Bengaluru Traffic: ಬೆಂಗಳೂರಿನ ಪ್ರಮುಖ ಜಂಕ್ಷನ್‌ಗಳಲ್ಲಿ ಸಂಚಾರ ದಟ್ಟಣೆ ನಿವಾರಣೆಗೆ ಯೋಜನೆ ರೂಪಿಸಿದ ಜಿಬಿಎ
Bengaluru Traffic: ಬೆಂಗಳೂರಿನ ಪ್ರಮುಖ ಜಂಕ್ಷನ್‌ಗಳಲ್ಲಿ ಟ್ರಾಫಿಕ್ ಜಾಮ್ ಕಂಟ್ರೋಲ್‌ಗೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದಾಗಿದೆ. ಪ್ರಮುಖ ಜಂಕ್ಷನ್‌ಗಳಲ್ಲಿ ಸಂಚಾರ ದಟ್ಟಣೆ ನಿವಾರಣೆಗೆ ಸಮಗ್ರ ಕಾರ್ಯಯೋಜನೆ ರೂಪಿಸುವುದಕ್ಕೆ ನಿರ್ಧರಿಸಲಾಗಿದೆ. ಇದರ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಪ್ರಮುಖ ಜಂಕ್ಷನ್‌ಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಟ್ರಾಫಿಕ್ ಜಾಮ್ ಸಮಸ್ಯೆಯನ್ನು ಕಡಿಮೆ ಮಾಡಲು ಉದ್ದೇಶಿಸಲಾಗಿದೆ. ಅಲ್ಲದೆ ಸಾರ್ವಜನಿಕರಿಗೆ ಸುಗಮ ಮತ್ತು ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಬೆಂಗಳೂರು ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್ ರಮೇಶ್ ಅವರು ಮತ್ತು ಜಂಟಿ ಪೊಲೀಸ್ ಆಯುಕ್ತರಾದ ಕಾರ್ತಿಕ್ ರೆಡ್ಡಿ ಅವರು ವಿವಿಧ ಪ್ರಮುಖ ಜಂಕ್ಷನ್‌ಗಳಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಪರಿಶೀಲನೆ ವೇಳೆ ರಸ್ತೆ ಮೂಲಸೌಕರ್ಯ ಅಭಿವೃದ್ಧಿ, ಅಂಡರ್‌ಪಾಸ್ ನಿರ್ಮಾಣ, ರಸ್ತೆ ಅಗಲೀಕರಣ, ಫ್ರೀ ಲೆಫ್ಟ್ ಟರ್ನ್, ಸ್ಕೈವಾಕ್ ನಿರ್ಮಾಣ, ಬಫರ್ ರಸ್ತೆ ಅಭಿವೃದ್ಧಿ ಹಾಗೂ ವಿವಿಧ ಇಲಾಖೆಗಳ ಯುಟಿಲಿಟಿಗಳ ಸ್ಥಳಾಂತರ ಸೇರಿದಂತೆ ಸಂಚಾರ ದಟ್ಟಣೆ ನಿವಾರಣೆಗೆ ಅಗತ್ಯವಾದ ಶಾಶ್ವತ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಅಗತ್ಯ ನಿರ್ದೇಶನಗಳನ್ನು ನೀಡಿದ್ದಾರೆ.
ಹೋಪ್ ಫಾರ್ಮ್ ಜಂಕ್ಷನ್‌ನಲ್ಲಿ ಕಾಮಗಾರಿಗೆ ವೇಗ ನೀಡಿ
ಹೋಪ್ ಫಾರ್ಮ್ ಜಂಕ್ಷನ್‌ನಲ್ಲಿ ಪ್ರಗತಿಯಲ್ಲಿರುವ ಅಂಡರ್‌ಪಾಸ್ ಕಾಮಗಾರಿಯನ್ನು ಪರಿಶೀಲಿಸಿದ ಆಯುಕ್ತರು, ಇದು ನಗರದ ಅತ್ಯಂತ ಸಂಚಾರ ದಟ್ಟಣೆ ಇರುವ ಪ್ರಮುಖ ಜಂಕ್ಷನ್‌ಗಳಲ್ಲಿ ಒಂದಾಗಿರುವುದರಿಂದ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಎಲ್ಲಾ ಅಡೆತಡೆಗಳನ್ನು ತ್ವರಿತವಾಗಿ ನಿವಾರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕಾಮಗಾರಿಗೆ ಅಡ್ಡಿಯಾಗಿರುವ ಗೇಲ್ ಅನಿಲ ಕೊಳವೆ ಮಾರ್ಗ, ಬೆಸ್ಕಾಂ ವಿದ್ಯುತ್ ಜಾಲ, ಟ್ರಾನ್ಸ್‌ಫಾರ್ಮರ್ ಕಂಬಗಳು