ ಚುನಾವಣೆಗೆ ಮೈತ್ರಿ ಮಾತುಕತೆ ನಡೆಯುತ್ತಿರುವ ಬೆನ್ನಲ್ಲೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿ ಅಭ್ಯರ್ಥಿ ಕಣಕ್ಕಿಳಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಇನ್ನೂ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ಮುಂದಿನ ಲೋಕಸಭಾ ಚುನಾವಣೆಗೆ ಸಿದ್ದತೆಯನ್ನ ನಡೆಸಿ, ಕನಿಷ್ಠ 20 ಸ್ಥಾನಗಳನ್ನ ಗೆಲ್ಲುವ ಗುರಿ ಹಾಕಿಕೊಂಡಿರುವ ಕಾಂಗ್ರೆಸ್ ಗೆ ಠಕ್ಕರ್ ಕೊಡಲು ಬಿಜೆಪಿ ಹಾಗೂ ಜೆಡಿಎಸ್ ಮುಂದಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಗೆ ಬೆಂಗಳೂರು ಶಿಕ್ಷಕರ ಕ್ಷೇತ್ರ ಉಪಚುನಾವಣೆಯೇ ಮೈತ್ರಿಗೆ ಅಡಿಪಾಯ ಹಾಕಲಿದೆ ಎಂದು ಹೇಳಲಾಗಿದೆ.
2020 ರಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಆಯ್ಕೆಯಾಗಿದ್ದ ಪುಟ್ಟಣ್ಣ ಅವರು 2023 ರ ವಿಧಾನಸಭಾ ಚುನಾವಣೆಯಲ್ಲಿ ರಾಜಾಜಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಸೋಲು ಕಂಡಿದ್ರು. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಹಿನ್ನೆಲೆ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ರು. ಆದರೆ ರಾಜೀನಾಮೆ ನೀಡಿ ಆರು ತಿಂಗಳಲ್ಲಿ ಉಪ ಚುನಾವಣೆ ನಡೆಸಬೇಕು, ಆದರೇ ಈಗಾಗಲೇ ರಾಜೀನಾಮೆ ನೀಡಿ ನಾಲ್ಕು ತಿಂಗಳಾಗಿದ್ದು, ಇನ್ನೂ ಕೇವಲ ಎರಡು ತಿಂಗಳು ಮಾತ್ರ ಬಾಕಿ ಉಳಿದಿದ್ದು, ಸೆಪ್ಟೆಂಬರ್ ಒಳಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ.












Click it and Unblock the Notifications