ಬಿಜೆಪಿ-ಜೆಡಿಎಸ್ ಮೈತ್ರಿ; ಮೊದಲ ಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ!
ಬೆಂಗಳೂರು, ಫೆಬ್ರವರಿ 20; ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿಯಾದ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಪಡೆದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರದಲ್ಲಿದೆ.
ಮಂಗಳವಾರ ಬೆಂಗಳೂರು ಶಿಕ್ಷಕರ ಕ್ಷೇತ್ರ ಉಪ ಚುನಾವಣೆ-2024ರ ಮತ ಎಣಿಕೆ ನಡೆಯುತ್ತಿದೆ. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪುಟ್ಟಣ್ಣ 963 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಎ. ಪಿ. ರಂಗನಾಥ್ ಕಣಕ್ಕಿಳಿದಿದ್ದಾರೆ. ಈ ಉಪ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್‌ಗೆ ಕ್ಷೇತ್ರವನ್ನು ಬಿಟ್ಟುಕೊಟ್ಟಿದೆ.
ವಿಧಾನ ಪರಿಷತ್ ಸದಸ್ಯರಾಗಿದ್ದ, ಬಿಜೆಪಿಯಲ್ಲಿದ್ದ ಪುಟ್ಟಣ್ಣ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ ಕಾರಣಕ್ಕೆ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದೆ. ಮೊದಲ ಸುತ್ತಿನ ಎಣಿಕೆಯಲ್ಲಿಯೇ 4 ಬಾರಿಯ ಎಂಎಲ್‌ಸಿ ಪುಟ್ಟಣ್ಣ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಕರ್ನಾಟಕದ ವಿಧಾನಸಭೆ ಚುನಾವಣೆ 2023ರಲ್ಲಿ ಕಣಕ್ಕಿಳಿಯಲು ಪುಟ್ಟಣ್ಣ ಬಿಜೆಪಿ ತೊರೆದಿದ್ದರು. ಪರಿಷತ್ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದರು. ಕಾಂಗ್ರೆಸ್ ಸೇರಿದ್ದ ಅವರು ಬೆಂಗಳೂರಿನ ರಾಜಾಜಿನಗರ ಕ್ಷೇತ್ರದ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು.
ರಾಜಾಜಿನಗರ ಕ್ಷೇತ್ರದಲ್ಲಿ ಪುಟ್ಟಣ್ಣ 50564 ಮತಗಳನ್ನು ಪಡೆದು, ಬಿಜೆಪಿಯ ಅಭ್ಯರ್ಥಿ ಎಸ್. ಸುರೇಶ್ ಕುಮಾರ್ (58624 ಮತಗಳು) ವಿರುದ್ಧ ಸೋಲು ಕಂಡಿದ್ದರು. ಬಳಿಕ ಕಾಂಗ್ರೆಸ್ ಪಕ್ಷ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಘೋಷಣೆಯಾದ ಬಳಿಕ ಪುಟ್ಟಣ್ಣಗೆ ಟಿಕೆಟ್ ನೀಡಿತ್ತು.
2023ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ 19 ಕ್ಷೇತ್ರದಲ್ಲಿ ಜಯಗಳಿಸಿತು. ಚುನಾವಣೆ ಬಳಿಕ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲ ಘೋಷಣೆ ಮಾಡಿತು. ಎರಡೂ ಪಕ್ಷಗಳು ಒಟ್ಟಾಗಿ ಲೋಕಸಭೆ ಚುನಾವಣೆಯನ್ನು ಎದುರಿಸಲಿವೆ.
ಈ ಮೈತ್ರಿಕೂಟ ರಚನೆಯಾದ ಬಳಿಕ ಮೊದಲು ಎದುರಾಗಿರುವುದೇ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಉಪ ಚುನಾವಣೆ. ಈ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ. ಪಿ. ರಂಗನಾಥ್ ಕಣಕ್ಕಿಳಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ಪಕ್ಷ ಅಧಿಕಾರಕ್ಕೆ ಬಂದ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ. ಈ ಹಿಂದಿನ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಗೆದ್ದ ಅಭ್ಯರ್ಥಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದೆ. ಫಲಿತಾಂಶದ ಸ್ಪಷ್ಟ ಚಿತ್ರಣ ರಾತ್ರಿ ಸಿಗುವ ನಿರೀಕ್ಷೆ ಇದೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ 15 ಸಾವಿರಕ್ಕೂ ಅಧಿಕ ಮತದಾರರು ಹಕ್ಕು ಚಲಾವಣೆ ಮಾಡಿದ್ದಾರೆ. ಮತ ಎಣಿಕೆ ಕಾರ್ಯ ಮಂಗಳವಾರ ನಡೆಯುತ್ತಿದೆ. ಬ್ಯಾಲೆಟ್ ಪೇಪರ್‌ಗಳಲ್ಲಿ ಚಲಾವಣೆಯಾದ ಮತಗಳನ್ನು ಎಣಿಕೆ ಮಾಡಬೇಕಾದ ಕಾರಣ ಮತ ಎಣಿಕೆ ಪ್ರಕ್ರಿಯೆ ಮುಗಿದು ಫಲಿತಾಂಶ ರಾತ್ರಿಯ ವೇಳೆಗೆ ಪ್ರಕಟವಾಗುವ ನಿರೀಕ್ಷೆ ಇದೆ.
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಮುಂಬರುವ ಲೋಕಸಭೆ ಚುನಾವಣೆಯನ್ನು ಎದುರಿಸಲಿವೆ. ಯಾರಿಗೆ ಎಷ್ಟು ಸ್ಥಾನ? ಎಂಬುದು ಇನ್ನೂ ಅಂತಿಮವಾಗಿಲ್ಲ.ಜೆಡಿಎಸ್‌ಗೆ 2 ಅಥವ 5 ಸ್ಥಾನಗಳನ್ನು ಬಿಟ್ಟುಕೊಡಲಾಗುತ್ತದೆ ಎಂಬ ವರದಿಗಳಿವೆ. ಆದರೆ ಸೀಟು ಹಂಚಿಕೆ ಕುರಿತು ಅಂತಿಮ ಚಿತ್ರಣ ಇನ್ನೂ ಲಭ್ಯವಾಗಿಲ್ಲ.
2019ರಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಜೆಡಿಎಸ್ ಲೋಕಸಭೆ ಚುನಾವಣೆಯನ್ನು ಎದುರಿಸಿತ್ತು. ಈ ಸಲ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಯಾವ ಯಾವ ಕ್ಷೇತ್ರ ಜೆಡಿಎಸ್‌ಗೆ ಸಿಗಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.












Click it and Unblock the Notifications