ಹಾಗೂ ಇತರೆ ಯುಟಿಲಿಟಿಗಳನ್ನು ಸಂಬಂಧಪಟ್ಟ ಇಲಾಖೆಗಳ ಸಮನ್ವಯದೊಂದಿಗೆ ತಕ್ಷಣ ಸ್ಥಳಾಂತರಿಸಲು ಹಾಗೂ 3 ಪಾಳಿಯಲ್ಲಿ ಕಾಮಗಾರಿ ತ್ವರಿತ ಗತಿಯಲ್ಲಿ ಮುಗಿಸಲು ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಅಲ್ಲದೆ, ಕಾಮಗಾರಿ ಹಿನ್ನೆಲೆಯಲ್ಲಿ ಹಾಳಾಗಿರುವ ರಸ್ತೆಗಳನ್ನು ತಾತ್ಕಾಲಿಕವಾಗಿ ಡಾಂಬರೀಕರಣ ಮಾಡಿ ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸುವಂತೆ ಸೂಚಿಸಿದರು. ಕಾಮಗಾರಿ ನಡೆಯುವ ಪ್ರದೇಶಗಳಲ್ಲಿ ಅಗತ್ಯವಿದ್ದಲ್ಲಿ ಪರ್ಯಾಯ ಸಂಚಾರ ಮಾರ್ಗಗಳನ್ನು ಕಲ್ಪಿಸಲು ಸಂಚಾರಿ ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಸಾರ್ವಜನಿಕರಿಗೆ ಕನಿಷ್ಠ ತೊಂದರೆಯಾಗುವಂತೆ ಕ್ರಮವಹಿಸಲು ತಿಳಿಸಲಾಗಿದೆ.
ಅಲ್ಪೈನ್ ಇಕೋ ರಸ್ತೆಗೆ ರೈಲ್ವೆ ಅಂಡರ್‌ಪಾಸ್ ಪ್ರಸ್ತಾವನೆ ಪರಿಶೀಲನೆ
ಅಲ್ಪೈನ್ ಇಕೋ ರಸ್ತೆಯಿಂದ ಹೊರ ವರ್ತುಲ ರಸ್ತೆ ಸರ್ವಿಸ್ ರಸ್ತೆಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಉಂಟಾಗುತ್ತಿರುವ ಸಂಚಾರ ದಟ್ಟಣೆಯನ್ನು ಪರಿಶೀಲಿಸಿದ ಆಯುಕ್ತರು, ವಾಹನಗಳು ಸುತ್ತುವರಿದ ಮಾರ್ಗ ಬಳಸಬೇಕಾಗಿರುವುದರಿಂದ ಅನಗತ್ಯ ವಿಳಂಬ ಉಂಟಾಗುತ್ತಿದೆ ಎಂದು ತಿಳಿಸಿದರು. ಈ ಸಮಸ್ಯೆಗೆ ಶಾಶ್ವತ ಪರಿಹಾರವಾಗಿ ರೈಲ್ವೆ ಅಂಡರ್‌ಪಾಸ್ ನಿರ್ಮಾಣದ ಕಾರ್ಯಸಾಧ್ಯತೆಯನ್ನು ತಾಂತ್ರಿಕವಾಗಿ ಪರಿಶೀಲಿಸುವಂತೆ ತಿಳಿಸಲಾಗಿದೆ. ಪ್ರಸ್ತಾವಿತ ಕಾಮಗಾರಿ ವ್ಯಾಪ್ತಿಗೆ ಒಳಪಡುವ ಭೂಮಿಯ ಮಾಲೀಕತ್ವ, ಸರ್ವೇ ವಿವರಗಳು ಹಾಗೂ ಅಗತ್ಯ ಭೂಸ್ವಾಧೀನ ಕುರಿತು ಸಮಗ್ರ ವರದಿ ಸಿದ್ಧಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಮಾರತಹಳ್ಳಿ ಜಂಕ್ಷನ್‌ನಲ್ಲಿ ಹೆಚ್‌ಎಎಲ್ ರಸ್ತೆಯಿಂದ ಬರುವ ಪಾದಚಾರಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸ್ಕೈವಾಕ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ನಡೆಸಲಾಯಿತು. ಅದೇ ರೀತಿ ವರ್ತೂರು ಕೋಡಿಯಿಂದ ಹೊರ ವರ್ತುಲ ರಸ್ತೆಗೆ ಸಂಪರ್ಕಿಸುವ ತಿರುವಿನಲ್ಲಿ ಫ್ರೀ ಲೆಫ್ಟ್ ಟರ್ನ್ ವ್ಯವಸ್ಥೆ ಕಲ್ಪಿಸುವ ಮೂಲಕ ವಾಹನ ದಟ್ಟಣೆಯನ್ನು ಕಡಿಮೆ ಮಾಡುವ ಸಾಧ್ಯತೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ತಾಂತ್ರಿಕ ಪರಿಶೀಲನೆ ನಡೆಸುವಂತೆ ಸೂಚಿಸಿದರು.
ತೂಬರಹಳ್ಳಿ ವಿಬ್‌ಗ್ಯಾರ್ ಶಾಲೆ ರಸ್ತೆಯು ಕಿರಿದಾಗಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿದ ಆಯುಕ್ತರು, ಸಂಚಾರ ದಟ್ಟಣೆಯನ್ನು ಕಡಿಮೆಗೊಳಿಸುವ ಉದ್ದೇಶದಿಂದ ಹಾಲಿ ರಸ್ತೆಗೆ ಸಮಾನಾಂತರವಾಗಿ ಪ್ರಸ್ತಾಪಿತ ಬಫರ್ ರಸ್ತೆ ನಿರ್ಮಾಣಕ್ಕೆ ವಿವರವಾದ ಯೋಜನಾ ವರದಿ ಸಿದ್ಧಪಡಿಸುವ ಕಾರ್ಯ ಬಿ ಸ್ಮೈಲ್ ವತಿಯಿಂದ ಪ್ರಗತಿಯಲ್ಲಿದ್ದು, ಕಾಮಗಾರಿಯನ್ನು ಶೀಘ್ರ ಅನುಷ್ಠಾನಗೊಳಿಸಲು ಕ್ರವಹಿಸುವುದಾಗಿ ತಿಳಿಸಿದರು.
ಪಣತ್ತೂರು ಎಸ್ ಕ್ರಾಸ್‌ನಲ್ಲಿ ರಸ್ತೆ ಅಗಲೀಕರಣಕ್ಕೆ ಕ್ರಮ
ಪಣತ್ತೂರು ಎಸ್ ಕ್ರಾಸ್ ನಿಂದ ರೈಲ್ವೆ ಅಂಡರ್‌ಪಾಸ್ ಬಳಿ ಉಂಟಾಗುತ್ತಿರುವ ಸಂಚಾರ ದಟ್ಟಣೆಯನ್ನು ಪರಿಶೀಲಿಸಿದ ಆಯುಕ್ತರು, ತಿರುವಿನ ಭಾಗದಲ್ಲಿ ಅಗತ್ಯವಿರುವ ಖಾಸಗಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ರಸ್ತೆ ಅಗಲೀಕರಣ ಮಾಡುವ ಮೂಲಕ ನೇರ ಸಂಪರ್ಕ ಕಲ್ಪಿಸುವ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಭೂಸ್ವಾಧೀನ ಹಾಗೂ ತಾಂತ್ರಿಕ ಕಾರ್ಯಸಾಧ್ಯತೆಯ ಕುರಿತು ಶೀಘ್ರ ವರದಿ ಸಲ್ಲಿಸುವಂತೆ ಸೂಚಿಸಿದರು.
ಸಮನ್ವಯದೊಂದಿಗೆ ಬೆಂಗಳೂರು ಟ್ರಾಫಿಕ್ ಜಮ್ ಪರಿಹಾರಕ್ಕೆ ಕ್ರಮ
ಇನ್ನು ಪರಿಶೀಲನೆ ವೇಳೆ ಮಾತನಾಡಿದ ಪಾಲಿಕೆ ಆಯುಕ್ತ ಡಿ.ಎಸ್. ರಮೇಶ್ ಅವರು, ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಪ್ರಮುಖ ಜಂಕ್ಷನ್‌ಗಳಲ್ಲಿ ಸಂಚಾರ ದಟ್ಟಣೆ ಕಡಿಮೆಗೊಳಿಸಲು ನಗರ ಪಾಲಿಕೆ, ಸಂಚಾರಿ ಪೊಲೀಸ್ ಇಲಾಖೆ, ಬೆಸ್ಕಾಂ, ಗೇಲ್, ರೈಲ್ವೆ ಹಾಗೂ ಇತರೆ ಸೇವಾ ಪೂರೈಕೆ ಸಂಸ್ಥೆಗಳ ನಡುವೆ ಸಮನ್ವಯ ಸಾಧಿಸಿ ಶಾಶ್ವತ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ಅಲ್ಲದೆ ಸಾರ್ವಜನಿಕರಿಗೆ ಸುರಕ್ಷಿತ, ವೇಗದ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವುದು ನಗರ ಪಾಲಿಕೆಯ ಪ್ರಮುಖ ಆದ್ಯತೆಯಾಗಿದ್ದು, ಪ್ರತಿ ಕಾಮಗಾರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ನಿರಂತರವಾಗಿ ಸ್ಥಳ ಪರಿಶೀಲನೆ ನಡೆಸಿ ಪ್ರಗತಿ ಮೇಲ್ವಿಚಾರಣೆ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.


Click it and Unblock the Notifications
